ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ಬೇಡ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಕಳೆದ ಕೆಲವು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿ ಹೇಳಿಕೆ ಮತ್ತು ಪ್ರತಿ ಹೇಳಿಕೆಗಳು ಕೇಳಿ ಬರುತ್ತಿವೆ. ಪಕ್ಷದ ಸಚಿವರು ಮತ್ತು ಶಾಸಕರು ಪರ ವಿರೋಧ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತಿದೆ ಎಂಬುದನ್ನು ಅರಿತಿರುವ ಸಿಎಂ ಸಿದ್ದರಾಮಯ್ಯ ಇದೀಗ ಡ್ಯಾಮೇಜ್ ಕಂಟ್ರೋಲ್ಗೆ ಅಖಾಡಕ್ಕೆ ಇಳಿದಿದ್ದಾರೆ.
ಬೆಂಗಳೂರು, ಜೂನ್ 27: ಕರ್ನಾಟಕದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿಕೆ ನೀಡಲು ಆರಂಭಿಸಿದ್ದ ಸಚಿವ ಕೆಎನ್ ರಾಜಣ್ಣ ಜತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತುಕತೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಸರ್ಕಾರ, ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡಲೇಬಾರದು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಗುದ್ದಾಟ ಜೋರಾದ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ, ಆರಂಭದಲ್ಲಿ ರಾಜಣ್ಣ ಹೆಚ್ಚುರಿ ಡಿಸಿಎಂ ಹುದ್ದೆ ಬಗ್ಗೆ ಮಾತನಾಡಿದ್ದರು. ನಂತರ ಕಾಂಗ್ರೆಸ್ ಶಾಸಕರು, ಸಚಿವರ ಹೇಳಿಕೆ, ಪ್ರತಿ ಹೇಳಿಕೆಗಳು ಮುಂದುವರಿದು ಗೊಂದಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೆಲ ನಾಯಕರು ಹೈಕಮಾಂಡ್ ಭೇಟಿಗಾಗಿ ದೆಹಲಿಗೂ ತೆರಳಿದ್ದರು.
ಡಿಕೆ ಶಿವಕುಮಾರ್ ಅಸಮಾಧಾನ
ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಸಚಿವರ ಹೇಳಿಕೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿಕೆ ಶಿವಕುಮಾರ್, ಯಾರು ಏನು ಬೇಕಾದರೂ ಹೇಳಲಿ, ಬಹಿರಂಗವಾಗಿ ಚರ್ಚಿಸಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಇದೆ, ಅವರು ಏನು ತೀರ್ಮಾನ ಮಾಡುತ್ತಾರೋ ಮಾಡಲಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಬಹಳ ಸಂತೋಷ. ಅದು ಕೂಡ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದರು.
ಡಿಕೆ ಶಿವಕುಮಾರ್ ಕಟ್ಟಿಹಾಕಲು ತಂತ್ರ?
ಹೆಚ್ಚುವರಿ ಡಿಸಿಎಂ ಬೇಕೆಬೇಕು ಎಂದು ಪಟ್ಟುಹಿಡಯುತ್ತಿರುವವರಲ್ಲಿ ಹೆಚ್ಚಿನವರು ಸಿಎಂ ಸಿದ್ದರಾಮಯ್ಯ ಆಪ್ತರೇ. ಹೀಗಾಗಿ ಡಿಕೆ ಶಿವಕುಮಾರ್ರನ್ನು ಕಟ್ಟಿಹಾಕಲು ಪಕ್ಷದ ಒಳಗೆಯೇ ನಡೆಯುತ್ತಿರುವ ತಂತ್ರಗಾರಿಕೆ ಇದು ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಪ್ತರೂ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ.
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಶುರುವಾಯ್ತು ಪ್ಲ್ಯಾನ್; ಹೆಚ್ಚುವರಿ ಡಿಸಿಎಂ ಆಗ್ರಹದ ಹಿಂದಿದೆ ಭರ್ಜರಿ ತಂತ್ರ!
ಕೆಪಿಸಿಸಿ ಅಧ್ಯಕ್ಷರಾಗಿದ್ದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಕಾಂಗ್ರೆಸ್ ಪದ್ಧತಿ. ಹೆಚ್ಚುವರಿ ಡಿಸಿಎಂ ಆಯ್ಕೆ ಮಾಡುವುದೇ ಆದರೆ ಡಿಕೆ ಶಿವಕುಮಾರ್ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ. ಆಮೇಲೆ ಹತ್ತು ಡಿಸಿಎಂ ಬೇಕಾದರೂ ಮಾಡಿಕೊಳ್ಳಿ ಎಂದು ಶಾಸಕ ಬಸವರಾಜ್ ಶಿವಗಂಗಾ ಬುಧವಾರ ಹೇಳಿದ್ದರು. ಇದರೊಂದಿಗೆ ಕಾಂಗ್ರೆಸ್ ನಾಯಕರ ವಾಗ್ಯುದ್ಧ ತಾರಕಕ್ಕೇರಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:29 pm, Thu, 27 June 24