AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಜತೆ ಬ್ರೇಕ್​ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾಯಕತ್ವ ವಿಚಾರವಾಗಿ ಮಹತ್ವದ ಘೋಷಣೆ ಮಾಡಿದರು. ಆ ಕುರಿತ ವಿವರ ಇಲ್ಲಿದೆ.

ಡಿಕೆ ಶಿವಕುಮಾರ್ ಜತೆ ಬ್ರೇಕ್​ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ
Ganapathi Sharma
|

Updated on:Nov 29, 2025 | 11:45 AM

Share

ಬೆಂಗಳೂರು, ನವೆಂಬರ್ 29: ಇತ್ತೀಚಿನ ದಿನಗಳಲ್ಲಿ, ಅದರಲ್ಲೂ ಸುಮಾರು ಒಂದು ತಿಂಗಳಿನಿಂದ ಅನಗತ್ಯವಾಗಿ ಕಾಂಗ್ರೆಸ್​​ನಲ್ಲಿ (Congress) ಕೆಲವು ಗೊಂದಲಗಳು ನಿರ್ಮಾಣವಾಗಿವೆ. ಈ ಕಾರಣಕ್ಕೆ ಪಕ್ಷದ ಹೈಕಮಾಂಡ್ ಸೂಚನೆಯಂತೆ ನಾನು ಮತ್ತು ಉಪ ಮುಖ್ಯಮಂತ್ರ ಡಿಕೆ ಶಿವಕುಮಾರ್ (DK Shivakumar) ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ. ಇವತ್ತಿನ ವರೆಗೆ ನಮ್ಮ ಮಧ್ಯೆ ಯಾವುದೇ ಗೊಂದಲಗಳಿರಲಿಲ್ಲ. ಮುಂದೆಯೂ ಇದೇ ತರ ಮುಂದುವರಿಯಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಶನಿವಾರ ತಿಳಿಸಿದರು. ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ನಮಗೆ ಕರೆ ಮಾಡಿದ್ದ ಹೈಕಮಾಂಡ್​ ನಾಯಕರು, ಗೊಂದಲ ತಿಳಿ ಮಾಡುವ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದರು. ಅದರಂತೆ ನಡೆದುಕೊಳ್ಳುತ್ತೇವೆ. ಹೈಕಮಾಂಡ್ ಸೂಚನೆಯಂತೆಯೇ ನಡೆದುಕೊಳ್ಳುತ್ತೇವೆ ಎಂದು ಈ ಹಿಂದೆಯೂ ಸ್ಪಷ್ಟಪಡಿಸಿದ್ದೆ. ಹೀಗಾಗಿ ನಮ್ಮ ನಡುವೆ ನಾಳೆಯಿಂದ ಯಾವುದೇ ಗೊಂದಲ ಇರಲ್ಲ. ಈಗಲೂ ಕೂಡ ಯಾವುದೇ ಗೊಂದಲ ಇಲ್ಲ. ಹಿಂದೆಯೂ ಇರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಶಾಸಕರು ದೆಹಲಿಗೆ ಹೋಗಿದ್ದೇಕೆ? ಸಿದ್ದರಾಮಯ್ಯ ಸ್ಪಷ್ಟನೆ

ನಾನು ಸಂಪುಟ ಪುನಾರಚನೆ ಮಾಡುತ್ತೇನೆ ಎಂದು ಹೇಳಿದ್ದೆ. ಹಾಗಾಗಿ ಕೆಲ ಶಾಸಕರು ಮಂತ್ರಿ ಮಾಡಿ ಎಂದು ದೆಹಲಿಗೆ ಹೋಗಿದ್ದರು. ನಾಯಕತ್ವದ ವಿರುದ್ಧವಾಗಿ ಶಾಸಕರು ದೆಹಲಿಗೆ ಹೋಗಿರಲಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಶಾಸಕರು ಹಾಗೂ ಸಚಿವರು ಸರ್ಕಾರದ ವಿರುದ್ಧ ಇಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವಿಬ್ಬರೂ ಬದ್ಧ. ಹೈಕಮಾಂಡ್ ಏನು ಹೇಳುತ್ತೋ ಅದನ್ನು ಒಪ್ಪಿಕೊಳ್ಳುತ್ತೇವೆ. ಹೈಕಮಾಂಡ್​ ಹೇಳಿದ್ದರಿಂದ ಮಾತುಕತೆ ಮಾಡಿದ್ದೇವೆ. ಹೈಕಮಾಂಡ್​ಗೆ ಸಭೆಯ ಮಾಹಿತಿ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಡಿಕೆ ಶಿವಕುಮಾರ್ ಹೇಳಿದ್ದೇನು?

ರಾಜ್ಯದ ಜನ ನಮ್ಮ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ವಿಧಾನಸಭೆ ಅಧಿವೇಶನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇನೆ. ನಮ್ಮದು ಒಂದೇ ಗುಂಪು, ಹೈಕಮಾಂಡ್ ಗುಂಪು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​​ಕ್ಲೂಸಿವ್ ದೃಶ್ಯ ಇಲ್ಲಿದೆ ನೋಡಿ

ನಾನು, ಸಿಎಂ ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ತುಸು ದುರ್ಬಲವಾಗಿದೆ ನಮಗೆ ಗೊತ್ತು. ಆದರೆ ಕರ್ನಾಟಕದಲ್ಲಿ ಹಾಗಿಲ್ಲ. 2028ಕ್ಕೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಕಾರ್ಯಕ್ರಮ ರೂಪಿಸಿದ್ದೇವೆ. ಅದಕ್ಕಾಗಿ ಒಮ್ಮತದಿಂದ ಆಡಳಿತ ಮಾಡಿಕೊಂಡು ಹೋಗುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುತ್ತೇವೆ: ಸಿದ್ದರಾಮಯ್ಯ

ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಸರ್ಕಾರದ ವಿರುದ್ಧ ಅವಿಶ್ವಾಸ ನಿಲುವಳಿ ಮಂಡಿಸುತ್ತೇವೆ ಎಂದು ಪ್ರತಿಪಕ್ಷ ನಾಯಕರು ಹೇಳುತ್ತಿದ್ದಾರೆ. ಅದು ಅಸಾಧ್ಯ. ಪ್ರತಿಪಕ್ಷಗಳನ್ನು ವಿಧಾನಸಭೆ ಅಧಿವೇಶನದಲ್ಲಿ ಸಮರ್ಥವಾಗಿ ಎದುರಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Sat, 29 November 25