ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆಗಸ್ಟ್ 3ರ ಗುರುವಾರ ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಲಿದ್ದಾರೆ. ಮೇ ತಿಂಗಳಲ್ಲಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿಯವರೊಂದಿಗೆ ಇದು ಮೊದಲ ಭೇಟಿಯಾಗಿದೆ. ಭಾರತೀಯ ಆಹಾರ ನಿಗಮ (FCI) ರಾಜ್ಯಕ್ಕೆ ಅಕ್ಕಿ ನಿರಾಕರಿಸುವುದು ಸೇರಿದಂತೆ ಹಲವು ವಿಷಯಗಳನ್ನು ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳ ಜತೆ ಪ್ರಸ್ತಾಪಿಸುವ ನಿರೀಕ್ಷೆಯಿದೆ.
ಅದೇ ದಿನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯ ರಾಜ್ಯದ ಪಾಲಿನ ವರ್ಗಾವಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಿಗೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಸ್ಥಿತಿಗತಿ ಕುರಿತು ಚರ್ಚೆ ನಡೆಸಲಿದ್ದಾರೆ.
ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್-ಆಟೋ, ಟ್ರ್ಯಾಕ್ಟರ್ಗೆ ನಿರ್ಬಂಧ: ಫಸ್ಟ್ ಸರ್ವಿಸ್ ರಸ್ತೆ ಸರಿ ಮಾಡಿ ಎಂದ ಸ್ಥಳೀಯರು
ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರೊಂದಿಗೆ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ವೇ ಹೆದ್ದಾರಿಯ ಸುರಕ್ಷತೆಯ ವಿಷಯವನ್ನು ಪ್ರಸ್ತಾಪಿಸುವುದಾಗಿ ಸಿದ್ದರಾಮಯ್ಯ ಜುಲೈ 29 ರಂದು ಹೇಳಿದ್ದರು. ಈ ಹೆದ್ದಾರಿಯಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ಅದು ಲೋಕಾರ್ಪಣೆಗೊಂಡಾಗಿನಿಂದ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಆಗಸ್ಟ್ 2 ರಂದು ದೆಹಲಿಗೆ ತೆರಳಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ