Chikkamagaluru: ಬಯಲುಸೀಮೆ ಭಾಗದಲ್ಲಿ ತಂಪೆರೆದ ಮಳೆರಾಯ: ಗುಡುಗು-ಸಿಡಿಲು ಸಹಿತ ಭಾರಿ ಮಳೆ
ಬಯಲುಸೀಮೆ ಭಾಗದಲ್ಲಿ ಗುಡುಗು-ಸಿಡಿಲು ಗಾಳಿ ಸಹಿತ ಭಾರೀ ಮಳೆ ಆಗಿದ್ದು, ಕಾದ ಕಾವಲಿಯಂತಾಗಿದ್ದ ಬಯಲುಸೀಮೆಗೆ ವರಣದೇವ ತಂಪೆರೆದಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ.
ಚಿಕ್ಕಮಗಳೂರು: ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೆ ಇಂದು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಗುಡುಗು-ಸಿಡಿಲು ಗಾಳಿ ಸಹಿತ ಭಾರಿ ಮಳೆ ಆಗಿದ್ದು, ಕಾದ ಕಾವಲಿಯಂತಾಗಿದ್ದ ಬಯಲುಸೀಮೆಗೆ ವರಣದೇವ ತಂಪೆರೆದಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆರಾಯ ಅಬ್ಬರಿಸಿದ್ದಾನೆ. ಭಾರೀ ಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿದಿದೆ. ನಿನ್ನೆ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಿತ್ತು. ಇಂದು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಧಾರಾಕಾರ ಮಳೆ ಆಗಿದೆ. ಇನ್ನು ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ. ಕಳೆದ ಒಂದು ಗಂಟೆಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಸಾವಿರಾರು ಜನರನ್ನ ಸೇರಿಸಿ ಶಕ್ತಿ ಪ್ರದರ್ಶನ ಮಾಡಲು ಸಂತೋಷ ಲಾಡ್ ಹೊರಟಿದ್ದರು. ಆದರೆ ಮಳೆ ಹಿನ್ನೆಲೆಯಲ್ಲಿ ಪ್ರಜಾಧ್ವನಿ ರದ್ದಾಗಿದೆ.
ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆ
ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾ.15ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆ ಆಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ.
ಇದನ್ನೂ ಓದಿ: ಬಿಸಿಲ ಬೇಗೆ ತಣಿಸಲಿದ್ದಾನೆ ಮಳೆರಾಯ; ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆ ಮುನ್ಸೂಚನೆ
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದೆ ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದೆಹಲಿಯಲ್ಲಿ ತಾಪಮಾನ ಹೆಚ್ಚಾಗುತ್ತಿದೆ.
ಕೊಡಗಿನಲ್ಲಿ ವರ್ಷದ ಮೊದಲ ಮಳೆ
ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು, ಮೂರ್ನಾಡು ಗ್ರಾಮ, ಮರಗೋಡು, ಕತ್ತಲೆಕಾಡು, ಹಾಕತ್ತೂರು ವ್ಯಾಪ್ತಿಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ಕಾಫಿ ಹೂ ಅರಳಲು ಮಾರ್ಚ್ ಮಳೆ ತೀರಾ ಅಗತ್ಯವಾಗಿತ್ತು. ಸದ್ಯ ವರ್ಷದ ಮೊದಲ ಮಳೆ ಕೊಡಗಿನಲ್ಲಿ ಆಗಿದ್ದು, ಮಳೆ ಕಾಣದೆ ಕಂಗೆಟ್ಟಿದ್ದ ಕಾಫಿ ಬೆಳೆಗಾರರು ಹರ್ಷಗೊಂಡಿದ್ದಾರೆ.
ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:07 pm, Wed, 15 March 23