ನಾಳೆಯಿಂದ ಮುಂಗಾರು ಅಧಿವೇಶನ: ಚರ್ಚೆಗೆ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ
ನಾಳೆಯಿಂದ (ಜುಲೈ 15) ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಈ ಬಾರಿ ಅಧಿವೇಶದಲ್ಲಿ ಹಗರಣಗಳ ಬಗ್ಗೆ ಪ್ರಸ್ತಾಪಿಸಲು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಿರ್ಧರಿಸಿವೆ. ಇದಕ್ಕೆ ಪ್ರತಿಯಾಗಿ ಗಟ್ಟಿಯಾಗಿ ನಿಲ್ಲಲು ಸಹ ಸಿದ್ದರಾಮಯ್ಯ ಸರ್ಕಾರ ಸನ್ನದ್ಧವಾಗಿದೆ. ಇದಕ್ಕೆ ಪೂಕರಕವೆಂಬಂತೆ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಚರ್ಚೆಗೆ ಸಮರ್ಪಕ ಉತ್ತರ ನೀಡಲು ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರು, (ಜುಲೈ 14): ನಾಳೆಯಿಂದ (ಜುಲೈ 15) ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜುಲೈ 14) ಅಧಿಕಾರಿಗಳ ಸಭೆ ಮಾಡಿದರು. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ದಿನಾಂಕ 14-7-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಸಭೆ: ಮುಡಾ, ವಾಲ್ಮೀಕಿ ಹಗರಣ ತಾರ್ಕಿಕ ಅಂತ್ಯದವರೆಗೂ ಮುಂದುವರಿಸಲು ನಿರ್ಧಾರ
ಈ ಬಾರಿ ಸಂಪೂರ್ಣ ಬಜೆಟ್‌ಗೆ ಮಾರ್ಚ್ ನಲ್ಲಿಯೇ ಅನುಮೋದನೆ ದೊರೆತಿರುವ ಕಾರಣ ಇದು ಬಜೆಟ್ ಬಗ್ಗೆ ಚರ್ಚಿಸುವ ಅಧಿವೇಶನ ಅಲ್ಲ. ಯಾವಗಲೂ ಮಾರ್ಚ್ ನಲ್ಲಿ ಲೇಖಾನುದಾನ ಪಡೆದು, ಮಳೆಗಾಲದ ಅಧಿವೇಶನದಲ್ಲಿ ಪೂರ್ಣ ಬಜೆಟ್ ಗೆ ಅನುಮೋದನೆ ಪಡೆಯಲಾಗುತ್ತಿತ್ತು. ಈ ಬಾರಿ ಪೂರ್ಣ ಬಜೆಟ್ ಅನುಮೋದನೆ ಆಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದವರು ಈ ಬಾರಿಯ ಸಂಪೂರ್ಣ ಅಧಿವೇಶನವನ್ನು ವಿವಿಧ ಆರೋಪ ಮಾಡುವ ಕುರಿತು ಬಳಸಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಸೂಕ್ತ ಉತ್ತರ ನೀಡಲು ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ಸೂಚಿಸಿದರು.
ವಿವಿಧ ಇಲಾಖೆಗಳಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇರುವ ವಿಷಯಗಳ ಕುರಿತು ಇಲಾಖಾ ಕಾರ್ಯದರ್ಶಿಗಳಿಂದ ಮುಖ್ಯಮಂತ್ರಿಗಳು ಸವಿಸ್ತಾರವಾಗಿ ಮಾಹಿತಿ ಪಡೆದರು. ಇನ್ನು ಚರ್ಚೆಯ ಸಾಧ್ಯತೆ ಇರುವ ವಿಷಯಗಳ ಕುರಿತು ದತ್ತಾಂಶಗಳನ್ನು ಸಂಗ್ರಹಿಸಲು ಸಹ ಸೂಚನೆ ನೀಡಿದರು.
ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ತಿಳಿಸಿದರು.
ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.