ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ
ಚಿತ್ರದುರ್ಗದ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ನವದೆಹಲಿ, ಡಿಸೆಂಬರ್ 25: ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದೆ.
‘ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ’ ಎಂದು ಪ್ರಧಾನಿ ಕಾರ್ಯಾಲಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದೆ.
‘ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು’ ಎಂದು ಪ್ರಧಾನಿ ತಿಳಿಸಿದ್ದಾರೆ.
ಪ್ರಧಾನಿ ಕಾರ್ಯಾಲಯ ಎಕ್ಸ್ ಸಂದೇಶ
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ.
ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ…
— PMO India (@PMOIndia) December 25, 2025
ಗೊರ್ಲತ್ತು ಕ್ರಾಸ್ ಬಳಿ ಮುಂಜಾವ 3 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ಗೆ ಎದುರು ಬದಿಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡ್ ಕ್ರಾಸ್ ಮಾಡಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿ ಉರಿದು 9 ಮಂದಿ ಸಜೀವ ದಹನವಾಗಿದ್ದಾರೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಎಕ್ಸ್ ಸಂದೇಶ
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ… pic.twitter.com/Ol4dR9ercB
— Siddaramaiah (@siddaramaiah) December 25, 2025
ಹೆಚ್ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸಂತಾಪ
ಬಸ್ ದುರಂತದ ಬಗ್ಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ. ಇನ್ನೂ ಹೆಚ್ಚಿನ ಸಾವು-ನೋವು ಆಗದಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ದುರಂತದಲ್ಲಿ ಜೀವ ಚೆಲ್ಲಿದವರಿಗೆ ದೇವರು ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಹಾಗೂ ಅವರ ಚಿಕಿತ್ಸೆಗೆ ರಾಜ್ಯ ಸರಕಾರ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಿ. ಅಗಲಿದವರ ಕುಟುಂಬದವರಿಗೆ ನನ್ನ ತೀವ್ರ ಸಂತಾಪಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 9 ಜನ ಸಜೀವ ದಹನ
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:49 am, Thu, 25 December 25




