D. Sudhakar Passes Away: ಸಚಿವ ಡಿ. ಸುಧಾಕರ್ ನಿಧನ, ಅನಾರೋಗ್ಯದಿಂದ ಬಳಲುತ್ತಿದ್ದ ನಾಯಕ ಇನ್ನಿಲ್ಲ

ಸಚಿವ ಡಿ. ಸುಧಾಕರ್ ನಿಧನ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

D. Sudhakar Passes Away: ಸಚಿವ ಡಿ. ಸುಧಾಕರ್ ನಿಧನ, ಅನಾರೋಗ್ಯದಿಂದ ಬಳಲುತ್ತಿದ್ದ ನಾಯಕ ಇನ್ನಿಲ್ಲ
ಚಿತ್ರದುರ್ಗ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ!
Edited By:

Updated on: May 10, 2026 | 8:29 AM

ಚಿತ್ರದುರ್ಗ, ಮೇ 10: ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ  ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಮಾಹಿತಿ ನೀಡಿವೆ.

ಮುಖ್ಯಾಂಶಗಳು

  • ಸಚಿವ ಡಿ. ಸುಧಾಕರ್ (65) ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶ
  • ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಸಚಿವರ ಅಕಾಲಿಕ ನಿಧನ
  • ನಾಲ್ಕು ಬಾರಿ ಶಾಸಕರಾಗಿದ್ದ ಚಿತ್ರದುರ್ಗದ ಪ್ರಭಾವಿ ರಾಜಕೀಯ ಚತುರನ ಜೀವನ ಪಯಣ ಅಂತ್ಯ

ಕಳೆದ ಒಂದು ತಿಂಗಳಿಂದ ಅನಾರೋಗ್ಯ

ಮೊದಲು ಮೊಣಕಾಲು ಸಂಬಂಧ ಆಪರೇಷನ್​ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಸಿಎಂ ಸಂತಾಪ

ಸಚಿವ ಸುಧಾಕರ್ ಸಾವಿಗೆ ಸಿಎಂ ಸಂತಾಪ ಸೂಚಿಸಿದ್ದು, ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು.

ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್​ ಮಾಡಿದ್ದಾರೆ.

ಕೌಟುಂಬಿಕ ಹಿನ್ನೆಲೆ

ಸಚಿವ ಡಿ. ಸುಧಾಕರ್ ಅವರು 1961 ಮಾರ್ಚ್​28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಇವರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದರೆ, ಪದವಿ ಶಿಕ್ಷಣವನ್ನು ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪೂರೈಸುವ ಮೂಲಕ ಮುಗಿಸಿದರು. ವೃತ್ತಿಜೀವನದಲ್ಲಿ ತಂದೆಯಿಂದ ಬಳುವಳಿಯಾಗಿ ಬಂದಿದ್ದ ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಇವರು, ನಂತರ ರಾಜಕೀಯದತ್ತ ಆಕರ್ಷಿತರಾದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯ ಕಲಿತ ಸುಧಾಕರ್, ಹಂತ ಹಂತವಾಗಿ ಬೆಳೆದು ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ

ವೈಯಕ್ತಿಕ ಜೀವನದಲ್ಲಿ ಸರಳ ವ್ಯಕ್ತಿತ್ವದ ಇವರು ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ. ಸಚಿವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲಿಕೆಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕದ ಛಾಯೆ ಆವರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:27 am, Sun, 10 May 26

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us