ಹಿಂದೂಗಳ ಹತ್ಯೆ ಆಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ: ಸಿ.ಟಿ.ರವಿ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಆಕ್ರೋಶ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ: ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ (hindu) ಹತ್ಯೆಯಾಗುತ್ತೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದರು. ಇದು ರಾಜ್ಯ ರಾಜಕೀಯದಲ್ಲಿ ತುಂಬಾ ಚರ್ಚೆಗೆ ಕೂಡ ಗ್ರಾಸವಾಗಿದೆ. ಸದ್ಯ ಸಿ.ಟಿ.ರವಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿಂದೂಗಳ ಹತ್ಯೆ ಆಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ನಡೆದಿದೆ. ಭ್ರಷ್ಟಾಚಾರ, ಮತಗಳ್ಳತನ ಕೇಸ್ ಮುಚ್ಚಿ ಹಾಕಲು ಇಂತಹ ಹೇಳಿಕೆ ನೀಡಲಾಗುತ್ತಿದೆ. ಬಿಜೆಪಿಯವರು ಹಳ್ಳಿಗಳಲ್ಲಿ ಕೋಮುಗಲಭೆ ಹುಟ್ಟು ಹಾಕುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು. ನಮ್ಮ ಕಡೆಯವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ಮೊದಲು ಶಾಸಕ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.
ಇನ್ನು ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ ಎಂಬ ಸಚಿವ ಬಿ. ಶ್ರೀರಾಮುಲು ಹೇಳಿಕೆಗೆ ಡಿ.ಕೆ. ಶಿವಕುಮಾರ ಟಾಂಗ್ ನೀಡಿದರು. ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಮೊದಲು ನೋಡಿಕೊಳ್ಳಲಿ. ಶ್ರೀರಾಮುಲು ಅಣ್ಣನ ವಿಚಾರ ಎಲ್ಲರಿಗೂ ಗೊತ್ತಿದೆ. ರಾಜ್ಯದ ಜನರಿಗೆ ಕುರ್ಚಿ ಕೊಡಿಸಬೇಕೆಂಬುದು ನಮ್ಮ ಬಯಕೆ. ಕುರ್ಚಿ ಕೊಡುವುದು ರಾಜ್ಯದ ಜನ. ರಾಜ್ಯದ ಜನರಿಗೆ ಉತ್ತಮ ಆಡಳಿತದ ಭರವಸೆ ಮೂಡಿಸುತ್ತಿದ್ದೇವೆ ಎಂದು ಹೇಳಿದರು.
ಸಿ.ಟಿ.ರವಿ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
ಈ ಕುರಿತಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ಸಿ.ಟಿ.ರವಿ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಧ್ವನಿಗೂಡಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪು ಬೆಂಬಲಿಸಿ RSS ಬೈಯ್ಯುವುದೇ ಸಿದ್ದರಾಮಯ್ಯ ಅವರ ಕಾಯಕ. ಕಾಂಗ್ರೆಸ್ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಯಿತು. ಮೋದಿ ಸರ್ಕಾರ ಬಂದ ನಂತರ ಕೋಮು ಗಲಭೆಗಳು ನಿಂತಿವೆ ಎಂದು ಹೇಳಿದರು.
ಇದನ್ನೂ ಓದಿ: ಟಿಪ್ಪು ಬೆಂಬಲಿಸಿ, RSS ಬೈಯ್ಯುವುದೇ ಸಿದ್ದರಾಮಯ್ಯನ ಕಾಯಕ: ಜಗದೀಶ್ ಶೆಟ್ಟರ್ ವಾಗ್ದಾಳಿ
ಸಿದ್ದರಾಮಯ್ಯ ಅಧಿಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ
ಸಿದ್ದರಾಮಯ್ಯ ಅಧಿಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಧಾರವಾಡಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಸಿದ್ದರಾಮಯ್ಯ ಕುಂಕುಮ, ತಿಲಕವಿಟ್ಟವರನ್ನು ನೋಡಿದರೆ ಹೆದರಿಕೆ ಆಗುತ್ತೆ ಎಂದಿದ್ದರು. ತಮ್ಮ ಅಧಿಕಾರವಧಿಯಲ್ಲಿ PFI ಕಾರ್ಯಕರ್ತರನ್ನು ಬಿಡುಗಡೆ ಮಾಡಿದ್ದರು ಎಂದು ತಿಳಿಸಿದರು. ಸಿ.ಟಿ.ರವಿ ನಿವಾಸಕ್ಕೆ ಕಾಂಗ್ರೆಸ್ಸಿಗರು ಮುತ್ತಿಗೆ ಹಾಕುವ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್ ಮನೆಗಳಿಗೂ, ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಬಹುದು. ಆದರೆ ಆ ಸಂಸ್ಕೃತಿ ನಮ್ಮದಲ್ಲ. ಹೀಗಾಗಿ ಸಿದ್ದರಾಮಯ್ಯ ಪಟಾಲಂ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:58 pm, Mon, 28 November 22