ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ

Edited By:

Updated on: Dec 25, 2025 | 12:43 PM

ಚಿತ್ರದುರ್ಗದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ ಬಗ್ಗೆ ಅಧಿಕಾರಿಗಳು ಮತ್ತು ಸಚಿವರ ನಡುವೆ ಗೊಂದಲವಿದೆ. ಐಜಿಪಿ ಒಂಭತ್ತು ಮೃತದೇಹಗಳ ಬಗ್ಗೆ ಮಾಹಿತಿ ನೀಡಿದರೆ, ಸಾರಿಗೆ ಸಚಿವರು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಹಾಸನ ಮೂಲದ ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ನವ್ಯಾ ಮತ್ತು ಮಾನಸ ಸೇರಿದಂತೆ ನಾಪತ್ತೆಯಾಗಿರುವ ಮೂವರಿಗಾಗಿ ಹುಡುಕಾಟ ಮುಂದುವರೆದಿದೆ.

ಚಿತ್ರದುರ್ಗ, ಡಿಸೆಂಬರ್​​ 25: ಗೊರ್ಲತ್ತು ಬಳಿ ಸಂಭವಿಸಿರುವ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಕುರಿತು ಅಧಿಕಾರಿಗಳು ಮತ್ತು ಸಚಿವರ ನಡುವೆ ಗೊಂದಲ ಉಂಟಾಗಿದೆ. ಆರಂಭದಲ್ಲಿ, ಐಜಿಪಿ ರವಿಕಾಂತೇಗೌಡ ಅವರು ಒಂಭತ್ತು ಮಂದಿ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಆದರೆ, ಸಾರಿಗೆ ಸಚಿವರು ಐವರು ಪ್ರಯಾಣಿಕರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ ಬಸ್​​ನಲ್ಲಿದ್ದ ಮೂವರು ಪ್ರಯಾಣಿಕರು ನಾಪತ್ತೆಯಾಗಿದ್ದು, ಅವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯಾ ಹಾಗೂ ಚನ್ನರಾಯಪಟ್ಟಣದ ಮಾನಸ ಸೇರಿ ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 25, 2025 12:06 PM
Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More