ಚಿಕ್ಕಮಗಳೂರು ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್

ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಿಂದ ತುಂಗಾ ಮತ್ತು ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿವೆ. ಶೃಂಗೇರಿಯಲ್ಲಿ ನೆರೆ ಆತಂಕವಿದೆ. ಶೃಂಗೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಶಾಲೆಗಳಿಗೆ ರಜೆ ಘೋಷಣೆಯಾಗಿದೆ. ಕಪ್ಪೆ ಶಂಕರ ದೇವಾಲಯ ಮುಳುಗಡೆಯಾಗಿದೆ.

ಚಿಕ್ಕಮಗಳೂರು ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್
ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್​
Updated By: ವಿವೇಕ ಬಿರಾದಾರ

Updated on: Jul 26, 2025 | 9:07 PM

ಚಿಕ್ಕಮಗಳೂರು, ಜುಲೈ 26: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamgaluru) ಪುಷ್ಯ ಮಳೆಯ ಆರ್ಭಟ ಜೋರಾಗಿದೆ. ಪಶ್ಚಿಮ ಘಟ್ಟಗಳ ಸಾಲಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಅಪಾಯದ ಮಟ್ಟ ಮೀರಿ ತುಂಗಾ, ಭದ್ರೆ ನದಿಗಳು ಭೋರ್ಗರೆಯುತ್ತಿದ್ದು ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಕೆರೆಕಟ್ಟಿ ಸಮೀಪದ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ (Sringeri-Mangalore National Highway 169) ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿರುವದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಶೃಂಗೇರಿ ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗಿದ್ದು ತುಂಗಾ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದ್ದು, ಮಠದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿ ತುಂಗಾ ನದಿ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಶೃಂಗೇರಿ ದೇವಾಲಯ ಸಮೀಪದ ತುಂಗಾ ನದಿಯ ತೀರದಲ್ಲಿರುವ ಕಪ್ಪೆ ಶಂಕರ ದೇವಾಲಯ ಸಂಪೂರ್ಣ ಮುಳುಗಡೆಯಾಗಿದೆ. ಮಳೆ ಹೀಗೆ ಮುಂದುವರೆದರೇ ಶೃಂಗೇರಿ ಶಾರದಾ ಮಠದ ಸುತ್ತಮುತ್ತಲಿನ ಇನ್ನಷ್ಟು ಪ್ರದೇಶ ಜಲಾವೃತವಾಗುವ ಆತಂಕ ಸೃಷ್ಟಿಯಾಗಿದೆ.

ಇದನ್ನೂ ಓದಿ: ವೀಕೆಂಡ್ ಮಸ್ತಿಗೆ ಹರಿದುಬಂದ ಪ್ರವಾಸಿಗರು: ಚಂದ್ರದ್ರೋಣ ಪರ್ವತ ರಸ್ತೆ ಟ್ರಾಫಿಕ್ ಜಾಮ್

ಕಳಸ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಭದ್ರಾ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು, ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆ ಮುಂದುವರೆದಿದ್ದು. ತುಂಗಾ, ಭದ್ರಾ ನದಿಗಳ‌ ಒಳ ಹರಿವಿನಲ್ಲಿ ಭಾರಿ ಏರಿಕೆಯಾಗುತ್ತಿದೆ. ಮಲೆನಾಡಲ್ಲಿ ಮಳೆಯಾದರೆ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ನೆರೆ ಆತಂಕ ಸೃಷ್ಟಿಯಾಗಿದೆ.

ಬಿರುಗಾಳಿ ಸಹಿತ ಮಳೆಯ ಆರ್ಭಟಕ್ಕೆ ಚಿಕ್ಕಮಗಳೂರು ತಾಲೂಕಿನ ದೇವದಾನ ಗ್ರಾಮದಲ್ಲಿನ ಮನೆ ಮೇಲೆ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ಷರೀಫ್​ ಎಂಬುವರ ಮನೆ ಸಂಪೂರ್ಣ ಜಖಂಗೊಂಡಿದೆ. ದವಸ ಧಾನ್ಯ, ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶವಾಗಿವೆ. ಶೌರ್ಯ ವಿಪತ್ತು ತಂಡ ಮರ ತೆರವುಗೊಳಿಸಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:06 pm, Sat, 26 July 25