ಮೂವರು ನಾಯಕರಿಂದ ನನ್ನ ವಿರುದ್ಧ ಷಡ್ಯಂತ್ರ: ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಳಲು
ವಿಧಾನಸಭೆ ಕಲಾಪ ರಂಗೇರುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಹೀಗಾಗಿ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿಯನ್ನು ಎದುರಿಸುವ ನಿಟ್ಟಿನಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆ ಸೂಚನೆಗಳನ್ನು ನೀಡಿದರು.
ಬೆಂಗಳೂರು, ಜುಲೈ 19: ಮೂರು ಮಂದಿ ರಾಜಕೀಯ ನಾಯಕರು ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಚ್ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ ಹಾಗೂ ಬಿಎಲ್ ಸಂತೋಷ ನನ್ನ ತೇಜೋವಧೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಗುರುವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಮ್ಮ ಕುಟುಂಬದಿಂದ ಯಾವುದೇ ಅಕ್ರಮ ಆಗಿಲ್ಲ. ಕಾನೂನು ವ್ಯಾಪ್ತಿ ಮೀರಿ ನಾವು ಏನು ಎಲ್ಲೂ ಮಾಡಿಲ್ಲ. ವಾಲ್ಮೀಕಿ ನಿಗಮ ಪ್ರಕರಣದಲ್ಲೂ ಸರ್ಕಾರದಿಂದ ಯಾವುದೇ ತಪ್ಪು ಆಗಿಲ್ಲ. ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರು ಸರ್ಕಾರಕ್ಕೆ ಹಾನಿ ಮಾಡಲು ಯತ್ನಿಸುತ್ತಿದ್ದಾರೆ. ಈ ವಿಚಾರದಲ್ಲಿ ಶಾಸಕರಿಗೆ ಯಾವುದೇ ಅನುಮಾನ ಬೇಡ ಎಂದು ಸಿದ್ದರಾಮಯ್ಯ ಹೇಳಿದರು.
ಸಚಿವರು, ಶಾಸಕರಿಗೆ ಖಡಕ್ ಸೂಚನೆ
ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಮತ್ತು ಸಚಿವರು ವಿಧಾನಸಭೆ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಸದನದಲ್ಲಿ ನಾವು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಇಷ್ಟು ದಿನ ರಕ್ಷಣಾತ್ಮಕವಾಗಿ ನಡೆದುಕೊಂಡಿದ್ದು ಸಾಕು. ಇನ್ನು ಮುಂದೆ ಆಕ್ರಮಣಕಾರಿಯಾಗಿ ವರ್ತನೆ ಮಾಡಬೇಕಿದೆ. ಇಷ್ಟರವರೆಗೆ ಬಿಜೆಪಿ ಹೇಳಿದ್ದನ್ನು ಕೇಳಿಕೊಂಡು ಕುಳಿತಿದ್ದೇವೆ. ಇನ್ನು ಮುಂದೆ ನೇರ ಬಿಜೆಪಿಗೆ ಟಕ್ಕರ್ ಕೊಡಬೇಕು. ಬಿಜೆಪಿಯವರು ಹೇಳಿದ್ದನ್ನು ಕೇಳಿಕೊಂಡು ಬರುವುದಕ್ಕೆ ನಾವು ಸದನಕ್ಕೆ ಹೋಗುವುದಲ್ಲ ಎಂದು ಶಾಸಕರಿಗೆ ಸಿದ್ದರಾಮಯ್ಯ ಹೇಳಿದರು.
ಕಲಾಪದಲ್ಲಿ ಬಿಜೆಪಿಯ ಲೋಪಗಳನ್ನು ಎತ್ತಿ ಹಿಡಿದು ತೋರಿಸಬೇಕು. ಮುಡಾದಲ್ಲಿ ನಮ್ಮಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿದ್ದರಾಮಯ್ಯ ಶಾಸಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಯು ಟರ್ನ್ ಸರ್ಕಾರ ಎಂದು ಗುಡುಗಿದ ವಿಜಯೇಂದ್ರ
ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಪರಿಶಿಷ್ಟ ಪಂಗಡಗಳ ಅನುದಾನವನ್ನು ಗ್ಯಾರೆಂಟಿ ಯೋಜನೆಗಳು ಬಳಸಿಕೊಂಡ ವಿಚಾರವಾಗಿ ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ ಆಡಳಿತ ರೋಡ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದೆ. ಈ ನೆಲೆಯಲ್ಲಿ ಶಾಸಕಾಂಗ ಪಕ್ಷದ ಮೇಲೆ ಸಿದ್ದರಾಮಯ್ಯ ಶಾಸಕರಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:34 am, Fri, 19 July 24