Shakti Scheme: ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ; ಸಿದ್ದರಾಮಯ್ಯ ಘೋಷಣೆ, ಯಾವೆಲ್ಲ ಬಸ್‌ಗಳಲ್ಲಿ?
ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ಈಗಾಗಲೇ ತಿಳಿಸಿರುವಂತೆ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು (Shakti Scheme) ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಎಲ್ಲಾ ಮಹಿಳೆಯರು ರಾಜ್ಯದೊಳಗೆ ಉಚಿತವಾಗಿ ಪ್ರಯಾಣಿಸಬಹುದು. ಹವಾನಿಯಂತ್ರಿತ (AC) ಬಸ್‌ಗಳು ಮತ್ತು ಅಂತರರಾಜ್ಯ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣ ಸೌಲಭ್ಯ ಇರುವುದಿಲ್ಲ. ಎಕ್ಸ್‌ಪ್ರೆಸ್ ಬಸ್‌ಗಳು ಸೇರಿದಂತೆ ಎಲ್ಲಾ ಇತರ ಬಸ್‌ಗಳಲ್ಲಿ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ತಿಳಿಸಿದ್ದಾರೆ.
ಯಾವೆಲ್ಲ ಬಸ್‌ಗಳಲ್ಲಿ ಉಚಿತ ಪ್ರಯಾಣ?
- ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ
- ಎಸಿ, ನಾನ್ ಎಸಿ ಸ್ಲೀಪರ್ ಬಸ್‌ಗಳಲ್ಲಿ ಉಚಿತ ಪ್ರಯಾಣವಿಲ್ಲ
- ಎಸಿ ಮತ್ತು ಐಷಾರಾಮಿ ಬಸ್‌ಗಳಲ್ಲಿ ಉಚಿತ ಪ್ರಯಾಣವಿಲ್ಲ
- ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ
- KSRTC ಬಸ್‌ಗಳಲ್ಲಿ ಶೇ 50ರಷ್ಟು ಸೀಟ್ ಪುರುಷರಿಗೆ ಮೀಸಲು
- ಬಿಎಂಟಿಸಿ ಬಸ್‌ಗಳಲ್ಲಿ ಯಾವುದೇ ಸೀಟ್ ಮೀಸಲು ಇರುವುದಿಲ್ಲ
ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್ಗಳೇನು? ಇಲ್ಲಿದೆ ವಿವರ
ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ ಐದು ಭರವಸೆಗಳಲ್ಲಿ ಉಚಿತ ಬಸ್ ಪ್ರಯಾಣವೂ ಒಂದು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿತು.
5 ಗ್ಯಾರಂಟಿಗಳ ಜಾರಿಗೆ ಯಾವುದೇ ಗೊಂದಲವಿಲ್ಲದಂತೆ ಪರಿಹರಿಸಲು ಪ್ರತ್ಯೇಕ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯಕ್ಕೆ ಪ್ರತ್ಯೇಕವಾಗಿ ಮಾರ್ಗಸೂಚಿ ಪ್ರಕಟಿಸಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:23 pm, Fri, 2 June 23