ರಸ್ತೆ ನೋಡಿ ಸಂಬಂಧವೇ ಬೇಡವೆನ್ನುತ್ತಾರೆ! ಕಳಸದಲ್ಲಿ ಹದಗೆಟ್ಟ ರಸ್ತೆಯಿಂದ ಹುಡುಗರಿಗೆ ಹುಡುಗಿ ಸಿಗೋದೇ ಕಷ್ಟ
ಚಿಕ್ಕಮಗಳೂರಿನ ಕಳಸ ತಾಲೂಕಿನ ಹಲವು ಗ್ರಾಮಗಳಲ್ಲಿ ಹದಗೆಟ್ಟ ರಸ್ತೆ ಸಮಸ್ಯೆ ಮದುವೆ ಸಂಬಂಧಗಳ ಮೇಲೂ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಊರಿನ ಹುಡುಗರಿಗೆ ಹೆಣ್ಣು ಕೊಡಲು ಹಾಗೂ ಊರಿನಿಂದ ಹುಡುಗಿಯನ್ನು ಮದುವೆಯಾಗಿ ಕರೆದುಕೊಂಡು ಹೋಗಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಹತ್ತು ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ಮನವಿ ಸಲ್ಲಿಸಿದರೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು, ಸೆಪ್ಟೆಂಬರ್ 8: ರಸ್ತೆ ಎಂದರೆ ಕೇವಲ ವಾಹನಗಳ ಸಂಚಾರಕ್ಕೆ ಇರುವ ದಾರಿ ಮಾತ್ರವಲ್ಲ. ಅದು ಶಿಕ್ಷಣ, ಆರೋಗ್ಯ, ವ್ಯಾಪಾರ, ಉದ್ಯೋಗ ಸೇರಿದಂತೆ ಗ್ರಾಮೀಣ ಬದುಕಿನ ಹಲವು ಅಗತ್ಯಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿ. ಆದರೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೆಲವು ಗ್ರಾಮಗಳಲ್ಲಿ ಇದೇ ರಸ್ತೆ ಸಮಸ್ಯೆ ಇದೀಗ ಮದುವೆ ಸಂಬಂಧಗಳ ಮೇಲೂ ಪರಿಣಾಮ ಬೀರುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಳಸ ತಾಲೂಕಿನ ಮಾವಿನಕೆರೆ ಗ್ರಾಮ, ಬಾಳೆಖಾನ್, ಎಡೂರು, ಬಂಗಾರ ಕೂಡಿಗೆ–ಕೆಳಗೂರು, ಜೇಡಿಬೈಲು–ಮಾವಿನಕೆರೆ ಹಾಗೂ ಬಾಳೆಹೊಳೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಸುಮಾರು 10 ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ರಸ್ತೆ ಅಭಿವೃದ್ಧಿಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹತ್ತು ವರ್ಷಗಳಿಂದ ರಸ್ತೆಗಾಗಿ ಹೋರಾಟ
ಈ ಭಾಗದ ನೂರಾರು ಜನರಿಗೆ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಮಾರ್ಗ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹದಗೆಟ್ಟ ಸ್ಥಿತಿಯಲ್ಲಿದೆ. ಮಳೆಗಾಲದಲ್ಲಿ ರಸ್ತೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದು, ಗ್ರಾಮಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ರಸ್ತೆ ಹದಗೆಟ್ಟಿರುವುದರಿಂದ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆ ತಲುಪುವುದು, ಶಾಲೆ-ಕಾಲೇಜುಗಳಿಗೆ ತೆರಳುವುದು, ಮಾರುಕಟ್ಟೆಗೆ ಹೋಗುವುದು ಸೇರಿದಂತೆ ದಿನನಿತ್ಯದ ಅಗತ್ಯಗಳಿಗೂ ಸಮಸ್ಯೆಯಾಗುತ್ತಿದೆ ಎಂಬುದು ಗ್ರಾಮಸ್ಥರ ಅಳಲು.
ರಸ್ತೆ ಅಭಿವೃದ್ಧಿಗಾಗಿ ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಇದುವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ರಸ್ತೆ ಸರಿ ಇಲ್ಲ, ಮದುವೆ ಸಂಬಂಧವೂ ಸರಿ ಆಗ್ತಿಲ್ಲ!
ಇದೀಗ ಹದಗೆಟ್ಟ ರಸ್ತೆಯ ಸಮಸ್ಯೆ ಕೇವಲ ಸಂಚಾರಕ್ಕೆ ಸೀಮಿತವಾಗಿಲ್ಲ. ಮದುವೆ ಸಂಬಂಧಗಳ ಮೇಲೂ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಹುಡುಗನನ್ನು ನೋಡಲು ಹುಡುಗಿಯ ಮನೆಯವರು ಗ್ರಾಮಕ್ಕೆ ಬಂದಾಗ ಗುಂಡಿ-ಗದ್ದೆಗಳ ರಸ್ತೆಯಲ್ಲಿ ವಾಹನ ಸಂಚಾರದ ಸಮಸ್ಯೆ ಎದುರಾಗುತ್ತದೆ. ಅದೇ ರೀತಿ ಹುಡುಗಿಯನ್ನು ನೋಡಲು ತೆರಳುವ ಸಂದರ್ಭದಲ್ಲೂ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸ್ಥಿತಿ ಕಂಡು ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.
‘ಹುಡುಗ-ಹುಡುಗಿ ಇಬ್ಬರೂ ಒಪ್ಪಿಗೆಯಾದರೂ, ಗ್ರಾಮಕ್ಕೆ ಹೋಗುವ ರಸ್ತೆಯ ಪರಿಸ್ಥಿತಿ ನೋಡಿ ಸಂಬಂಧ ಬೇಡ ಎನ್ನುವ ಸ್ಥಿತಿ ಬಂದಿದೆ’ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ವಿಶೇಷವಾಗಿ ಮಳೆಗಾಲದಲ್ಲಿ ರಸ್ತೆಗಳು ಮತ್ತಷ್ಟು ಹದಗೆಟ್ಟು ವಾಹನ ಸಂಚಾರವೇ ಕಷ್ಟವಾಗುತ್ತಿದೆ. ಇದರಿಂದ ಗ್ರಾಮಕ್ಕೆ ಬರುವ ಹೊರಗಿನವರು ಇಲ್ಲಿನ ಮೂಲಸೌಕರ್ಯಗಳ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಹೊಂದುವಂತಾಗಿದೆ ಎಂಬುದು ಗ್ರಾಮಸ್ಥರ ಮಾತು.
ಚುನಾವಣೆ ಬಹಿಷ್ಕಾರದ ಎಚ್ಚರಿಕೆ
ರಸ್ತೆ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇದೀಗ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ‘10 ವರ್ಷಗಳಿಂದ ರಸ್ತೆಗಾಗಿ ಮನವಿ ಮಾಡುತ್ತಿದ್ದೇವೆ. ನಮ್ಮ ಸಮಸ್ಯೆ ಕೇಳುವವರು ಯಾರೂ ಇಲ್ಲ. ರಸ್ತೆ ಅಭಿವೃದ್ಧಿಯಾಗುವವರೆಗೂ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಮತ ಹಾಕುವುದಿಲ್ಲ’ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಈ ಸಂಬಂಧ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್‌ಗಳನ್ನು ಅಳವಡಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಈ ಭಾಗದ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುವುದು ಇದೀಗ ಗಮನ ಸೆಳೆದಿದೆ.
ಸರ್ಕಾರದ ಗಮನಕ್ಕೆ ಬರಬೇಕಿದೆ ರಸ್ತೆ ಸಮಸ್ಯೆ
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಳಸ ತಾಲೂಕಿನಲ್ಲಿ ಗ್ರಾಮೀಣ ರಸ್ತೆ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಮಸ್ಯೆಯತ್ತ ಸರ್ಕಾರ ಹಾಗೂ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಗಮನಹರಿಸಿ, ಗ್ರಾಮಸ್ಥರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಒಂದು ರಸ್ತೆ ಹದಗೆಟ್ಟರೆ ಅದರ ಪರಿಣಾಮ ಸಂಚಾರದ ಜೊತೆಗೆ ಶಿಕ್ಷಣ, ಆರೋಗ್ಯ, ವ್ಯಾಪಾರ ಹಾಗೂ ಸಾಮಾಜಿಕ ಬದುಕಿನ ಮೇಲೂ ಬೀರುವ ಸಾಧ್ಯತೆ ಇದೆ. ಇದೀಗ ಮದುವೆ ಸಂಬಂಧಗಳ ಮೇಲೂ ಪರಿಣಾಮ ಬೀರುತ್ತಿದೆ ಎಂಬ ಸ್ಥಳೀಯರ ಆರೋಪ, ಕಳಸದ ಗ್ರಾಮೀಣ ಭಾಗದ ರಸ್ತೆ ಸಮಸ್ಯೆಯ ಗಂಭೀರತೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
ಹೀಗಾಗಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡು, ಸುಸಜ್ಜಿತ ಸಂಪರ್ಕ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




