ಚಿತ್ರದುರ್ಗ, ಜನವರಿ 1: ‘ಸಿಎಂ ಸಿದ್ದರಾಮಯ್ಯ (Siddaramaiah) ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು’ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ (H Anjaneya) ಪ್ರಶ್ನಿಸಿದರು. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತಾದ ಚರ್ಚೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು. ಸ್ವತ: ಸಿದ್ದರಾಮಯ್ಯ ಅವರೇ ರಾಮ, ಇನ್ನು ಆ ರಾಮನಿಗೇಕೆ ಹೋಗಿ ಪೂಜಿಸಬೇಕು ಎಂದು ಹೇಳಿದರು.
ಸಿದ್ಧರಾಮನಹುಂಡಿಯಲ್ಲಿ ರಾಮನ ದೇವಸ್ಥಾನ ಇದೆ, ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ. ಬಿಜೆಪಿಯವರನ್ನು ಕರೆಸಿಕೊಂಡು ಭಜನೆ ಮಾಡುತ್ತಾರೆ. ನಮ್ಮ ರಾಮ ಎಲ್ಲಾ ಕಡೆಗೂ ಇದ್ದಾನೆ, ನಾನು ಆಂಜನೇಯ. ನಾವೆಲ್ಲಾ ಶ್ರೀರಾಮನ ಭಕ್ತರು ಎಂದು ಅವರು ಹೇಳಿದರು.
ನಮ್ಮ ಸಮುದಾಯದವರು ರಾಮ, ಆಂಜನೇಯ, ಹನುಮಂತ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಬಿಜೆಪಿಯವರದ್ದು ಧರ್ಮಗಳನ್ನು ಒಡೆದಾಳುವ ನೀತಿ. ಒಂದು ಧರ್ಮದ ವಿರುದ್ಧ ಟೀಕಿಸಿ ಮತ ಬ್ಯಾಂಕ್ ಸೃಷ್ಟಿಸುವ ಭ್ರಮೆ ಬಿಜೆಪಿಗಿದೆ ಎಂದು ಆಂಜನೇಯ ಟೀಕಿಸಿದರು.
ಬಿಜೆಪಿ ಆಡಳಿತದಲ್ಲಿ ಯಾರಿಗೆ ಅನುಕೂಲ ಆಗಿದೆ? ಹಿಂದೂ ಯುವಕರಿಗೆ ಬಿಜೆಪಿ ಆಡಳಿತದಿಂದ ಅನುಕೂಲ ಆಗಿದೆಯೆ? ನಾವೆಲ್ಲಾ ಹಿಂದೂಗಳೇ, ಹಿಂದೂ, ಹಿಂದೂ ಧರ್ಮವನ್ನ ಬಿಜೆಪಿ ಕೊಂಡುಕೊಂಡಿಲ್ಲ. ಧರ್ಮದಲ್ಲಿನ ಮೇಲು ಕೀಳು, ಶೋಷಣೆಗೆ ಪರಿಹಾರ ನೀಡಿದ್ದಾರೆಯೇ ಎಂದು ಆಂಜನೇಯ ಪ್ರಶ್ನಿಸಿದರು.
ಇದನ್ನೂ ಓದಿ: ನಾವು ಅಯೋಧ್ಯೆ ರಾಮ ಮಂದಿರದ ಪರ: ಸಿಎಂ ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ!
ಮಂದಿರ ನಿರ್ಮಾಣ ಸಾಕು, ಮನೆ-ಮನ ಕಟ್ಟುವ ಕೆಲಸ ಆಗಬೇಕು. ದೇಶದ ಅನೇಕ ಜನ ನಾಯಿ ನರಿ ವಾಸಿಸಲು ಯೋಗ್ಯವಲ್ಲದ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಅಂಥವರ ಕಣ್ಣಿರೊರೆಸಿ ಸೂರುಕೊಟ್ಟು ರಕ್ಷಣೆ ಮಾಡುವ ಕೆಲಸ ಆಗಲಿ. ಸೂರಿಲ್ಲದವರಿಗೆ ಮನೆ ಕಟ್ಟಿಸಿ ರಾಮಮಂದಿರ ಅಂತ ಹೆಸರಿಡಿ. ಆಗ ನಿಜವಾದ ರಾಮ ಬಂದು ಆಶೀರ್ವದಿಸುತ್ತಾನೆ. ಓಟಿನ ರಾಮ ಅಲ್ಲ, ಓಟಿಗಾಗಿ ಬಿಜೆಪಿ ರಾಮನ ಮಾಡುವುದು ಬೇಡ ಎಂದು ಆಂಜನೇಯ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ