ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐತಿಹಾಸಿಕ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಸರ್ಕಾರ ರಚನೆಯಲ್ಲಿಯ ಆರಂಭದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ ಬಿದ್ದಿತ್ತು. ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನೂ ಸಹ ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸಿ ಹಂಚಲಾಗಿತ್ತು. ಇದೀಗ ತೀವ್ರ ಕುತೂಹಲ ಮೂಡಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ. ಹಾಗಾದ್ರೆ, ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.
ಇದರಲ್ಲಿ ಪ್ರಮುಖ ಅಂಶ ಅಂದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಮನಗರ ಬಿಟ್ಟು ಬೆಂಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಇನ್ನು ರಾಮನಗರ ಜಿಲ್ಲಾ ಉಸ್ತುವಾರಿಯನ್ನು ರಾಮಲಿಂಗಾರೆಡ್ಡಿ ಅವರಿಗೆ ವಹಿಸಲಾಗಿದೆ.
ನಿರೀಕ್ಷೆಯಂತೆ ಸಚಿವ ಸತೀಶ್ ಜಾರಕಿಹೊಳಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸ್ಥಾನ ಸಿಕ್ಕಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿರಾಸೆಯಾಗಿದೆ. ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಿಗುವುದು ಅನುಮಾನ ಎಂದು ಅರಿತುಕೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಕ್ಷೇತ್ರಕ್ಕೆ ಹತ್ತಿರವಾಗುವ ಧಾರವಾಡ ಅಥವಾ ಉತ್ತರ ಕನ್ನಡದ ಮೇಲೆ ಕಣ್ಣಿಟ್ಟಿದ್ದರು. ಆದ್ರೆ, ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಉಡುಪಿ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು ಸಂತೋಷ್ ಲಾಡ್‌ಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಿಕ್ಕಿದೆ.
ಜಿಲ್ಲೆಗಳ ಉಸ್ತುವಾರಿ ಸ್ಥಾನಕ್ಕೆ ಪೈಪೋಟಿ ಶುರುವಾಗಿತ್ತು, ಅದರಲ್ಲೂ ಮುಖ್ಯವಾಗಿ ಒಂದೇ ಜಿಲ್ಲೆಯ ಇಬ್ಬರು ಸಚಿವರುಗಳ ನಡುವೆ ಭಾರೀ ಲಾಬಿಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ತಲೆನೋವಾಗಿತ್ತು. ಆದರೆ, ಇದೀಗ ಎಲ್ಲಾ ಗೊಂದಲಗಳನ್ನು ನಿವಾರಿಸಿ ಅಂತಿಮವಾಗಿ ಜಿಲ್ಲಾ ಉಸ್ತುವಾರಿಗಳನ್ನ ನೇಮಕ ಮಾಡಲಾಗಿದೆ.
Published On - 2:14 pm, Fri, 9 June 23