ಬೆಂಗಳೂರು, ಅಕ್ಟೋಬರ್ 20: ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕ್ರಮ ಕೈಗೊಂಡಿದ್ದಾರೆ. ಹೋರಾಟಗಾರರ ಮೇಲಿನ ಪ್ರಕರಣಗಳ ಕಡತವನ್ನು ಸಚಿವ ಸಂಪುಟ ಉಪ ಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಂಡು, ಸಚಿವ ಸಂಪುಟದಲ್ಲಿ ಚರ್ಚೆಗೆ ತರುವಂತೆ ಗೃಹ ಸಚಿವರಿಗೆ (Home Minister) ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಗಾಗಿ ನಡೆದಿದ್ದ ಹೋರಾಟಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ವಾಪಸ್ ಪಡೆಯುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.
ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ದಿನೇಶ ಗೂಳಿಗೌಡ ಮನವಿ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಪ್ರಕರಣಗಳನ್ನು ಹಿಂಪಡೆಯುವ ವಿಚಾರವಾಗಿ ಸಚಿವ ಸಂಪುಟ ಉಪ ಸಮಿತಿಯ ಮುಂದೆ ಕಡತ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಂತರ ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದಾರೆ.
ಹೋರಾಟವನ್ನು ನಿಯಂತ್ರಿಸುವುದಕ್ಕಾಗಿ ಹಿಂದಿನ ಬಿಜೆಪಿ ಸರ್ಕಾರವು ಹೋರಾಟಗಾರರು, ಮಾಜಿ ಶಾಸಕರು, ಶಾಸಕರು, ರೈತ ಹೋರಾಟಗಾರರು, ರಾಜಕೀಯ ನಾಯಕರು ಸೇರಿದಂತೆ ವಿವಿಧ ಮಂದಿಯ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್ ಮುಖಂಡರ ಮೇಲು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಇದರಿಂದಾಗಿ ಅನೇಕ ಮಂದಿ ವಿನಾಕಾರಣ ನ್ಯಾಯಾಲಯಗಳಲ್ಲಿ ಅಲೆದಾಡುವಂತೆ ಆಗಿದೆ. ಹೀಗಾಗಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಗೂಳಿಗೌಡ ಉಲ್ಲೇಖಿಸಿದ್ದರು.
ಇದನ್ನೂ ಓದಿ: ಚಿಕ್ಕಮಗಳೂರು: ಲಂಚಕ್ಕೂ ಟಿಪ್ಸ್ಗೂ ವ್ಯತ್ಯಾಸವಿದೆ, ನಾನು ದುಡ್ಡು ಕೊಟ್ಟೇ ಕೆಲ್ಸ ಮಾಡ್ಸೋದೆಂದ ಶಾಸಕ ಟಿಡಿ ರಾಜೇಗೌಡ
ಈ ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಕೂಡ ಸಿದ್ದರಾಮಯ್ಯ ಅನೇಕ ಪ್ರಕರಣಗಳನ್ನು ವಾಪಸ್ ಪಡೆಯಲು ಸೂಚಿಸಿದ್ದರು. ಪಿಎಫ್ಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಸೂಚಿಸಿದ್ದು ರಾಜಕೀಯವಾಗಿಯೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವನ್ನು ಮುಂದಿಟ್ಟುಕೊಂಡು ನಿರಂತರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿತ್ತು ಎಂಬುದು ಗಮನಾರ್ಹ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ