ಕರ್ನಾಟಕದ ಪಾಲಿನ ಹಣ ನೀಡದ ಕೇಂದ್ರದ ವಿರುದ್ಧ ದೆಹಲಿಯಲ್ಲಿ ಧರಣಿ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ ಘೋಷಣೆ

| Updated By: ಗಣಪತಿ ಶರ್ಮ

Updated on: Feb 05, 2024 | 12:58 PM

Siddaramaiah, DK Shivakumar Joint Pressmeet: ಕರ್ನಾಟಕದ ಪಾಲಿನ ಹಣ ನೀಡದ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯ ಜಂತರ್​​ ಮಂತರ್​ನಲ್ಲಿ ಫೆಬ್ರವರಿ 7ರಂದು ಧರಣಿ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಪಾಲಿನ ಹಣ ನೀಡದ ಕೇಂದ್ರದ ವಿರುದ್ಧ ದೆಹಲಿಯಲ್ಲಿ ಧರಣಿ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿಕೆ ಶಿವಕುಮಾರ್
Follow us on

ಬೆಂಗಳೂರು, ಫೆಬ್ರವರಿ 5: ಕರ್ನಾಟಕ ರಾಜ್ಯದ (Karnataka) ಪಾಲಿನ ಹಣವನ್ನು ಕೇಂದ್ರ ಸರ್ಕಾರ ನೀಡಬಹುದು ಎಂಬ ವಿಶ್ವಾಸವಿತ್ತು. ಆದರೆ, ಕೇಂದ್ರ ಸರ್ಕಾರವು ಅದರ ಮಾನದಂಡದಂತೆ ಕೂಡ ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆರೋಪಿಸಿದರು. ಈ ಕಾರಣಕ್ಕಾಗಿ ದೆಹಲಿಯ ಜಂತರ್​ ಮಂತರ್​​ನಲ್ಲಿ ಇಡೀ ಕರ್ನಾಟಕ ಸರ್ಕಾರ ಧರಣಿ ನಡೆಸಲಿದೆ ಎಂದು ಉಭಯ ನಾಯಕರು ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ನಾವು ಧ್ವನಿ ಎತ್ತಲೇಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.

ದೆಹಲಿಯಲ್ಲಿ ನಮ್ಮ ಇಡೀ ಸರ್ಕಾರ ಪ್ರತಿಭಟನೆ ಮಾಡಲಿದೆ. ಈ ಪ್ರತಿಭಟನೆಯಲ್ಲಿ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ಸಂಸದರು ಕೂಡ ಭಾಗಿಯಾಗಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಬರಗಾಲದ ಪರಿಹಾರ ಹಣವನ್ನೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದರು.

ಪ್ರಧಾನಿ ಮೋದಿಯ ಅಣಕಿಸಿದ ಸಿದ್ದರಾಮಯ್ಯ

ಜಂಟಿ ಪತ್ರಿಕಾಗೋಷ್ಠಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿದ ಸಿದ್ದರಾಮಯ್ಯ, ಮೋದಿ ಸುಳ್ಳುಗಳಿಗೆ ನೀವು ಯಾರು ದಾರಿ ತಪ್ಪಲ್ಲ ಎಂಬುದಾಗಿ ನಂಬಿಕೆ ಇಟ್ಟುಕೊಂಡಿದ್ದೇನೆ. 4,530 ಕೋಟಿ ರೂಪಾಯಿ ಹಣ ಈಗ ಶಕ್ತಿ ಯೋಜನೆಗೆ ಕೊಟ್ಟಿದ್ದೇವೆ ಎಂದರು. ‘ತಾಕತ್ ಇದ್ರೆ, ಧಮ್ ಇದ್ರೆ’ ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಇವೆಲ್ಲವೂ ಮಾಡೋಕೆ ದಮ್ಮು, ತಾಕತ್ ಬೇಡ. ರಾಜಕೀಯ ಇಚ್ಛಾಶಕ್ತಿ ಇರಬೇಕು. ನಮ್ಮದೇನಿದ್ದರೂ ಬಡವರ ಬಗ್ಗೆ ಬದ್ಧತೆ ಅಷ್ಟೇ. ದಮ್, ತಾಕತ್ ಏನಿದ್ದರೂ ಬಿಜೆಪಿಯವರದ್ದು ಎಂದು ಸಿದ್ದರಾಮಯ್ಯ ಹೇಳಿದರು.

ನಾವು ಬಡವರ ಪರ ಕೆಲಸ ಮಾಡುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಫೆಬ್ರವರಿ 7ಕ್ಕೆ ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ

ಕೇಂದ್ರ ಸರ್ಕಾರದ ವಿರುದ್ಧ ಈವರೆಗೆ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ನಾಳೆ ಸಂಜೆಯೇ ದೆಹಲಿಗೆ ಹೋಗುತ್ತೇವೆ, ನಾಡಿದ್ದು ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ಅಳವಡಿಸಿಕೊಂಡ ಬಳಿಕ ಒಕ್ಕೂಟ ವ್ಯವಸ್ಥೆ ಒಪ್ಪಿಕೊಂಡಿದ್ದೇವೆ. ರಾಜ್ಯಗಳಿಂದ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಹಣ ಹೋಗುತ್ತದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ಈ ಹಣ ರಾಜ್ಯಗಳಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

14ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 42ರಷ್ಟು ಹಣ ನೀಡಬೇಕು. 15ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ 41ರಷ್ಟು ಹಣ ನೀಡಬೇಕು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕವೇ ಈ ಆಯೋಗ ರಚನೆ ಆಗಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಕೇಂದ್ರದ ಅನ್ಯಾಯ ಪ್ರಶ್ನಿಸಲು ಬೊಮ್ಮಾಯಿಗೆ ಬಾಯಿಯೇ ಬರಲ್ಲ, ಅಶೋಕ್​ಗೆ ಗೊತ್ತೇ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 5498 ಕೋಟಿ ರೂಪಾಯಿ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ, ಇದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿದ್ದರು. ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಪೆರಿಫರಲ್‌ ರಿಂಗ್ ರಸ್ತೆಗೆ 3000 ಕೋಟಿ ರೂಪಾಯಿ ಹಾಗೂ ಜಲಮೂಲಗಳ ಅಭಿವೃದ್ಧಿಗೆ 3000 ಕೋಟಿ ನೀಡಬೇಕೆಂದು ಶಿಫಾರಸು ಮಾಡಲಾಗಿತ್ತು. ಒಟ್ಟು ಕೇಂದ್ರ ಸರ್ಕಾರದಿಂದ 11,495 ಕೋಟಿ ರೂಪಾಯಿ ರಾಜ್ಯಕ್ಕೆ ಬರಬೇಕಿತ್ತು. ಒಟ್ಟು 5 ವರ್ಷದಲ್ಲಿ 73 ಸಾವಿರ ಕೋಟಿ ನಮಗೆ ಕಡಿಮೆಯಾಗಿದೆ. ಬಳಿಕ ಜಿಎಸ್‌ಟಿ ವ್ಯವಸ್ಥೆ ಜಾರಿಯಾಯಿತು. ಜಿಎಸ್‌ಟಿಯಿಂದ ತೆರಿಗೆ ಹೆಚ್ಚಳವಾಗುತ್ತೆ. ರಾಜ್ಯಗಳಿಗೆ ನಷ್ಟವಾದ್ರೆ ಪರಿಹಾರ ರೂಪದಲ್ಲಿ ಹಣ ನೀಡ್ತೇವೆ ಎಂದಿದ್ರು. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡ್ತೇವೆ ಎಂದಿದ್ದರು. ಆದರೆ, ಬಿಡುಗಡೆ ಮಾಡಿಲ್ಲ. ಹಲವು ಬಾರಿ ಮನವಿ ಮಾಡಿದ್ರೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರದ ಗಮನ ಸೆಳೆಯಲು ನಾಡಿದ್ದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. 100 ರೂ. ತೆರಿಗೆ ಕಟ್ಟಿದರೆ ನಮಗೆ ಶೇ 12-13ರಷ್ಟು ವಾಪಸ್ ಬರುತ್ತಿದೆ. ಆದರೆ, ಕರ್ನಾಟಕಕ್ಕೆ ಅನ್ಯಾಯವಾಗಿಲ್ಲವೆಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತ್ಯೇಕ ರಾಷ್ಟ್ರ ವಿವಾದ ವಿಷಯಾಂತರ ಮಾಡಲು ಯತ್ನ: ಬಿಜೆಪಿ ಆರೋಪ

ಕೇಂದ್ರ ಬಜೆಟ್​ ಅನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದರು. ಇದು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದಲ್ಲದೆ, ವ್ಯಾಪಕ ವಿರೋಧವೂ ವ್ಯಕ್ತವಾಗಿದೆ. ಇದನ್ನು ವಿಷಯಾಂತರ ಮಾಡಲು ಕಾಂಗ್ರೆಸ್ ನಾಟಕ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:40 am, Mon, 5 February 24