ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನ
ದೇಶಾದ್ಯಂತ ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇವೆ. ಅಂತಹ ಘಟನೆಯನ್ನು ಖಂಡಿಸಿ, ದೇಶಾದ್ಯಂತ ಆರೋಗ್ಯ ಸೇವೆಗಳನ್ನ ಸ್ಥಗಿತಗೊಳಿಸಿ ಬಂದ್ ಕೂಡ ಮಾಡಲಾಗಿತ್ತು. ಇದೀಗ ಚಿಕ್ಕಮಗಳೂರಿನಲ್ಲಿ ಕೂಡ ಅಂತಹದ್ದೇ ಪ್ರಕರಣ ಮರು ಕಳಿಸಿದ್ದು ವೈದ್ಯರ ಆಕ್ರೋಶದ ಕಟ್ಟೆ ಒಡೆದಿದೆ.
ಚಿಕ್ಕಮಗಳೂರು, ಸೆಪ್ಟೆಂಬರ್ 11: ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ದೇಶಾದ್ಯಂತ ಪದೇಪದೇ ಸಂಭವಿಸುತ್ತಿದೆ. ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಕೆಲ ದಿನಗಳ ಹಿಂದೆ ಇಡೀ ದೇಶಾದ್ಯಂತ ಆರೋಗ್ಯ ಸೇವೆಗಳನ್ನ ಸಂಪೂರ್ಣವಾಗಿ ಬಂದ್ ಮಾಡಿ ಮುಷ್ಕರ ಕೂಡ ನಡೆಸಲಾಗಿತ್ತು. ಇದೀಗ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದೇನು?
ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಹೋದರನ ಚಿಕಿತ್ಸೆಗೆ ಚಿಕ್ಕಮಗಳೂರು ನಗರದ ಟಿಪ್ಪು ನಗರದ ನಿವಾಸಿ ತಸೀಮಾ ಮತ್ತು ಸಂಬಂಧಿಕರು ಬಂದಿದ್ದರು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂಳೆ ತಜ್ಞ ವೆಂಕಟೇಶ್ ಅವರು ತಪಾಸಣೆ ನಡೆಸುವಾಗ ರೋಗಿಯ ಸಂಬಂಧಿಕರು ಒಟ್ಟಿಗೇ ತುರ್ತು ಸೇವಾ ಘಟಕದ ವಾರ್ಡ್ನ ಒಳಗೆ ಬಂದಿದ್ದು, ಹೊರ ಹೋಗುವಂತೆ ವೈದ್ಯರು ತಿಳಿಸಿದಾಗ ಮಾತಿಗೆ ಮಾತು ಬೆಳೆದಿದೆ. ಕೋಪಗೊಂಡ ಗಾಯಾಳು ಸಹೋದರಿ ತಸೀಮಾ ವೈದ್ಯರ ಕೊರಳ ಪಟ್ಟಿ ಹಿಡಿದು ಎಳೆದಿದ್ದಾರೆ. ಅಲ್ಲದೆ ಚಪ್ಪಲಿ ಬಿಚ್ಚಿ ಎಸೆದಿದದ್ದಾರೆ.
ಅಲ್ಲೇ ಇದ್ದ ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್ ಫೋನ್ನಲ್ಲಿ ವಿಡಿಯೊ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಕೂಡಲೇ ಹೊರರೋಗಿ ವಿಭಾಗ ಬಂದ್ ಮಾಡಿದ ವೈದ್ಯರು ಮತ್ತು ಸಿಬ್ಬಂದಿ, ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿ ಎದುರು ಜಮಾಯಿಸಿದರು. ಏಕಾಏಕಿ ಹಲ್ಲೆ ನಡೆಸಿದ್ದರಿಂದಾಗಿ ವೈದ್ಯರು ಹಾಗೂ ಸಿಬ್ಬಂದಿಯ ಆತ್ಮಸ್ಥೈರ್ಯ ಕುಗ್ಗಿಸಿದಂತಾಗಿದೆ ಎಂದು ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳೆಲ್ಲರೂ ಕೂಡಾ ಸೇವೆಯನ್ನ ಸ್ಥಗಿತಗೊಳಿಸಿ ಆಸ್ಪತ್ರೆ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು.
ವೈದ್ಯರ ಮೇಲೆ ಹಲ್ಲೆ: ಇಬ್ಬರ ಬಂಧನ
ಆಸ್ಪತ್ರೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಂತೆ ಎಚ್ಚೆತ್ತುಕೊಂಡ ಚಿಕ್ಕಮಗಳೂರು ಪೊಲೀಸ್ ಇಲಾಖೆ ತಸೀಮಾ ಇರ್ಫಾನ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ತಸೀಮಾ ಹಾಗೂ ಆಕೆಯ ಸಹೋದರನನ್ನು ಬಂಧಿಸಿದ್ದಾರೆ.
ಕಳೆದ ತಿಂಗಳೂ ಸಹ ಕೊಲ್ಕತ್ತಾದಲ್ಲಿ ನಡೆದಿದ್ದ ವೈದ್ಯರ ಮೇಲಿನ ಹಲ್ಲೆ ಹಾಗೂ ಅತ್ಯಾಚಾರವನ್ನ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು. ಇಂದೂ ಕೂಡಾ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆಯಾಗಿದ್ದರಿಂದಾಗಿ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರು, ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ವೈದ್ಯರ ಪ್ರತಿಭಟನೆಯಿಂದ ರೋಗಿಗಳಿಗೆ ಪರದಾಟ
ಜಿಲ್ಲಾಸ್ಪತ್ರೆಯ ಸಿಬ್ಬಂದಿಯ ದಿಡೀರ್ ಪ್ರತಿಭಟನೆಯಿಂದಾಗಿ ಚಿಕಿತ್ಸೆಗೆಂದು ಬಂದ ರೋಗಿಗಳು ಪರದಾಟ ಪಡುವಂತಾಯಿತು. ಒಂದೆಡೆ ರೋಗಿಗಳ ಗೋಳು ನೋಡಲಾಗದೆ ಅವರ ಕಡೆಯವರು ಬಂದು ಆಸ್ಪತ್ರೆ ಸಿಬ್ಬಂದಿಗಳ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರಳಪಟ್ಟಿ ಹಿಡಿದು ಥಳಿಸಿದ ಮಹಿಳೆ
ಸದಾ ರೋಗಿಗಳಿಂದಲೇ ತುಂಬಿ ತುಳುಕುತ್ತಿದ್ದ ಚಿಕ್ಕಮಗಳೂರಿನ ಅರಳಗುಪ್ಪೆ ಮಲ್ಲೇಗೌಡ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಪ್ರತಿಭಟನೆಯಿಂದಾಗಿ ಆಸ್ಪತ್ರೆಗೆ ಬಂದ ರೋಗಿಗಳು ಪರದಾಟ ನಡೆಸಿದರೆ, ಇತ್ತ ವೈದ್ಯ ವೆಂಕಟೇಶ್ ಮೇಲೆ ಹಲ್ಲೆ ನಡೆಸಿದವರನ್ನ ಬಂಧಿಸೋವರೆಗೂ ನಾವುಗಳ್ಯಾರೂ ಕರ್ತವ್ಯಕ್ಕೆ ಹಾಜರಾಗಲ್ಲ ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:26 am, Wed, 11 September 24