ಬೆಂಗಳೂರು, ಏಪ್ರಿಲ್ 29: ಕರ್ನಾಟಕದ ಹಿರಿಯ ನಾಯಕ, ಚಾಮರಾಜನಗರ ಬಿಜೆಪಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ (V Srinivas prasad) (76) ಅವರು ನಿಧನರಾಗಿದ್ದಾರೆ. ಶ್ರೀನಿವಾಸ ಪ್ರಸಾದ್ ಅವರು ಮೂಲತಃ ಮೈಸೂರಿನವರು. ಎಂ.ವೆಂಕಟಯ್ಯ ಮತ್ತು ಪುಟ್ಟಮ್ಮ ದಂಪತಿಗೆ 1947ರಲ್ಲಿ ಜನಿಸಿದರು.
ರಾಜ್ಯ ಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದ ಶ್ರೀನಿವಾಸಪ್ರಸಾದ್ ಅವರು 1974ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿ 1974ಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪಚುನಾವಣೆ ಹಾಗೂ 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು.
ಬಳಿಕ 1980ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್(ಐ) ಅಭ್ಯರ್ಥಿಯಾಗಿ, ಹಾಗೂ 1984, 1989, 1991 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ 1999 ರಲ್ಲಿ ಜೆ.ಡಿ.ಯು ಅಭ್ಯರ್ಥಿಯಾಗಿ ಮತ್ತು 2019ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದರೊಂದಿಗೆ ಈ ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾದ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
1999ರಲ್ಲಿ ವಾಜಪೇಯಿ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ರಾಜ್ಯ ಸಚಿವರೂ ಆಗಿದ್ದರು. ಅಲ್ಲದೆ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ 2008 ಹಾಗೂ 2013 ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್ ಅವಿವಾಹಿತ ಮಹಿಳೆಯರಿಗೆ ಮಾಶಾಸನ ನೀಡುವ ಮಹತ್ವದ ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದಿದ್ದರು.
2017ರಲ್ಲಿ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಅನಾರೋಗ್ಯ ನೆಪದಲ್ಲಿ ಕೈಬಿಟ್ಟಿದ್ದರಿಂದ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವಿರುದ್ಧ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾದರು. ಬಳಿಕ 2018ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.
ಇದನ್ನೂ ಓದಿ: ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದ ಶ್ರೀನಿವಾಸ ಪ್ರಸಾದ್ 2019ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆ ಮೂಲಕ ಚಾಮರಾಜನಗರ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕಮಲ ಅರಳಿಸಿ ಬಿಜೆಪಿಗೆ ಜಯತಂದುಕೊಟ್ಟಿದ್ದರು. ಇದರೊಂದಿಗೆ ಈ ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾದ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಹೆಸರು ಕೆಡಿಸಿಕೊಳ್ಳದ ಶ್ರೀನಿವಾಸಪ್ರಸಾದ್ ಸ್ವಾಭಿಮಾನಿ ರಾಜಕಾರಣಿ, ಕಳಂಕರಹಿತ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.
ರಾಜಕೀಯ ಪ್ರವೇಶಿಸಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಕಳೆದ ಮಾರ್ಚ್ 17 ರಂದು ಸುವರ್ಣ ಮಹೋತ್ಸವ ಆಚರಿಸಿ ಚುನಾವಣಾ ರಾಜಕೀಯ ಹಾಗೂ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಸಹ ಪ್ರಸ್ತುತ ನಡೆದ ಲೋಕಸಭಾ ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್ ಅವರ ಬೆಂಬಲ ಪಡೆಯಲು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಪ್ರಯತ್ನ ನಡೆಸಿದ್ದವು.
ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಅವರ ಮೈಸೂರಿನ ನಿವಾಸಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದರು. ಆದರೆ ಯಾರಿಗೆ ಬೆಂಬಲ ಘೋಷಿಸದ ಶ್ರೀನಿವಾಸ ಪ್ರಸಾದ್ ತಟಸ್ಥ ನಿಲುವು ತಾಳಿದ್ದರು.
ದೀರ್ಘಕಾಲ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಇತ್ತೀಚೆಗೆ ಸಂಪೂರ್ಣ ವಿಶ್ರಾಂತಿಗೆ ಮೊರೆ ಹೋಗಿದ್ದರು. ಈ ನಡುವೆ ಕೆಲದಿನಗಳ ಹಿಂದೆ ಕಾಲಿಗೆ ಗಾಯಮಾಡಿಕೊಂಡು ಗಾಯ ದೊಡ್ಡದಾಗಿತ್ತು. ಇದರಿಂದ ಕಳೆದ ವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ