ಮೊದಲು ಬಿಜೆಪಿಯನ್ನು ಸರಿಮಾಡಿಕೊಳ್ಳಿ; ಡಿಕೆಶಿ ಸಿಎಂ ಆಗುತ್ತಾರೆಂಬ ಎಚ್. ವಿಶ್ವನಾಥ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು
ಕರ್ನಾಟಕದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆಯ ಮಾತು ಕೇಳಿಬರುತ್ತಿದೆ. ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಎಂ.ಸಿ. ಸುಧಾಕರ್ ನೀವು ಮೊದಲು ಬಿಜೆಪಿಯ ಮನೆ ಸರಿಮಾಡಿಕೊಳ್ಳಿ ಎಂದು ಲೇವಡಿ ಮಾಡಿದ್ದಾರೆ.
ಚಿಕ್ಕಬಳ್ಳಾಪುರ: ಡಿ.ಕೆ ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಮಾಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ. ಈ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಎಂ.ಸಿ. ಸುಧಾಕರ್, ಹೆಚ್. ವಿಶ್ವನಾಥ್ ಕಾಂಗ್ರೆಸ್ ಪಕ್ಷದ ಸದಸ್ಯರಲ್ಲ. ಹೆಚ್. ವಿಶ್ವನಾಥ್ ಅವರೇ ನೀವು ಮೊದಲು ಬಿಜೆಪಿಯ ಮನೆ ಸರಿಪಡಿಸಿಕೊಳ್ಳಿ. ನಿಮ್ಮ ಅನುಭವವನ್ನು ಬಿಜೆಪಿಯ ಉದ್ಧಾರಕ್ಕೆ ಬಳಸಿಕೊಳ್ಳಿ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ನಮ್ಮ ಪಕ್ಷದ ಹೈಕಮಾಂಡ್ಗೆ ಬಿಟ್ಟ ನಿರ್ಧಾರ. ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡೋಕೆ ಹೆಚ್. ವಿಶ್ವನಾಥ್ ಯಾರು? ಅವರೇನೂ ಕಾಂಗ್ರೆಸ್ ಪಕ್ಷದ ಸದಸ್ಯರಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಸಚಿವ ಎಂ.ಸಿ. ಸುಧಾಕರ್ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆ ಅಂತ್ಯ; ಮುಂದೇನು?
ಹೆಚ್. ವಿಶ್ವನಾಥ್ ಹೇಳಿದ್ದೇನು?:
ಕರ್ನಾಟಕದಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆಲ್ಲಲು ಡಿ.ಕೆ ಶಿವಕುಮಾರ್ ಅವರ ಕೊಡುಗೆ ಬಹಳಷ್ಟಿದೆ. ಹಾಗಾಗಿ, ಅವರು ಸಿಎಂ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 136 ಸ್ಥಾನ ಗೆಲ್ಲಲು ಡಿ.ಕೆ.ಶಿವಕುಮಾರ್ ಅವರ ಕೊಡುಗೆ ಬಹಳಷ್ಟಿದೆ. ಅವರ ಹಣವೂ ಸಾಕಷ್ಟು ಖರ್ಚಾಗಿದೆ. ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತುಕತೆಯಾಗಿತ್ತು. ಹೀಗಾಗಿ, ಮುಂದೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೆಚ್. ವಿಶ್ವನಾಥ್ ಹೇಳಿದ್ದರು.
ಇದನ್ನೂ ಓದಿ: ಏನೇ ಅಡ್ಡಿ ಬಂದರೂ ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ; ಭವಿಷ್ಯ ನುಡಿದ ವರೂರಿನ ಜೈನ ಮುನಿ
ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರಲ್ಲ. ಕಾಂಗ್ರೆಸ್ ಪಕ್ಷದ ಘನತೆ ಹಾಗೂ ಖ್ಯಾತಿಯನ್ನು ಕಟ್ಟಿಕೊಂಡು ಅವರಿಗೇನು ಆಗಬೇಕು? ಈ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗುತ್ತಿದೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರ ಹಿಂದೆ ಸಿದ್ದರಾಮಯ್ಯ ಕೈವಾಡ ಇರುವುದು ಖಚಿತ ಎಂದು ಹೆಚ್. ವಿಶ್ವನಾಥ್ ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ