Chalo Delhi: ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

| Updated By: ಗಣಪತಿ ಶರ್ಮ

Updated on: Feb 07, 2024 | 12:31 PM

ದೆಹಲಿಯ ಜಂತರ್​ ಮಂತರ್​ನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆಯೋಜಿಸಿರುವ ‘ಛಲೋ ದೆಹಲಿ’ ಪ್ರತಿಭಟನೆಗೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದರು.

Chalo Delhi: ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಸಿಎಂ ಸಿದ್ದರಾಮಯ್ಯ
Follow us on

ನವದೆಹಲಿ, ಫೆಬ್ರವರಿ 7: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಇದು ರಾಜಕೀಯ ಚಳವಳಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಗಳವಾರ ಹೇಳಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್​ ಮಂತರ್​​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಯೋಜಿಸಿರುವ ‘ಛಲೋ ದೆಹಲಿ’ (Chalo Delhi) ಪ್ರತಿಭಟನೆಗೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಎಲ್ಲ ಶಾಸಕರು, ಸಚಿವರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದು ರಾಜಕೀಯ ಹೋರಾಟ ಅಲ್ಲ, ಇದು ಕನ್ನಡಿಗರ ಹಿತ ಕಾಪಾಡುವ ಚಳವಳಿ ಎಂದರು,

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಎಸಗಿದೆ. ಈ ವಿಚಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಆಗಿದೆ. ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದೆ. ಇದು ಐತಿಹಾಸಿಕವಾದ ಚಳವಳಿ. ಸುಮಾರು ಶೇ 40-45 ರಷ್ಟು ತೆರಿಗೆ ಪಾಲು ನಮಗೆ ಬರಬೇಕು. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. 100 ರೂ. ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಅಷ್ಟೇ ನಮಗೆ ಬರುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಅನುದಾನ ನೀಡಬೇಕು. 14ನೇ ಹಣಕಾಸು ಆಯೋಗದ ನಿಯಮಾನುಸಾರ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದ ನಿಯಮಾನುಸಾರ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು ಎಂದು ಸಿಎಂ ಆಗ್ರಹಿಸಿದರು.

ಬಜೆಟ್ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ಸಿದ್ದರಾಮಯ್ಯ

ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ ಎಂದೂ ಸಿದ್ದರಾಮಯ್ಯ ಹೇಳಿದರು. ಬಜೆಟ್​​​ ಕೂಡ ಒಂದು ಶ್ವೇತಪತ್ರವೇ ಆಗಿದೆ. ಆದರೂ ನಾವು ಶ್ವೇತಪತ್ರ ಹೊರಡಿಸುತ್ತೇವೆ ಎಂದು ಅವರು ಹೇಳಿದರು. ಯುಪಿಎ ಅವಧಿಯ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇವೆ ಎಂಬ ಬಿಜೆಪಿ ಸರ್ಕಾರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗೆಯೇ ಸೆಸ್​, ಸರ್​​ಚಾರ್ಜ್ ಬಗ್ಗೆಯೂ ಹೊರಡಿಸಲಿ ಎಂದರು.

ಕರ್ನಾಟಕದಲ್ಲಿ ಬರಗಾಲ ಇದೆ. ಐದು ತಿಂಗಳಾದರೂ ಕೇಂದ್ರ ಸರ್ಕಾರ ಇದುವರೆಗೂ ಹಣ ನೀಡಿಲ್ಲ. ನಮ್ಮ ಸಚಿವರು ಕೇಂದ್ರ ಸರ್ಕಾರದ ಮಂತ್ರಿಗಳನ್ನು ಭೇಟಿಯಾದರು. ನಾನೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದೆ. ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದೆ. ಆಗ ಅಮಿತ್ ಶಾ, ಡಿಸೆಂಬರ್ 23 ರಂದು ಸಭೆ ಕರೆದು ನಿರ್ಧಾರ ತೆಗೆದುಕೊಳ್ತೀನಿ ಅಂದರು. ಆದರೆ ಏನೂ ಮಾಡಿಲ್ಲ ಎಂದರು.

ಇಷ್ಟು ದೊಡ್ಡಬರಗಾಲ ರಾಜ್ಯದಲ್ಲಿ ಎಂದೂ ಬಂದಿರಲಿಲ್ಲ. ನಾವು 17 ಸಾವಿರದ 900 ಕೋಟಿ ರೂಪಾಯಿ ಪರಿಹಾರ ಕೇಳಿದ್ದೆವು. ಎಂನರೇಗಾದ ಅಡಿಯಲ್ಲಿ ಕೆಲಸದ ದಿನಗಳನ್ನು 150 ದಿನ ಮಾಡಿ ಅಂತಾ ಕೇಳಿದ್ವಿ. ಅದನ್ನೂ ಮಾಡಿಲ್ಲ ಎಂದು ಸಿದ್ದರಾಮಯ್ಯ ದೂರಿದರು.

ಆದರೆ ನೀರಾವರಿ ಯೋಜನೆಗೆ, ಭದ್ರಾ ಮೇಲ್ದಂಡೆಗೆ 5300 ಕೋಟಿ ಕೊಡುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಭದ್ರಾ ಮೇಲ್ದೆಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದರು. ಈಗ ಕೇಂದ್ರ ಸರ್ಕಾರ ಏನೂ ಕೊಡಲ್ಲ ಅಂದರೆ ಹೇಗೆ? ಬಜೆಟ್ ಭಾಷಣದಲ್ಲಿ ಬೊಮ್ಮಾಯಿ ಮತ್ತೆ ಆ ವಿಚಾರ ಪ್ರಸ್ತಾಪಿಸಿದ್ದು ಹೇಗೆ? ಅವರು ಸಿಎಂ ಆಗಿದ್ದವರಲ್ಲವಾ? ಅವರದ್ದ ಸರ್ಕಾರ ಏಕೆ ಕೊಡ್ತಾ ಇಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: ಡಿಕೆ ಶಿವಕುಮಾರ್, ಬಿಆರ್ ನಾಯ್ಡು ವಿರುದ್ಧ ತನಿಖೆಗೆ ಕೋರ್ಟ್​ ಆದೇಶ: ಏನಿದು ಕೇಸ್?

ಕೋಲೆ ಬಸವನಂತೆ ಬಿಜೆಪಿ ಸಂಸದರು

ರಾಜ್ಯದ ಬಿಜೆಪಿ ಸಂಸದರ ಸ್ಥಿತಿ ಕೋಲೆ ಬಸವನ ರೀತಿಯಂತೆ ಆಗಿದೆ. ಪ್ರಧಾನಿ ಮೋದಿ ಹೇಳಿದ್ದಕ್ಕೆ ಬರೀ ತಲೆ ಅಲ್ಲಾಡಿಸುತ್ತಾರೆ ಅಷ್ಟೆ. ನಮ್ಮ ಸಂಸದರಿಗೂ ಪ್ರತಿಭಟನೆಗೆ ಬರುವಂತೆ ಆಹ್ವಾನಿಸಿದ್ದೆ. ಆದರೆ ಬಿಜೆಪಿ ಸಂಸದರು ಯಾರೂ ಬಂದಿಲ್ಲ. ಬಿಜೆಪಿ ಸಂಸದರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಳಲಿ. ಪ್ರಧಾನಿ ಮೋದಿ, ವಿತ್ತ ಸಚಿವೆ ನಿರ್ಮಲಾ ಬಳಿ ಹೋಗಿ ಕೇಳಲಿ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮನವರಿಕೆ ಮಾಡಿಕೊಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:56 am, Wed, 7 February 24