ಗಣೇಶ ಹಬ್ಬದ ಹಿನ್ನೆಲೆ ಸೆಪ್ಟೆಂಬರ್ 14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ!
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಬಾಬಾಬುಡನ್‌ಗಿರಿ ಭಾಗಗಳಿಗೆ ಸೆಪ್ಟೆಂಬರ್ 14ರಂದು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಭಕ್ತಾದಿಗಳ ಪೂಜಾ ಆಚರಣೆಗೆ ತೊಂದರೆಯಾಗದಂತೆ ಹಾಗೂ ಟ್ರಾಫಿಕ್ ಜಾಮ್ ತಡೆಯಲು ಒಂದು ದಿನದ ಮಟ್ಟಿಗೆ ಪ್ರವಾಸವನ್ನು ಮುಂದೂಡುವಂತೆ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಪ್ರವಾಸಿಗರಲ್ಲಿ ಮನವಿ ಮಾಡಿದ್ದಾರೆ.

ಮುಖ್ಯಾಂಶಗಳು
- ಗೌರಿ-ಗಣೇಶ ಹಬ್ಬದ ಹಿನ್ನೆಲೆ ಸೆಪ್ಟೆಂಬರ್ 14ರಂದು ಮುಳ್ಳಯ್ಯನಗಿರಿ ಪ್ರವೇಶ ನಿರ್ಬಂಧ.
- ಚಂದ್ರದ್ರೋಣ ಪರ್ವತ ಸಾಲಿನ ದೇವಸ್ಥಾನಗಳಿಗೆ ಸಾವಿರಾರು ಭಕ್ತಾದಿಗಳು ಆಗಮಿಸುವ ಸಾಧ್ಯತೆ.
- ಭಾರಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪ್ರವಾಸ ಮುಂದೂಡಲು ಜಿಲ್ಲಾಧಿಕಾರಿ ಮನವಿ.
ಚಿಕ್ಕಮಗಳೂರು, ಸೆಪ್ಟೆಂಬರ್ 12: ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಚಿಕ್ಕಮಗಳೂರಿನ ಪ್ರಸಿದ್ಧ ಗಿರಿಧಾಮಗಳಿಗೆ ಭೇಟಿ ನೀಡಲು ಯೋಜಿಸುತ್ತಿರುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಹಬ್ಬದ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಸಾವಿರಾರು ಭಕ್ತರ ಆಚರಣೆಗೆ ಅಡಚಣೆಯಾಗದಂತೆ ಮುಂಜಾಗ್ರತಾ ಕ್ರಮ
ಚೌತಿ ಹಬ್ಬದ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆ ಮಠಗಳಿಗೆ ಹಣ್ಣು-ಕಾಯಿ ಮಾಡಿಸಲು ಮತ್ತು ಚೌತಿ ಕಾಯಿ ಹೊಡೆಯಲು ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಸಾಂಪ್ರದಾಯಿಕ ಆಚರಣೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.
ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನಿರ್ಧಾರ
ಹಬ್ಬದ ದಿನದಂದು ಪ್ರವಾಸಿಗರ ವಾಹನಗಳ ದಟ್ಟಣೆಯಿಂದ ತೀವ್ರ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿರುವುದರಿಂದ, ಸಾರ್ವಜನಿಕರ ಹಾಗೂ ಭಕ್ತರ ಅನುಕೂಲಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಭಾಗಗಳಿಗೆ ತೆರಳುವ ಪ್ರವಾಸಿಗರು ಸೆಪ್ಟೆಂಬರ್ 14ರ ತಮ್ಮ ಪ್ರವಾಸವನ್ನು ಮುಂದೂಡಬೇಕೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




