
ನವದೆಹಲಿ/ಶೃಂಗೇರಿ, ಅಕ್ಟೋಬರ್ 15: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯ ಮತ ಎಣಿಕೆಯ ವಿಡಿಯೋ ರೆಕಾರ್ಡಿಂಗ್ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿರುವ ಭಾರತೀಯ ಚುನಾವಣಾ ಆಯೋಗವನ್ನು (ECI) ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಚುನಾವಣಾ ದಾಖಲೆಗಳನ್ನು ಸಂರಕ್ಷಿಸುವುದು ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗದ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ಹೇಳಿದೆ. ಈ ಕ್ಷೇತ್ರದಲ್ಲಿ ಗೆಲುವಿನ ಅಂತರ ಕೇವಲ 201 ಮತಗಳಾಗಿತ್ತು ಎಂಬುದಿಲ್ಲಿ ಗಮನಾರ್ಹ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವ್ರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ವ್ರಾಜ್ ಅವರು 201 ಮತಗಳ ಅಂತರದಿಂದ ಸೋತಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮಗಳು ನಡೆದಿವೆ ಮತ್ತು ಮತ ಎಣಿಕೆಯ ವಿಡಿಯೋಗ್ರಫಿ ಸಮರ್ಪಕವಾಗಿ ನಡೆದಿಲ್ಲ ಎಂದು ಅವರು ಆರೋಪಿಸಿದ್ದ. ಮತ ಎಣಿಕೆ ಕೇಂದ್ರದ ವಿಡಿಯೋ ರೆಕಾರ್ಡಿಂಗ್ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೋರಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್ನ ರಾಜೇಗೌಡ ಫುಲ್ ಖುಷ್
ಶೃಂಗೇರಿ ಕ್ಷೇತ್ರದ ಮತ ಎಣಿಕೆಯ ವಿಡಿಯೋ ರೆಕಾರ್ಡಿಂಗ್ ಎರಡು ವರ್ಷಗಳಿಗೂ ಹೆಚ್ಚು ಕಾಲ ಕಳೆದಿರುವುದರಿಂದ ಪತ್ತೆಯಾಗುತ್ತಿಲ್ಲ ಮತ್ತು ಅದರ ಮೇಲೆ ಹೊಸ ದಾಖಲೆಗಳನ್ನು ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಹೇಗೆ ಹೇಳುತ್ತೀರಿ? ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗ ನೀವು ಅದನ್ನು ಸಂರಕ್ಷಿಸಬೇಕಿತ್ತು ಎಂದಿದೆ. ಚುನಾವಣಾ ಅರ್ಜಿಗಳ ಇತ್ಯರ್ಥವಾಗುವವರೆಗೆ ಮತ ಎಣಿಕೆಯ ವಿಡಿಯೋಗಳನ್ನು ಸಂರಕ್ಷಿಸಬೇಕು ಎಂದು ಚುನಾವಣಾ ಆಯೋಗದ ಸೂಚನೆಗಳಲ್ಲೇ ಉಲ್ಲೇಖಿಸಲಾಗಿದೆ ಎಂಬುದನ್ನೂ ನ್ಯಾಯಾಲಯ ಗಮನಿಸಿದೆ.
ಚುನಾವಣಾ ಆಯೋಗದ ಈ ಹೇಳಿಕೆಯು ಪಾರದರ್ಶಕತೆಯ ಬಗ್ಗೆ ಗಂಭೀರ ಅನುಮಾನಗಳನ್ನು ಹುಟ್ಟುಹಾಕುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಒಟ್ಟು 1,247 ಅಂಚೆ ಮತಗಳಿದ್ದು, 201 ಮತಗಳ ಅಲ್ಪ ಗೆಲುವಿನ ಅಂತರದ ಮೇಲೆ ಅಕ್ರಮಗಳು ಪರಿಣಾಮ ಬೀರಿರುವ ಸಾಧ್ಯತೆಯಿದೆ ಎಂದು ಅರ್ಜಿದಾರರು ವಾದಿಸಿದ್ದರು. ಮತ ಎಣಿಕೆಯ ಸಂಪೂರ್ಣ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳು, ನಮೂನೆ 20 (Form 20) ಮತ್ತು ಅಂಚೆ ಮತಗಳ ಲೆಕ್ಕಪತ್ರಗಳನ್ನು ಸಲ್ಲಿಸುವಂತೆ ಅವರು ಕೋರಿದ್ದರು. ಈ ಹಿನ್ನೆಲೆಯಲ್ಲಿ, ದಾಖಲೆಗಳನ್ನು ಎಷ್ಟು ಕಾಲ ಸಂರಕ್ಷಿಸಲಾಗುತ್ತದೆ, ವಿಡಿಯೋ ರೆಕಾರ್ಡಿಂಗ್ ಅನ್ನು ಯಾವಾಗ ಅಳಿಸಲಾಯಿತು, ಅದಕ್ಕೆ ಯಾರು ಅನುಮತಿ ನೀಡಿದರು ಹಾಗೂ ಬ್ಯಾಕಪ್ ಪ್ರತಿ ಇದೆಯೇ ಎಂಬುದನ್ನು ವಿವರಿಸಿ ಎರಡು ವಾರಗಳೊಳಗೆ ಹೊಸ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಚುನಾವಣಾ ಅರ್ಜಿ ಸಲ್ಲಿಕೆಯಾದ ಬಳಿಕ ದಾಖಲೆಗಳನ್ನು ಸಂರಕ್ಷಿಸಲು ಕೈಗೊಂಡ ಕ್ರಮಗಳ ಕುರಿತು ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೂ ನ್ಯಾಯಪೀಠ ಸೂಚಿಸಿದೆ.
ದಾಖಲೆಗಳ ಸಂರಕ್ಷಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಎರಡು ವಾರಗಳ ಬಳಿಕ ನಡೆಸಲು ನಿಗದಿಪಡಿಸಲಾಗಿದೆ. ಶೃಂಗೇರಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ಕರ್ನಾಟಕ ಹೈಕೋರ್ಟ್ನಲ್ಲಿ ಬಾಕಿ ಇದ್ದು, ದಾಖಲೆಗಳ ಸಂರಕ್ಷಣೆಯ ವಿಚಾರವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡುತ್ತಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.