ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬಿಜೆಪಿ
ಅಮೆರಿಕ ಪ್ರವಾಸದ ವೇಳೆ ಅಲ್ಲಿನ ವಿವಿಯೊಂದರ ಸಂವಾದದಲ್ಲಿ ಮೀಸಲಾತಿ ರದ್ದು ಕುರಿತು ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಸೆ. 12 ರಂದು ರಾಜ್ಯ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದೆ.
ಬೆಂಗಳೂರು, ಸೆಪ್ಟೆಂಬರ್ 11: ಮೀಸಲಾತಿ ರದ್ದು ಕುರಿತು ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿರುವ ಹೇಳಿಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲು ಬಿಜೆಪಿ ಮುಂದಾಗಿದೆ.
ರಾಹುಲ್ ದೇಶದ ಜನರ ಕ್ಷಮೆ ಕೇಳಬೇಕು: ಸುನೀಲ್ ಕುಮಾರ್
ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿದ್ದು, ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟಿಸಲಿದೆ. ರಾಹುಲ್ ದೇಶದ ಜನರ ಕ್ಷಮೆ ಕೇಳಬೇಕು. ಕಾಂಗ್ರೆಸ್ ಮೀಸಲಾತಿ ವಿರೋಧಿ ವಿಚಾರ ಇಟ್ಟುಕೊಂಡು ಹೋರಾಟ. ರಾಹುಲ್ ಹೇಳಿಕೆಯಿಂದ ಎಸ್ಸಿ, ಎಸ್ಟಿ ಸಮುದಾಯ ಗಾಬರಿಯಾಗಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡುತ್ತೇವೆ: ಎನ್ ರವಿಕುಮಾರ್
ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು. ಖರ್ಗೆ, ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಮಾಡುತ್ತೇನೆ ಸಂವಿಧಾನ ರಕ್ಷಣೆ ಮಾಡುತ್ತೇವೆ, ಮೀಸಲಾತಿ ಉಳಿಸುತ್ತೇವೆ ಅಂದ್ರಲ್ಲಾ ಇದೇನಾ? ಎಸ್ಸಿ, ಎಸ್ಟಿಗಳನ್ನ ರಕ್ಷಣೆ ಮಾಡಬೇಕು. ಸಂವಿಧಾನ ಉಳಿಸಬೇಕು ಅಂತಿದ್ರಲ್ಲ. ರಾಹುಲ್ ಗಾಂಧಿ ಮೀಸಲಾತಿ ನಿಲ್ಲಿಸುತ್ತೇವೆ ಅಂತ ಹೇಳಿದ್ದಾರೆ. ನಾಳೆ ಮತ್ತು ನಾಡಿದ್ದು ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡುತ್ತೇವೆ. ಅಂಬೇಡ್ಕರ್ ಸೋಲಿಸಿದ್ದು ಇದೇ ಕಾಂಗ್ರೆಸ್ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಹಗರಣದಲ್ಲೂ ಪಾದಯಾತ್ರೆ ಮಾಡ್ತೇವೆ- ಛಲವಾದಿ ನಾರಾಯಣಸ್ವಾಮಿ
ರಾಹುಲ್ ಗಾಂಧಿ ಹೇಳಿಕೆಗೆ ಈಗಾಗಲೇ ಕರ್ನಾಟಕದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು, ಹಲವೆಡೆ ಪ್ರತಿಭಟನೆ ಮಾಡಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಮಾಡಿದ್ದು, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ನೇತೃತ್ವದಲ್ಲಿ ಧರಣಿ ಮಾಡಲಾಗಿದೆ. ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಿ ಬಂಧಿಸಲು ಆಗ್ರಹಿಸಲಾಗಿದೆ.
ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ
ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.