ಕದ್ದು ಆಸ್ತಿ ಮಾಡಿಲ್ಲ, ಗೊಡ್ಡು ಬೆದರಿಕೆಗೆಲ್ಲ ಬಗ್ಗಲ್ಲ: ಕುಮಾರಸ್ವಾಮಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ತಿರುಗೇಟು

ಕೇಂದ್ರ ಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮಾಡಿದ್ದ ಆಸ್ತಿ ಆರೋಪಗಳಿಗೆ ಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಕಾನೂನು ಚೌಕಟ್ಟಿನಲ್ಲೇ ಆಸ್ತಿ ಸಂಪಾದಿಸಿದ್ದು, ಯಾವುದೇ ಬೆದರಿಕೆ ಅಥವಾ ಬ್ಲ್ಯಾಕ್‌ಮೇಲ್‌ಗೆ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಹಾಗೂ ಕುಟುಂಬದ ಆಸ್ತಿ ವಿಚಾರದಲ್ಲಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡುವಂತೆ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.

ಕದ್ದು ಆಸ್ತಿ ಮಾಡಿಲ್ಲ, ಗೊಡ್ಡು ಬೆದರಿಕೆಗೆಲ್ಲ ಬಗ್ಗಲ್ಲ: ಕುಮಾರಸ್ವಾಮಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ತಿರುಗೇಟು
ಸಿಎಂ ಡಿಕೆ ಶಿವಕುಮಾರ್ ಹಾಗೂ ಕೇಂದ್ರ ಮಂತ್ರಿ ಹೆಚ್​ಡಿ ಕುಮಾರಸ್ವಾಮಿ
Image Credit source: PTI

Updated on: Sep 30, 2026 | 7:04 AM

ನವದೆಹಲಿ, ಸೆಪ್ಟೆಂಬರ್ 30: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಂಗಳವಾರ ಮಾಡಿರುವ ಭೂಕಬಳಿಕೆ ಆರೋಪಗಳಿಗೆ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಆಸ್ತಿ ವಿಚಾರದಲ್ಲಿ ಕಾನೂನುಬದ್ಧವಾಗಿ ನಡೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಟೀಕಿಸಿದ್ದಾರೆ.

ಡಿಕೆ ಶಿವಕುಮಾರ್ ಎಕ್ಸ್ ಸಂದೇಶದಲ್ಲೇನಿದೆ?

‘ಕುಮಾರಸ್ವಾಮಿ ಹತಾಶರಾಗಿದ್ದಾರೆ. ನಾನು ಕಾನೂನು ಚೌಕಟ್ಟಿನಲ್ಲಿ ಆಸ್ತಿ ಸಂಪಾದಿಸಿದ್ದೇನೆ. ಕುಮಾರಸ್ವಾಮಿ ಅವರು ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಬಿರುಕು, ತಾ ಮುಂದು ನಾ ಮುಂದು ಎಂಬ ಪೈಪೋಟಿಯಿಂದ ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ. ಅವರಿಗೆ ಇದನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಅವರು ಇಷ್ಟು ದಿನ ಏಕೆ ಸುಮ್ಮನಿದ್ದರು? ಅವರ ತಂದೆ ದೇವೇಗೌಡರೇ ಆ ಯೋಜನೆಗೆ (ನೈಸ್​ ಬಗ್ಗೆ) ಸಹಿ ಹಾಕಿದ್ದರು. ಜೊತೆಗೆ ಇವರೂ ಸಹ ಮುಖ್ಯಮಂತ್ರಿಯಾಗಿದ್ದರು. ಅಲ್ಲದೇ ಗಾಂಧಿ ಎನ್ನುವವರೊಬ್ಬರಿಗೆ ಇವರೇ ಪ್ರಯತ್ನಿಸಿ ಟೆಂಡರ್ ಕೊಡಿಸಿದರು. ಈ ವಿಚಾರವಾಗಿ ನ್ಯಾಯಾಲಯವು ಛೀಮಾರಿ ಹಾಕಿತ್ತು. ಬೇನಾಮಿ ಹೆಸರಿನಲ್ಲಿ ಅಲ್ಲಲ್ಲಿ ಸಾಕಷ್ಟು ವ್ಯವಹಾರಗಳು ನಡೆದವು. ಅವರಂತೆ ನಾನು ಹೆಸರುಗಳನ್ನು ತೆಗೆದುಕೊಳ್ಳಲು ಹೋಗುವುದಿಲ್ಲ’ ಎಂದು ಡಿಕೆ ಶಿವಕುಮಾರ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಅವರು ಐಟಿ ಅಧಿಕಾರಿಯೇ: ಡಿಕೆಶಿ ಪ್ರಶ್ನೆ

‘ನನ್ನ ಆಸ್ತಿ ವಿಚಾರವಾಗಿ ಮಾತನಾಡಿದ್ದಾರೆ. ರೈತನ ಮಗ, ಉದ್ಯಮಿಯಾದ ನನಗೆ ಆಸ್ತಿ ಇರಬಾರದೇ? ನನ್ನ ಮಕ್ಕಳು ಆಸ್ತಿ ಕೊಂಡುಕೊಳ್ಳಬಾರದೇ? ಕಾನೂನಿನಲ್ಲಿ ಇರುವ ಅವಕಾಶದಲ್ಲೇ ನಾನು ಆಸ್ತಿ ಮಾಡಿದ್ದೇ‌ನೆ, ತಪ್ಪೇನಿದೆ? ಕುಮಾರಸ್ವಾಮಿ ಅವರು ಏನಾದರೂ ಆದಾಯ ತೆರಿಗೆ ಅಧಿಕಾರಿಯೇ? ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಿ. ಇವರುಗಳು ಮಾತ್ರ ಯಾವುದೋ ಊರಿನಿಂದ ಬಂದು ಇಲ್ಲೆಲ್ಲಾ ಆಸ್ತಿಗಳನ್ನು ತೆಗೆದುಕೊಳ್ಳಬಹುದಾ? ಬಿಎಂಐಸಿಎಪಿಎ, ನೈಸ್ ರಸ್ತೆ ಯೋಜನೆಯೊಳಗೆ ಇವರ ಆಸ್ತಿ ಇಲ್ಲವೇ? ಆಸ್ತಿಗಳನ್ನು ಯಾರ್ಯಾರು ತೆಗೆದುಕೊಂಡಿದ್ದಾರೆ? ಯಾಕೆ ಇವರ ಆಸ್ತಿಗಳೆಲ್ಲಾ ವ್ಯಾಪ್ತಿಯಲ್ಲಿ, ಬಿಡದಿ ಟೌನ್‌ಶಿಪ್ ಯೋಜನೆಯೊಳಗೆ ಹೇಗೆ ಆಸ್ತಿ ಬಂದಿತು’ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಅವರು ಏನಾದರೂ ಮಾಡಿಕೊಳ್ಳಲಿ, ಅದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನನಗೆ ಆಸ್ತಿ ಇದೆ, ನನ್ನ ಮಕ್ಕಳಿಗೆ ಇನ್ನೂ ತೆಗೆದುಕೊಳ್ಳುವ ಶಕ್ತಿ ಇದ್ದರೆ ತೆಗೆದುಕೊಳ್ಳುತ್ತಾರೆ. ಕಾನೂನಿನಲ್ಲಿ ಅವಕಾಶ ಇದೆ, ಖರೀದಿ ಮಾಡುವ ಸಾಮರ್ಥ್ಯವಿದೆ, ಬದುಕುತ್ತಾರೆ ಎಂದು ಸಿಎಂ ಉಲ್ಲೇಖಿಸಿದ್ದಾರೆ.

ಕದ್ದು ಏನನ್ನೂ ಮಾಡಿಕೊಂಡಿಲ್ಲ: ಡಿಕೆಶಿ ಸ್ಪಷ್ಟನೆ

ನನಗೆ ಉದ್ದಿಮೆ ಮಾಡಲು ಎಲ್ಲಾ ರೀತಿಯ ಹಕ್ಕು, ಅವಕಾಶವಿದೆ. ನನ್ನ ಮಕ್ಕಳಿಗೂ ಸಾಮರ್ಥ್ಯವಿದೆ. ಇನ್ನೂ ಖರೀದಿ ಮಾಡುವ ಸಾಮರ್ಥ್ಯವಿದೆ. ನಾನು ಕದ್ದುಮುಚ್ಚಿ ಮಾಡುವ ಅವಶ್ಯಕತೆಯಿಲ್ಲ. ನನ್ನ ಆಸ್ತಿಯನ್ನು ಈಗಾಗಲೇ ಘೋಷಣೆ ಮಾಡಿಕೊಂಡಿದ್ದೇನೆ. ಕುಮಾರಸ್ವಾಮಿ ಅವರದ್ದು ಏನೇನಿದೆ ಎಂದು ನಾನು ಈಗ ಮಾತನಾಡಲು ಹೋಗುವುದಿಲ್ಲ. ನನಗೆ ಈ ವಿಚಾರಗಳನ್ನು ಯಾರೋ ಹೇಳಿದರು. ಕುಮಾರಸ್ವಾಮಿ ಅವರು ಎಲ್ಲಾ ಎತ್ತಿಕೊಂಡು ಹೋಗಿ ಸಂಸ್ಥೆಗಳಿಗೆಲ್ಲಾ ಈಗಾಗಲೇ ಕೊಟ್ಟಿದ್ದಾರಲ್ಲವೇ? ಇನ್ನೆಷ್ಟು ಬಾರಿ ಕೊಡುತ್ತಾರೆ? ಅವರಿಗೆ ಲಾರಿ ಬೇಕಾದರೆ ಕಳುಹಿಸಿಕೊಡೋಣ ಎಂದು ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು.

‘ಗೊಡ್ಡು ಬೆದರಿಕೆಗೆಲ್ಲಾ ಡಿಕೆ ಶಿವಕುಮಾರ್ ಹೆದರುವುದಿಲ್ಲ’

2007 ರಲ್ಲಿ ಅವರಿಗೆ ಅಧಿಕಾರವಿತ್ತಲ್ಲವೇ, ಇವರೇ ಹರಾಜಿನಲ್ಲಿ ನಿಖಿಲ್ ಗಾಂಧಿಗೆ ಕೊಟ್ಟಿದ್ದರಲ್ಲವೇ, ಯಾಕೆ ಮಾಡಲು ಆಗಿಲ್ಲ? ಅಧಿಕಾರದಲ್ಲಿದ್ದಾಗ ಟೋಲ್ ರದ್ದು ಮಾಡದವರು ಈಗ ದೇಶಾದ್ಯಂತ ಟೋಲ್ ಬಂದ್ ಮಾಡಿಸಲು ಪ್ರಧಾನಿ ಮೋದಿಯವರಿಗೆ ಹೇಳಲಿ. ಈ ಗೊಡ್ಡು ಬೆದರಿಕೆಗೆಲ್ಲಾ ಡಿ.ಕೆ. ಶಿವಕುಮಾರ್ ಹೆದರುವುದಿಲ್ಲ. ಈ ನಾಟಕ, ಡ್ರಾಮಾ, ಫಿಲಾಸಫಿ, ಬ್ಲ್ಯಾಕ್‌ಮೇಲ್ ಎಲ್ಲಾ ಬೇಕಾದಷ್ಟು ನೋಡಿದ್ದೇನೆ. ಇವುಗಳಿಗೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಮಾಡುವ ಕೆಲಸ ಮಾಡೋಣ. ನಮ್ಮ ಸರ್ಕಾರದ ಜನಪ್ರಿಯತೆಯನ್ನು ಅವರಿಗೆ ತಡೆದುಕೊಳ್ಳಲಾಗುತ್ತಿಲ್ಲ. ಅಸೂಯೆಗೆ ಮದ್ದಿಲ್ಲ ಎಂದು ಹಿಂದೆಯೂ ಹೇಳಿದ್ದೇನೆ, ಈಗಲೂ ಹೇಳುತ್ತಿದ್ದೇನೆ, ನಾಳೆಯೂ ಹೇಳುತ್ತೇನೆ ಎಂದು ಡಿಕೆಶಿ ಖಂಡತುಂಡವಾಗಿ ಹೇಳಿದ್ದಾರೆ.

ಬ್ಲ್ಯಾಕ್‌ಮೇಲ್, ಫೋನ್ ಟ್ಯಾಪಿಂಗ್ ತಂತ್ರಕ್ಕೆ ಹೆದರುವುದಿಲ್ಲ: ಸಿಎಂ

ಪಾರ್ಟ್ 1, 2, 3, 4 ಸ್ಟಿಂಗ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಅವರ ಹತ್ತಿರ ಇರುವುದೆಲ್ಲ ಗೊತ್ತಿದೆ. ಚೆನ್ನಿಗಪ್ಪನ ಕಾಲದಿಂದಲೂ ಗೊತ್ತಿದೆ. ಬಾಲಗಂಗಾಧರನಾಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್ ಅನ್ನೇ ಟ್ಯಾಪ್ ಮಾಡಿಸಿದವರು, ಅವರನ್ನೇ ಬಿಟ್ಟಿಲ್ಲ, ಇನ್ನು ನನ್ನನ್ನು ಬಿಡುತ್ತಾರೆಯೇ? ಹಾಗೆಂದು ಭಾವಿಸಿದರೆ ನಮ್ಮಂಥ ಮುಟ್ಠಾಳರು ಯಾರೂ ಇಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗಲೇ ನಾನು ಹೆದರಲಿಲ್ಲ, ಈಗ ಹೆದರುತ್ತೇನೆಯೇ? ನನ್ನನ್ನು ದೊಡ್ಡ ಬೆದರಿಕೆ ಹಾಕಿ ಹೆದರಿಸುವ ಅಥವಾ ಬ್ಲ್ಯಾಕ್‌ಮೇಲ್ ಮಾಡುವ ಜಾಯಮಾನ ನನ್ನದಲ್ಲ ಎಂದು ಸಿಎಂ ಹೇಳಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ಎಕ್ಸ್ ಸಂದೇಶ


ಇದನ್ನೂ ಓದಿ: ಸಿಎಂ ಡಿಕೆ ಶಿವಕುಮಾರ್​​ ಕುಟುಂಬದ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ ಕುಮಾರಸ್ವಾಮಿ: ಹಲವು ದಾಖಲೆಗಳೂ ರಿಲೀಸ್​​

ಸ್ವಂತ ಅಪ್ಪನನ್ನೇ, ಅಣ್ಣ-ತಮ್ಮಂದಿರನ್ನೇ ಜೀರ್ಣಿಸಿಕೊಳ್ಳಲಾಗದವರು ನಮ್ಮನ್ನು ಬಿಡುತ್ತಾರೆಯೇ? ನಾವೇನೂ ಅವರಿಂದ ಒಳ್ಳೆಯದನ್ನು ನಿರೀಕ್ಷಿಸಿಲ್ಲ. ನಮ್ಮ ಸರ್ಕಾರದ ಜನಪ್ರಿಯತೆಯನ್ನು ತಡೆದುಕೊಳ್ಳಲು ಆಗದೆ ಅಸೂಯೆಯಿಂದ ಹೀಗೆ ಮಾಡುತ್ತಿದ್ದಾರೆ. ಅವರಿಗೆ ಸಂಸ್ಕಾರವೂ ಇಲ್ಲ, ಸಂಸ್ಕೃತಿಯೂ ಇಲ್ಲ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us