ಚಿಕ್ಕಬಳ್ಳಾಪುರ: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿಯ ಸಂಬಂಧಿಯಿಂದ ಫೈರಿಂಗ್
ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್‌ಗೆ ರಸ್ತೆ ನಿರ್ಮಾಣಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಶಾಸಕ ವೈ.ಎ. ನಾರಾಯಣಸ್ವಾಮಿ ಅವರ ಸಂಬಂಧಿ ಫೈರಿಂಗ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಭೇಟಿ ನೀಡಿದ್ದಾರೆ.

ಚಿಕ್ಕಬಳ್ಳಾಪುರ, ಏಪ್ರಿಲ್ 23: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ (MLC YN Narayanaswamy) ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲು ಕ್ವಾರಿ ಕ್ರಷರ್‌ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಸಿನಿಮೀಯ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಸಕಲೇಶಕುಮಾರ್ ಅಟ್ಟಾಡಿಸಿ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ರವಿ ಅವರ ದೇಹದ ಒಳಗೆ ಹೊಕ್ಕಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ರವಿ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಹಾಗೂ ದೀಪ್ತಿ ಎನ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಸಕಲೇಶಕುಮಾರ್ನನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಕಲೇಶ ಕುಮಾರ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆ ಮುಂದೆ ಸ್ಥಳಿಯರು ಪ್ರತಿಭಟನೆ ನಡೆಸಿದರು.
ಮಂಚೇನಹಳ್ಳಿ ಠಾಣೆಯಲ್ಲಿ ಎಸ್ಪಿ ಕುಶಲ್ ಚೌಕ್ಸೆ ಮೊಕ್ಕಾಂ ಹೂಡಿದ್ದು, ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಪೊಲೀಸ್ ಠಾಣೆ ಬಳಿ ಸಾವಿರಾರು ಜನರು ಜಮಾಯಿಸಿದ್ದು, ಮಂಚೇನಹಳ್ಳಿ ಠಾಣೆ ಬಳಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:25 pm, Wed, 23 April 25