ಚಿಕ್ಕಮಗಳೂರು: ಮಳೆ ಹಾಗೂ ರಸ್ತೆ ಕುಸಿತ ಕಾರಣದಿಂದ ಶಿರಾಡಿ ಘಾಟ್ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ಮಾರ್ಗವಾಗಿ ವಾಹನಗಳು ಸಂಚಾರ ನಡೆಸುತ್ತಿವೆ. ಬಹುತೇಕ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಂಚರಿಸುತ್ತಿರುವ ಕಾರಣದಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಚಾರ್ಮಾಡಿ ಘಾಟ್ನಲ್ಲಿ ವಾಹನಗಳ ಹೆಚ್ಚಳ ಹಿನ್ನೆಲೆ, ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿ ಘಾಟ್ನಲ್ಲಿ ಸಂಜೆ 7ರಿಂದ ಬೆಳಗ್ಗೆ 6ರವರೆಗೆ ವಾಹನ ಸಂಚಾರ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ನೀಡಿದ್ದಾರೆ. ರಸ್ತೆಗೆ ಉರುಳುತ್ತಿರುವ ಮರಗಳು, ಭೂಕುಸಿತ ಸಾಧ್ಯತೆ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ಬಂದ್ ಮಾಡಲಾಗಿದೆ. ಪ್ರಯಾಣಿಕರು ಈ ಬಗ್ಗೆ ಗಮನ ಹರಿಸುವುದು ಸೂಕ್ತ.
ದೋಣಿಗಲ್: ಇನ್ನೂ 3-4 ದಿನ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ
ಶಿರಾಡಿ ಘಾಟ್ನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕುಸಿತ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಹಾಸನ ಡಿಸಿ ಆರ್.ಗಿರೀಶ್ ಘಟನಾ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಇನ್ನೂ 3-4 ದಿನ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತ ಆಗಿರಲಿದೆ. ಮಳೆ ನಿಲ್ಲದ ಹಿನ್ನೆಲೆ ಲಘು ವಾಹನಗಳ ಸಂಚಾರಕ್ಕೂ ನಿಷೇಧ ವಿಧಿಸಲಾಗಿದೆ. ಈ ಬಗ್ಗೆ ಘಟನಾ ಸ್ಥಳ ಪರಿಶೀಲನೆ ಬಳಿಕ ಜಿಲ್ಲಾಧಿಕಾರಿ ಗಿರೀಶ್ ಹೇಳಿಕೆ ನೀಡಿದ್ದಾರೆ.
ರಾಜ್ಯದ ವಿವಿಧೆಡೆ ಶುಕ್ರವಾರವೂ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಕೆರೆ-ಕಟ್ಟೆಗಳು ಭರ್ತಿಯಾಗಿದ್ದು, ಹಲವು ಸೇತುವೆಗಳು ಮುಳುಗಡೆಯಾಗಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ.
ಪ್ರವಾಹಪೀಡಿತ ಪ್ರದೇಶಗಳಿಗೆ ನಾಲ್ಕು ಎನ್ಡಿಆರ್ಎಫ್ ತಂಡ ಕಳಿಸಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಕೃಷ್ಣಾ ನದಿಯಿಂದ ಹೊರ ಹರಿವು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದ 18 ತಾಲೂಕುಗಳಲ್ಲಿ ಹಾನಿ ಆಗಿದೆ. ಸಂತ್ರಸ್ತರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿದ್ದೇವೆ. ಹಾನಿ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಹತ್ತು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದೆ. ಇನ್ನೂ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗಬಹುದು ಎಂದು ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ: Shiradi Ghat: ಭೂಕುಸಿತವಾಗಿ ಮಂಗಳೂರು- ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟ್ ಬಂದ್; ಬದಲಿ ಮಾರ್ಗ ಇಲ್ಲಿದೆ
(Charmady Ghat Closed for Night Travel from 7 PM to 6 AM Shiradi Ghat)
Published On - 6:46 pm, Fri, 23 July 21