ಲಾರಿಗೆ ಕೆಎಸ್ಆರ್​ಟಿಸಿ ಬಸ್​​ ಡಿಕ್ಕಿ: ಚಾಲಕ ಸೇರಿ ಇಬ್ಬರು ಸಾವು; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗದ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೆಎಸ್ಆರ್​ಟಿಸಿ ಬಸ್ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಲಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ಲಾರಿಗೆ ಕೆಎಸ್ಆರ್​ಟಿಸಿ ಬಸ್​​ ಡಿಕ್ಕಿ: ಚಾಲಕ ಸೇರಿ ಇಬ್ಬರು ಸಾವು; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಎನ್​ಹೆಚ್​ 13ರಲ್ಲಿ ಅಪಘಾತ
Edited By:

Updated on: Oct 22, 2026 | 5:13 PM

ಮುಖ್ಯಾಂಶಗಳು

  • ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ NH 13ರಲ್ಲಿ ಅಪಘಾತ
  • ಲಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್​ಟಿಸಿ ಬಸ್
  • 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಇಬ್ಬರು ಸಾವು

ಚಿತ್ರದುರ್ಗ, ಅಕ್ಟೋಬರ್​​ 22: ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿಯ ಎನ್​​ಹೆಚ್​​ 13ರಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಲಾರಿಗೆ ಕೆಎಸ್ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನು ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ, ಪರಿಶೀಲನೆ 

ಬಸ್ ಚಾಲಕ ಬಾಪು ಪಾಟೀಲ್(36) ಮತ್ತು ಕೂಡ್ಲಿಗಿ ಮೂಲದ ಪ್ರಯಾಣಿಕ ಗಗನ್(14) ಮೃತ ದುರ್ದೈವಿಗಳು. ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ ಡಿಕ್ಕಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಸಾವು

ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆ ಫಾರೆಸ್ಟ್​ ಗೇಟ್ ಬಳಿ ಬೈಕ್​ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಅರುಣ್​(46) ಮೃತ ಪಾದಚಾರಿ. ಸೋಲದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಸದ್ಯ ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಚನ್ನಪಟ್ಟಣ ಎಕ್ಸ್‌ಪ್ರೆಸ್‌ವೇ ಯುವತಿ ಅಪಘಾತ ಸಾವಿಗೆ ಬಿಗ್ ಟ್ವಿಸ್ಟ್: ಇದು ಆಕ್ಸಿಡೆಂಟ್ ಅಲ್ಲ, ಭೀಕರ ಕೊಲೆ ಎಂದು ಪೋಷಕರ ಆರೋಪ

ಚಿಕ್ಕಗೊಲ್ಲರಹಟ್ಟಿಯಲ್ಲಿ ಸಹೋದರಿ ಪವಿತ್ರ ಜೊತೆ ಅರುಣ್​ ವಾಸವಿದ್ದರು. ಮೂರು ದಿನದ ಹಿಂದೆ ಎಂದಿನಂತೆ ರಾತ್ರಿ ವೇಳೆ ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ಮಾಗಡಿ ರಸ್ತೆಯ ಫಾರೆಸ್ಟ್ ಗೇಟ್ ಬಳಿ ಬೈಕ್​ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಅರುಣ್​ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Loading...
Unable to load recommendations.
Follow Us