ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಆಗ್ರಹಿಸಿ ಎಲ್ಲೆಡೆಯಿಂದ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗೆ ಆಗ್ರಹಿಸಿ ಎಲ್ಲೆಡೆಯಿಂದ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಿಎಂ ಸೂಚನೆ ಕೊಟ್ಟಿದ್ದಾರೆ.
ಇದರ ಜೊತೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಯಡಿಯೂರಪ್ಪ ಸದನದಲ್ಲಿನ ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಅಪಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮೀಸಲಾತಿ ವಿಚಾರವಾಗಿ ಈಗಾಗಲೇ ಮುರುಗೇಶ್ ನಿರಾಣಿ, ಸಿ.ಸಿ. ಪಾಟೀಲ್ ಸೇರಿದಂತೆ ಸಮಾಜದ ಹಲವಾರು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಇಬ್ಬರು ಸ್ವಾಮೀಜಿಯವರನ್ನು ಮತ್ತು ಸಮಾಜದ ಮುಖಂಡರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಕಳುಹಿಸಿಕೊಟ್ಟಿದ್ದೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಅಧ್ಯಯನ ವರದಿ ಸಲ್ಲಿಸಲು ಕೋರಲಾಗಿದೆ ಎಂದು ಹೇಳಿದ್ದಾರೆ.
ನಮ್ಮದೊಂದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ಎಲ್ಲಾ ಸಂಸದರ ಜೊತೆ ಚರ್ಚಿಸಿ ಬಳಿಕ ರಾಷ್ಟ್ರೀಯ ನಾಯಕರಿಗೆ ಈ ವಿಷಯದ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಅಧಿವೇಶನದಲ್ಲಿ ಹೇಳಿದ್ದೆ. ನಮ್ಮ ಸರ್ಕಾರ ಹಿಂದೆ ಪಂಚಮಸಾಲಿ ಸಮಾಜವನ್ನು 3Bಗೆ ಸೇರಿಸಿರುವುದನ್ನು ನೆನಪಿಸಿಕೊಳ್ಳಬಹುದು. ರಾಜ್ಯದ ಸಿಎಂ ಆಗಿ ಎಲ್ಲಾ ಸಮುದಾಯಗಳ ಒಳಿತಿಗೆ ನಾನು ಬದ್ಧ. ಇಂಥ ಗಂಭೀರ ವಿಷಯದ ಬಗ್ಗೆ ತರಾತುರಿಯಲ್ಲಿ ನಿರ್ಧಾರ ಆಗುವುದಿಲ್ಲ. ತಜ್ಞರೊಂದಿಗೆ ಸಮಗ್ರವಾಗಿ ಚರ್ಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಕೋರುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
Published On - 9:39 pm, Fri, 5 February 21