ಬೆಂಗಳೂರು, ಜನವರಿ 22: ಯಲ್ಲಾಪುರದ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜತೆಗೆ, ಗಾಯಾಳುಗಳಿಗೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಂದೇಶ ಪ್ರಕಟಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ, ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ…
— CM of Karnataka (@CMofKarnataka) January 22, 2025
ರಾಜ್ಯದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತರಕಾರಿ ಲಾರಿ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಪಲ್ಟಿಯಾಗಿ 10 ಮಂದಿ ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಯಲ್ಲಾಪುರ: ಗುಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 10 ಜನ ಸಾವು
ಮತ್ತೊಂದೆಡೆ, ರಾಯಚೂರಿನ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಟೈರ್ ಸ್ಫೋಟಗೊಂಡು ಕ್ರೂಸರ್ ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 10 ಜನರಿಗೆ ಗಂಭೀರ ಗಾಯಗಳಾಗಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ