ಚಿತ್ರದುರ್ಗದಲ್ಲಿ ಲಾರಿಗೆ ಕಾರು ಭೀಕರ ಡಿಕ್ಕಿ: ಕೊಪ್ಪಳ ಮೂಲದ ಮೂವರು ಯುವಕರು ಸಾವು, ಇಬ್ಬರಿಗೆ ಗಂಭೀರ ಗಾಯ
ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆ.ಆರ್. ಹಳ್ಳಿ ಗೇಟ್ ಬಳಿ ಲಾರಿ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ, ಹಿಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ಮೂಲದ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಹಿರಿಯೂರು, ಅ.6 : ಚಲಿಸುತ್ತಿದ್ದ ಲಾರಿಯ ಟೈರ್ ಏಕಾಏಕಿ ಸ್ಫೋಟಗೊಂಡು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ದಾರುಣವಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದರೆ, ಮತ್ತೊಬ್ಬ ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಮೃತರೆಲ್ಲರೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೂಲದವರು ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಕೆ.ಆರ್. ಹಳ್ಳಿ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ವೇಗವಾಗಿ ಚಲಿಸುತ್ತಿದ್ದ ಲಾರಿಯ ಟೈರ್ ಏಕಾಏಕಿ ಸ್ಫೋಟಗೊಂಡಿದೆ . ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಲಾರಿ ದಿಢೀರನೇ ರಸ್ತೆಯ ಎಡಭಾಗಕ್ಕೆ ವಾಲಿ ತಿರುಗಿದೆ. ಈ ವೇಳೆ ಲಾರಿಯ ಹಿಂದೆಯೇ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕನಿಗೆ ಕಾರು ನಿಯಂತ್ರಿಸಲು ಸಮಯವೇ ಸಿಗದೆ, ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆ ಪ್ರಯಾಣಿಸುತ್ತಿದ್ದ ಯುವಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕುಷ್ಟಗಿ ಮೂಲದ ಶಶಿಧರ್ (22) ಹಾಗೂ ಮಂಜುನಾಥ್ (22) ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜ್ (21) ಅವರನ್ನು ತಕ್ಷಣವೇ ಹಿರಿಯೂರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಉಸಿರು ಚೆಲ್ಲಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನ ಕೆರೆಯಲ್ಲಿ ಮುಳುಗಿ 3 ಬಾಲಕರು ಸಾವು
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




