
ಚಿಕ್ಕಬಳ್ಳಾಪುರ, ನವೆಂಬರ್ 13: ನಗರದಲ್ಲಿ 24 ಎಕರೆ ಸರ್ಕಾರಿ ಕೆರೆಗೆ ಇ-ಖಾತೆ ಸೃಷ್ಟಿಸಿ ಪರಭಾರೆ ಮಾಡಿರುವ ವಿಚಾರ ಕೆಡಿಪಿ ಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್, ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಕಿಡಿಕಾರಿದ ಸಚಿವರು, ಸರ್ಕಾರಿ ಕೆರೆ ಜಾಗ ಪರಭಾರೆಯಾಗಿದ್ದರೂ ಇದುವರೆಗೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ನಗರಸಭೆ ಆಯುಕ್ತ ಮನ್ಸೂರ್ ಅಲಿಯನ್ನು ಇನ್ನೂ ಏಕೆ ಅಮಾನತು ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭು ಅವರನ್ನು ಸಚಿವರು ಪ್ರಶ್ನಿಸಿದ್ದಾರೆ. ಸರ್ಕಾರಿ ಆಸ್ತಿಯನ್ನೇ ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ವಿಧಾನಸೌಧವನ್ನೇ ಬೇರೆಯವರಿಗೆ ಮಾರಿಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಜಿಲ್ಲಾಧಿಕಾರಿ ಪ್ರಭು ಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಇ-ಕೆವೈಸಿಗೆ ಹಣಕ್ಕೆ ಬೇಡಿಕೆ: ಬೆಂಗಳೂರಿನ ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು
24 ಎಕರೆ ಕೆರೆ ಜಾಗ ಪರಭಾರೆಯಾಗಿದ್ದರೂ ನಗರಾಭಿವೃದ್ಧಿ ಇಲಾಖೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ತಹಶೀಲ್ದಾರ್ ಕೂಡ ಕನಿಷ್ಠ ದೂರು ದಾಖಲಿಸಿಲ್ಲ ಎಂಬ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಪ್ರಕರಣದಲ್ಲಿ ಕಂದಾಯ ಇಲಾಖೆ, ನಗರಸಭೆ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ಕೂಡ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಕಾರ್ಯವೈಖರಿ ಬಗ್ಗೆಯೂ ಜಿಲ್ಲಾ ಉಸ್ತುವಾರಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಬಡವರು, ರೈತರು ಹಾಗೂ ದಲಿತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಬರುವವರಲ್ಲಿ ಶೇಕಡಾ 90ರಷ್ಟು ಮಂದಿ ರೈತರು ಮತ್ತು ಬಡವರಾಗಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸದೆ ಸುಮ್ಮನಿರುವುದೇ ದೊಡ್ಡ ತಪ್ಪು. ಈ ಸಂಬಂಧ ಜಿಲ್ಲಾಧಿಕಾರಿ ಪ್ರಭು ಅವರಿಂದ ಸಭೆಯಲ್ಲಿ ಸ್ಪಷ್ಟನೆ ಕೇಳಿದ್ದು, ಕೆಡಿಪಿ ಸಭೆಯಲ್ಲಿ ಸಚಿವ ಭೈರತಿ ಸುರೇಶ್ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.