ಕಾಂಗ್ರೆಸ್ ಪಾಳಯದಲ್ಲಿ ಎಲ್ಲವೂ ಸಸ್ಪೆನ್ಸ್: ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ ಭೇಟಿ
ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ದೆಹಲಿಗೆ ತೆರಳಿದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಡಿ.ಕೆ. ಸುರೇಶ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದಾರೆ. ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಹೈಕಮಾಂಡ್ ಭೇಟಿ ಬಗ್ಗೆ ವರದಿಗಳಿದ್ದು, ಈ ಸಂಜೆ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರು ಭೇಟಿಯೂ ಕುತೂಹಲ ಮೂಡಿಸಿದೆ.
ಬೆಂಗಳೂರು, ನವೆಂಬರ್ 21: ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಗಳು ನಡೆಯುತ್ತಿವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಅವರ ಸಹೋದರ ಡಿ.ಕೆ. ಸುರೇಶ್ ಭೇಟಿ ನೀಡಿದ್ದಾರೆ. ಇದೇ ವೇಳೆ, ಶಾಸಕ ಜಿ.ಎಸ್. ಪಾಟೀಲ್ ಮತ್ತು ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ್ ಕೂಡ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಮತ್ತೊಂದೆಡೆ, ಕೆಲವು ಶಾಸಕರು ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಶಾಸಕರು ಮತ್ತು ಸಚಿವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
ದೆಹಲಿಯಲ್ಲಿರುವ ಸಚಿವ ಚಲುವರಾಯಸ್ವಾಮಿ ಅವರಿಗೆ ಕರೆ ಮಾಡಿರುವ ಸಿಎಂ, ಅವರ ದೆಹಲಿ ಭೇಟಿಯ ಉದ್ದೇಶದ ಬಗ್ಗೆ ವಿಚಾರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಇಲಾಖೆಗೆ ಸಂಬಂಧಿಸಿದ ಕಾರ್ಯಗಳಿಗಾಗಿ ಮತ್ತು ಕೇಂದ್ರ ಸಚಿವರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ. ಈ ನಡುವೆ, ದೆಹಲಿಯಲ್ಲಿ ಕೆಲವು ಶಾಸಕರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಎರಡೂ ಬಣಗಳು ಅವರನ್ನು ಭೇಟಿ ಮಾಡಲು ಸಮಯ ಕೇಳಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
