ಚಿಕ್ಕಮಗಳೂರು, ಆ.13: ಕಾಫಿನಾಡು ಚಿಕ್ಕಮಗಳೂರು(Chikkamagaluru) ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದ. ಪರಿಣಾಮ ಹಲವೆಡೆ ಮನೆಗಳು, ಗುಡ್ಡ ಕುಸಿದು ಬಿದ್ದಿತ್ತು. ಈ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಚಿಕ್ಕಮಗಳೂರು ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದೀಗ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ ಕಡಿಮೆಯಾದ ಹಿನ್ನೆಲೆ ಜಿಲ್ಲೆಯ ಪ್ರವಾಸಿತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿ ಪ್ರವಾಸಿಗರ ಭೇಟಿಗೆ ಅನುಮತಿ ನೀಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲು ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಗುಡ್ಡ, ಭೂ ಕುಸಿತ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಭೇಟಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಇದೀಗ ವರುಣ ಬಿಡುವ ಕೊಟ್ಟ ಹಿನ್ನಲೆ ಜಿಲ್ಲೆಯ ಪ್ರವಾಸಿ ತಾಣಗಳಾದ ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ದೇವರಮನೆ, ಸೀತಾಳಯ್ಯನಗಿರಿ, ಮಾಣಿಕ್ಯಾಧಾರ, ಎತ್ತಿನಭುಜ, ಸಿರಿಮನೆ ಫಾಲ್ಸ್, ಎತ್ತಿನ ಭುಜ, ದೇವರ ಮನೆ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ಪ್ರವಾಸಿತಾಣಗಳಿಗೆ ಪ್ರವಾಸಿಗರ ಭೇಟಿಗೆ ಅನುಮತಿ ನೀಡಿದೆ.
ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ ಬೆನ್ನಲ್ಲೇ ಎಚ್ಚೆತ್ತ ಚಿಕ್ಕಮಗಳೂರು ಜಿಲ್ಲಾಡಳಿತ; ಅಪಾಯಕಾರಿ ಸ್ಥಳದಲ್ಲಿದ್ದ ಮರಗಳ ತೆರವು
ಇನ್ನು ಈ ಭಾರೀ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ನೂರು ಕೋಟಿಗೂ ಅಧಿಕ ನಷ್ಟವಾಗಿದೆ. ಮೇ ತಿಂಗಳಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದರು. ಜುಲೈನಲ್ಲಿ ಅತಿ ಹೆಚ್ಚು ಮಳೆಯಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡಾ 25ರಷ್ಟು ಹೆಚ್ಚು ಮಳೆಯಾಗಿದೆ. ಭಾರಿ ಮಳೆ, ಗಾಳಿಗೆ ಮೂಡಿಗೆರೆ, ಚಿಕ್ಕಮಗಳೂರು ತಾಲೂಕಿನಲ್ಲಿ 192 ಮನೆಗಳಿಗೆ ಹಾನಿಯಾಗಿದೆ. ಈವರೆಗೂ ಹಾನಿಗೊಳಗಾದ 77 ಮನೆಗಳಿಗೆ ಪರಿಹಾರ ನೀಡಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ 1,849 ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿದೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:08 pm, Tue, 13 August 24