ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಕೇಸ್ : ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಈ ಪ್ರಕರಣ ಸಂಬಂಧ ಸಚಿವ ಸ್ಥಾನ ಕಳೆದುಕೊಂಡಿದ್ದ ನಾಗೇಂದ್ರಗೆ ಇದೀಗ ಸಿಐಡಿ ಕ್ಲೀನ್ ಚಿಟ್ ನೀಡಿರುವುದು ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಬೆಂಗಳೂರು, ನವೆಂಬರ್ 25: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಕ್ಲೀನ್ ಚಿಟ್ ಸಿಕ್ಕಿದೆ. ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಇಂದು (ನವೆಂಬರ್ 25) ಸಿಐಡಿ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ನಾಗೇಂದ್ರಗೆ ಕ್ಲೀನ್ ಚಿಟ್ ನೀಡಲಾಗಿದೆ. ಇನ್ನು ಹಗರಣದ ಆರೋಪ ಹೊತ್ತಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಈ ಪ್ರಕರಣದ ಪ್ರಮುಖ ಸಾಕ್ಷಿಗಳನ್ನಾಗಿ ಪರಿಗಣಿಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ನಾಗೇಂದ್ರರನ್ನ ಪ್ರಕರಣದ ಸಾಕ್ಷಿಯನ್ನಾಗಿ ಮಾಡಿದ ಸಿಐಡಿ
ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಈ ಹಗರಣದ ಪ್ರಮುಖ ಆರೋಪಿಗಳಾಗಿದ್ದಾರೆ. ನಿಗಮದ ಹಣವನ್ನು ಮಾಜಿ ಸಚಿವ ಬಿ. ನಾಗೇಂದ್ರ ಅವರು ಎಲ್ಲೂ ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಸಿಐಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. ಅಲ್ಲದೇ ಈ ಪ್ರಕರಣದ ಸಾಕ್ಷಿಯನ್ನಾಗಿ ಪರಿಗಣಿಸಿದೆ.
ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಕೋರ್ಟ್ಗೆ ತನಿಖಾ ವರದಿ ಸಲ್ಲಿಸಿದ ಇಡಿ
ಪ್ರಮುಖ ಆರೋಪಿ ನೆಕ್ಕುಂಟಿ ನಾಗರಾಜ್, ನಿಗಮದ ಎಂಡಿ ಪರುಶರಾಮ್ ಅವರೊಂದಿಗೆ ಸೇರಿ ರಹಸ್ಯ ಡೀಲ್ ಮಾಡಿಕೊಂಡಿದ್ದ. ನಿಗಮದ ಹಣವನ್ನು ಹೂಡಿಕೆ ಮಾಡಿದರೆ ದುಪ್ಪಟ್ಟು ಮಾಡಿಕೊಡುವುದಾಗಿ ಪುಸಲಾಯಿಸಿ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದ. ಎಂಡಿ ಮತ್ತು ಆರೋಪಿಗಳ ನಡುವೆ ನಡೆದ ಈ ಅಕ್ರಮ ವ್ಯವಹಾರಗಳು ಹಾಗೂ ಹಣ ವರ್ಗಾವಣೆಯ ವಿಚಾರ ಅಂದಿನ ಸಚಿವರಾಗಿದ್ದ ನಾಗೇಂದ್ರ ಅವರ ಗಮನಕ್ಕೆ ಬಂದಿರಲಿಲ್ಲ ಎಂದು ಸಿಐಡಿ ತನ್ನ ಅಂತಿಮ ವರದಿಯಲ್ಲಿ ಉಲ್ಲೇಖಿಸಿದೆ.
ಪ್ರಕರಣದ ಹಿನ್ನೆಲೆ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇನ್ನು ಇದು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು.
ಇನ್ನು ಈ ಪ್ರಕರಣಕ್ಕೆ ಸಂಬಂದಿಸಿದಂತೆ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ನಾಗೇಂದ್ರ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್ ಅವರು ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿತ್ತು.
