ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಗೆ ಚಿಂತನೆ; ಸಿಎಂ ಸಿದ್ದರಾಮಯ್ಯ

|

Updated on: Aug 22, 2023 | 3:24 PM

ಜಾತಿ, ಧರ್ಮದ ಭೇದವಿಲ್ಲದೇ ಸರ್ಕಾರದ ಅಧೀನದಲ್ಲಿರುವ ಪದವಿ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಬೇಕು. ಮುಂದಿನ ದಿನಗಳಲ್ಲಿ ನಾವು ಇದಕ್ಕಾಗಿ ಯೋಜನೆಯನ್ನು ಸಿದ್ಧಪಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಗೆ ಚಿಂತನೆ; ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us on

ಬೆಂಗಳೂರು, ಆಗಸ್ಟ್ 22: ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ (Laptop) ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೇ ವೇಳೆ, ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಕೆಲ ಸಮಯದ ಹಿಂದೆ ಸ್ಥಗಿತಗೊಂಡಿದ್ದು, ಅದನ್ನು ಪುನರಾರಂಭಿಸುವಂತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಪರಿಶಿಷ್ಟ ಜಾತಿ ಉಪ ಯೋಜನೆಯಡಿ (SCSP) ಎಸ್‌ಸಿ ವಿದ್ಯಾರ್ಥಿಗಳಿಗೆ ಮತ್ತು ಬುಡಕಟ್ಟು ಉಪ ಯೋಜನೆ (TSP) ಅಡಿಯಲ್ಲಿ ಎಸ್‌ಟಿ ಸಮುದಾಯದವರಿಗೆ ಲ್ಯಾಪ್‌ಟಾಪ್ ವಿತರಿಸಲು ತಿಳಿಸಿದರು. ಇದಕ್ಕಾಗಿ 230 ಕೋಟಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ಸೂಚಿಸಿದರು.

ಜಾತಿ, ಧರ್ಮದ ಭೇದವಿಲ್ಲದೇ ಸರ್ಕಾರದ ಅಧೀನದಲ್ಲಿರುವ ಪದವಿ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಬೇಕು. ಮುಂದಿನ ದಿನಗಳಲ್ಲಿ ನಾವು ಇದಕ್ಕಾಗಿ ಯೋಜನೆಯನ್ನು ಸಿದ್ಧಪಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ಶೇ 50ರಷ್ಟು ಹುದ್ದೆಗಳು ಖಾಲಿ ಇವ. ಒಟ್ಟು 1,882 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ವಿಶ್ವವಿದ್ಯಾಲಯಗಳು 2,865 ಅತಿಥಿ ಉಪನ್ಯಾಸಕರಿಗೆ ವೇತನ ಮತ್ತು ನಿವೃತ್ತ ನೌಕರರಿಗೆ ಪಿಂಚಣಿಯನ್ನು ಅವರಿಗೆ ಮೀಸಲಿಟ್ಟ ಹಣದಿಂದ ಪಾವತಿಸಬೇಕಿದೆ. ಇದರಿಂದ ನಮ್ಮ ಮೇಲೆ ಆರ್ಥಿಕ ಹೊರೆ ಹೆಚ್ಚಿದೆ ಎಂದು ಕೆಲವು ಉಪಕುಲಪತಿಗಳು ಸಿದ್ದರಾಮಯ್ಯ ಅವರಿಗೆ ತಿಳಿಸಿದರು. ಈ ಬಾರಿಯ ಬಜೆಟ್‌ನಲ್ಲಿ ವಿಶ್ವವಿದ್ಯಾಲಯಗಳಿಗೆ 5,470 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದನ್ನು ಉಲ್ಲೇಖಿಸಿದ ಅವರು, 2,474 ಕೋಟಿ ರೂ.ಗಳ ಹೆಚ್ಚುವರಿ ಅನುದಾನದ ಅಗತ್ಯವನ್ನು ಒತ್ತಿ ಹೇಳಿದರು ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ: ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು ಎಂದ ಸಿದ್ದರಾಮಯ್ಯ

ಒಟ್ಟು ದಾಖಲಾತಿ ಅನುಪಾತ ಹೆಚ್ಚಿಸಲು ಸಿಎಂ ಸೂಚನೆ

ವಿಶ್ವವಿದ್ಯಾಲಯಗಳಿಗೆ ಹಂಚಿಕೆ ಮಾಡಲಾದ ಮೊತ್ತದ ಶೇ 88 ಕ್ಕಿಂತ ಹೆಚ್ಚು ಸಂಬಳಕ್ಕಾಗಿ ಖರ್ಚು ಮಾಡಲಾಗಿದೆ. ಹೀಗಾದರೆ ವಿಶ್ವವಿದ್ಯಾಲಯಗಳು ಹೊಸ ಉಪಕ್ರಮಗಳನ್ನು ಕೈಗೊಳ್ಳುವುದುನ್ನು ಹೇಗೆ ನಿರೀಕ್ಷಿಸಬಹುದು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ನೆರವಾಗುವಂಥ ಶಿಕ್ಷಣ ನೀಡುವತ್ತ ವಿಶ್ವವಿದ್ಯಾಲಯಗಳು ಗಮನಹರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಇದೇ ವೇಳೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಒಟ್ಟು ದಾಖಲಾತಿ ಅನುಪಾತ ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಉಪಕುಲಪತಿಗಳಿಗೆ ಸಿದ್ದರಾಮಯ್ಯ ಸೂಚಿಸಿದರು. ವಿದ್ಯಾರ್ಥಿಗಳ ದಾಖಲಾತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುವಂತೆ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ