ಚಿಕ್ಕಬಳ್ಳಾಪುರದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಎರಡು ದಾರುಣ ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಗುಡಿಬಂಡೆ ತಾಲೂಕಿನ ಪೋಲಂಪಲ್ಲಿಯಲ್ಲಿ ವೃದ್ಧ ದಂಪತಿ ಸಾಲಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬೆಂಗಳೂರು ಸಮೀಪ ಮಾದನಾಯಕನಹಳ್ಳಿ ವ್ಯಾಪ್ತಿಯಲ್ಲಿ ಪತಿ ಕಳೆದುಕೊಂಡ ದುಃಖದಿಂದಾಗಿ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಚಿಕ್ಕಬಳ್ಳಾಪುರ, ಡಿಸೆಂಬರ್ 1: ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗುಡಿಬಂಡೆ ತಾಲೂಕಿನ ಪೋಲಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಜಂಗಾಲಹಳ್ಳಿ ಗ್ರಾಮದವರಾದ ಅಶ್ವತ್ಥಪ್ಪ (70) ಮತ್ತು ಹನುಮಕ್ಕ (65) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸಾಲ ಬಾಧೆಯಿಂದ ಬೇಸತ್ತ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಗುಡಿಬಂಡೆ ಪೋಲಿಸರು ಪರಿಶೀಲನೆ ನಡೆಸಿದ್ದಾರೆ.
ಮೂಲತಃ ಜಂಗಾಲಹಳ್ಳಿ ಗ್ರಾಮದವರಾದ ಅಶ್ವತ್ಥಪ್ಪ (70) ಮತ್ತು ಹನುಮಕ್ಕ (65) ಕೆಲ ವರ್ಷಗಳಿಂದ ಪೋಲಂಪಲ್ಲಿ ಗ್ರಾಮದಲ್ಲಿ ವಾಸವಾಗಿದ್ದರು. ಕುಟುಂಬದ ಆರ್ಥಿಕ ಪರಿಸ್ಥಿತಿ ಹದಗೆಟ್ಟು, ಸಾಲಬಾಧೆ ಹೆಚ್ಚಿದ್ದು, ಅದರಿಂದ ಬೇಸತ್ತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಬೆಳಗ್ಗೆ ಮನೆಯಲ್ಲಿ ಇಬ್ಬರೂ ಮೂರ್ಛೆ ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಮಾಹಿತಿ ನೀಡಿದ ನಂತರ ಗುಡಿಬಂಡೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮುಂದಿನ ತನಿಖೆ ಮುಂದುವರೆದಿದ್ದು, ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ
ಬೆಂಗಳೂರು ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದಗುಡ್ಡದಹಳ್ಳಿಯಲ್ಲಿ 31 ವರ್ಷದ ಸೌಭಾಗ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರದ ನಿವಾಸಿಯಾದ ಸೌಭಾಗ್ಯ, ಕಳೆದ ಎರಡೂವರೆ ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಒಂದು ವರ್ಷ ಹಿಂದೆ ಪತಿ ನಿಧನವಾದ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳೆಂದು ಕುಟುಂಬದವರು ಹೇಳಿದ್ದಾರೆ.
ಸೌಭಾಗ್ಯ ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ಮನೆ ಮತ್ತು ದೇವಾಲಯ ಹೊರತುಪಡಿಸಿ ಬೇರೆಲ್ಲೂ ಹೋಗುತ್ತಿರಲಿಲ್ಲವೆಂದು ನೆರೆಹೊರೆಯವರು ಹೇಳಿದ್ದು, ಇತ್ತೀಚಿನ ದಿನಗಳಲ್ಲಿ ಖಿನ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




