ಮೈಸೂರು, ಸೆಪ್ಟೆಂಬರ್ 11: ಮೇಕೆದಾಟು ಅಣೆಕಟ್ಟೆ ನಿರ್ಮಾಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮಿಳುನಾಡು (Tamil Nadu) ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಕೇಂದ್ರದ ಬಿಜೆಪಿ ಸರ್ಕಾರ ವಿಳಂಬ ಮಾಡುತ್ತಿದೆ. ನೆರೆಯ ತಮಿಳುನಾಡು ಅನಗತ್ಯ ತೊಂದರೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ಒತ್ತಾಯಿಸುತ್ತಿದ್ದು, ಉಭಯ ರಾಜ್ಯಗಳ ನಡುವಿನ ಕಾವೇರಿ ಜಲ ವಿವಾದಕ್ಕೆ (Cauvery Water Dispute) ಇದೊಂದೇ ಪರಿಹಾರ ಎಂದು ಹೇಳಿದೆ.
ಮೇಕೆದಾಟು ಯೋಜನೆಗೆ ಕೇಂದ್ರದ ಬಿಜೆಪಿ ಸರಕಾರ ಅನುಮತಿ ನೀಡಿಲ್ಲ. ತಮಿಳುನಾಡು ಯೋಜನೆಗೆ ವಿರೋಧ ವ್ಯಕ್ತಪಡಿಸಲು ಕಾರಣಗಳಿಲ್ಲ. ಮೇಕೆದಾಟು ಯೋಜನೆಯ ಪ್ರದೇಶ ನಮ್ಮ ವ್ಯಾಪ್ತಿಯಲ್ಲಿದೆ. ತಮಿಳುನಾಡಿಗೆ 177.25 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಸಾಮಾನ್ಯ ವರ್ಷಗಳಲ್ಲಿ ಅವರಿಗೆ ಅಷ್ಟು ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಅದಕ್ಕೆ ತಕ್ಕುದಾದ ಸೂತ್ರವನ್ನು ಅನುಸರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕ ವಿಸ್ತೃತ ಯೋಜನಾ ವರದಿ ಸಲ್ಲಿಸಿದ್ದರೂ ಕೇಂದ್ರ ಅನುಮತಿ ನೀಡುತ್ತಿಲ್ಲ ಎಂದು ದೂರಿದ್ದಾರೆ.
ಅವರು (ಕೇಂದ್ರ) ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಅನುಮತಿ ನೀಡಲು ಸೂಚಿಸಬೇಕು. ಅದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ. ಆದರೆ ಕೇಂದ್ರ ಸರ್ಕಾರ ಅದನ್ನು ಮಾಡುತ್ತಿಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಕರ್ನಾಟಕವು ಅನಿವಾರ್ಯವಾಗಿ ತಮಿಳುನಾಡಿಗೆ ನೀರು ಬಿಡಬೇಕಾಗಿ ಬಂದಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಕಾರಣ ನೀರು ಬಿಡಲಾಗಿದೆ. ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವುದರ ಜತೆಗೆ ಮೈಸೂರು, ಬೆಂಗಳೂರು ಮತ್ತು ಇತರ ಹಲವಾರು ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸರ್ಕಾರವು ಬದ್ಧವಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸ್ಟಾಲಿನ್ ವಿರುದ್ಧ ಟೀಕೆ ಮಾಡಲಾಗದೆ ನಮ್ಮ ವಿರುದ್ಧ ಟೀಕೆ; ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ ವಾಗ್ದಾಳಿ
ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಬೆಳೆಗಳನ್ನು ಕೂಡ ಸಂರಕ್ಷಿಸಬೇಕಿದೆ. ನೀರು ಬಿಡುವಂತೆ ಪ್ರಾಧಿಕಾರ ಕೇಳಿದ್ದರಿಂದ ನೀರು ಬಿಟ್ಟಿದ್ದೇವೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸೆಪ್ಟೆಂಬರ್ 12 ರಂದು ರಾಜ್ಯವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ತನ್ನ ನಿಲುವನ್ನು ಮುಂದಿಡಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ