ಚಿತ್ರದುರ್ಗಕ್ಕೆ ಸಿಎಂ ಬೊಮ್ಮಾಯಿ ಭೇಟಿ; ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾಯಿಸಿ ಡಿಸಿ ಆದೇಶ
ಚಿತ್ರದುರ್ಗದಲ್ಲಿ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಪ್ರವೇಶ ನಿರ್ಬಂಧಿಸಿ ಡಿಸಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೆ ಇಂದು ಚಿತ್ರದುರ್ಗ ನಗರದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಸಾರಿಗೆ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಇತರೆ ಗಣ್ಯರು ಭಾಗಿಯಾಗಲಿದ್ದಾರೆ.
ಸಂಚಾರಿ ಮಾರ್ಗ ಬದಲಾವಣೆ
ನಗರದಲ್ಲಿ ಫಲಾನುಭವಿಗಳ ಸಮಾವೇಶ ಹಿನ್ನೆಲೆಯಲ್ಲಿ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಸಾರಿಗೆ, ಖಾಸಗಿ ಬಸ್ ಹಾಗೂ ಭಾರೀ ವಾಹನಗಳು ನಗರ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಬೈಪಾಸ್ ರಸ್ತೆಗಳ ಮೂಲಕವೇ ಭಾರೀ ವಾಹನಗಳು ಸಂಚರಿಸಲು ಸೂಚಿಸಲಾಗಿದೆ. ಹಳೇ ರಾಷ್ಟ್ರೀಯ ಹೆದ್ದಾರಿ 4ರ ಜೆಎಂಐಟಿ ವೃತ್ತದ ಮೂಲಕ ಬಸ್ ನಿಲ್ದಾಣದ ಕಡೆ ಭಾರೀ ವಾಹನಗಳು ತೆರಳಲು ಜಿಲ್ಲಾಡಳಿತ ಸೂಚಿಸಿದ್ದು ಡಿಸಿ ದಿವ್ಯಪ್ರಭು ಆದೇಶಿಸಿದ್ದಾರೆ.
ಪೊಲೀಸ್ ಬಂದೋಬಸ್ತ್
ಮಧ್ಯಾಹ್ನ 12:30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್ ಮೂಲಕ ಮುರುಘಾಮಠದ ಆವರಣದ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಹೆಲಿಪ್ಯಾಡ್ ನಿಂದ ಕಾರ್ ಮೂಲಕ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭಾರೀ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು ವಿವದೆಡೆ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಬೆಳಗ್ಗೆಯಿಂದಲೇ ಪೊಲೀಸರು ಬಂದೋಬಸ್ತ್ ಕಾರ್ಯದಲ್ಲಿ ತೊಡಗಿದ್ದು ಕಾನೂನು ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಎಎಸ್ ಪಿ, ಮೂವರು ಡಿವೈಎಸ್ಪಿ ಸೇರಿ ಇತರೆ ಅಧಿಕಾರಿಗಳು, ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ ಎಂದು ಎಸ್ಪಿ ಕೆ.ಪರಶುರಾಮ್ ತಿಳಿಸಿದ್ದಾರೆ.
ಇದನ್ನೂ ಓದಿ: ಉಸಿರು ನೀಡುವ ಮರಗಳ ಹನನ ಸರಿಯೇ? ಬದಲಾವಣೆ ಅಗತ್ಯ ಆದರೆ ನಮ್ಮನ್ನೇ ನಾಶಗೊಳಿಸುವಷ್ಟಲ್ಲ
ವಿವಿಧ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ
ಭದ್ರಾ ಮೇಲ್ದಂಡೆ ಯೋಜನೆಯಡಿ 7ಹಳ್ಳಿಗಳ 1.801 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ, 50ಹಾಸಿಗೆಗಳ ಕ್ರಿಟಿಕಲ್ ಕೇರ್ ಘಟಕ ಸೇರಿದಂತೆ 1.484 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಪೈಕಿ 538 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, 946 ಕೋಟಿ ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ ನೆರವೇರಲಿದೆ.
ಊಟ-ಉಪಹಾರ ವ್ಯವಸ್ಥೆ
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಾಗಿರುವ ಜಿಲ್ಲೆಯ ಸಾವಿರಾರು ಜನ ಸಮ್ಮೇಳನಕ್ಕೆ ಸಾಕ್ಷಿ ಆಗಲಿದ್ದಾರೆ. ಸಮಾವೇಶಕ್ಕೆ ಆಗಮಿಸಿದವರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಜ್ಞಾನ ಕಾಲೇಜು ಮೈದಾನದಲ್ಲೇ ಸುಮಾರು 40ಕೌಂಟರ್ ಗಳು ನಿರ್ಮಾಣ ಮಾಡಲಾಗಿದೆ. ಊಟ ಮತ್ತು ನೀರಿನ ವ್ಯವಸ್ಥೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ಪಂಚಾಯತಿ ಸಿಇಓ ಎಂ.ಎಸ್.ದಿವಾಕರ್ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ವ್ಯತ್ಯಾಸ ಆಗದಂತೆ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:14 am, Sat, 4 March 23