ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಬಳ್ಳಾಪುರದ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ನಾಲ್ವರು ಸಾವಿಗೀಡಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಅವರು ಘಟನೆ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದರು.

ಚಿಕ್ಕಬಳ್ಳಾಪುರ, ಡಿಸೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಪರಿಹಾರ ವಿತರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಗುರುವಾರ ರಾತ್ರಿ ಅಜ್ಜವಾರ ಗೇಟ್ ಸಮೀಪ ಟಿಪ್ಪರ್ ಲಾರಿ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರನ್ನು ಮನೋಜ್, ನರಸಿಂಹಮೂರ್ತಿ, ನಂದೀಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದೆ. ಎಲ್ಲರೂ ಅಜ್ಜವಾರ ಗ್ರಾಮದ ನಿವಾಸಿಗಳಾಗಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಈ ದುರ್ಘಟನೆ ವಿಷಯವನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದರು. ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಅವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಎಂ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತರ ಪೈಕಿ ನರಸಿಂಹ ಅವರ ವಿವಾಹ ಕೆಲ ತಿಂಗಳ ಹಿಂದಷ್ಟೇ ನಡೆದಿತ್ತು. ಪ್ರೀತಿಸಿ ಮದುವೆಯಾಗಿದ್ದ ಯುವತಿ, ಮದುವೆಯಾದ ಆರು ತಿಂಗಳೊಳಗೇ ವಿಧಿಯಾಟಕ್ಕೆ ಗಂಡನನ್ನು ಕಳೆದುಕೊಂಡಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.
ಇದನ್ನೂ ಓದಿ: ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ: ಆರೇ ತಿಂಗಳಲ್ಲಿ ಪತಿ ದಾರುಣ ಸಾವು
ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಎಕ್ಸ್ ಸಂದೇಶ
ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ…
— Siddaramaiah (@siddaramaiah) December 26, 2025
ಚಿತ್ರದುರ್ಗದಲ್ಲಿ ನಡೆದ ಬಸ್ ದುರಂತದ ಆಘಾತ ಕಹಿ ನೆನಪು ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಚಿತ್ರದುರ್ಗ ಬಸ್ ಅಪಘಾತದಲ್ಲಿ ಈಗಾಗಲೇ 7 ಮಂದಿ ಮೃತಪಟ್ಟಿದ್ದು, ಸರಣಿ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:28 pm, Fri, 26 December 25




