ಹೆಗ್ಗೆರೆ ಬಳಿ ಕಾರು-ಲಾರಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಹೆಗ್ಗೆರೆ ಬಳಿ ಕಾರು-ಲಾರಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!
ಹೆಗ್ಗೆರೆ ಬಳಿ ಕಾರು-ಲಾರಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!
Edited By:

Updated on: Mar 15, 2026 | 12:36 PM

ಚಿತ್ರದುರ್ಗ, ಮಾರ್ಚ್​ 15: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಘಟನೆ

ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಇದೇ ವೇಳೆ ಕಾರಿನಲ್ಲಿ ಇದ್ದ ಪಿಎಸ್‌ಐ ಈಶ್ವರ್ ಹಾಗೂ ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್ ಮಹಾಂತೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಐಮಂಗಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:16 am, Sun, 15 March 26

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us