ವಿರೂಪಾಕ್ಷಪ್ಪ ಮಾಡಾಳ್‌ ಪುತ್ರನ ವಿರುದ್ಧ ಭ್ರಷ್ಟಾಚಾರ ಆರೋಪ: ಸಿಎಂ ಬೊಮ್ಮಾಯಿ ರಾಜಿನಾಮೆ ನೀಡುವಂತೆ ಸೂಟ್​ಕೇಸ್, ಗುಟ್ಕಾ ಬ್ಯಾಗ್​ ಹಿಡಿದು ಕೈ ಪ್ರತಿಭಟನೆ

|

Updated on: Mar 04, 2023 | 11:17 AM

ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಗರದ ರೇಸ್​ ಕೋರ್ಸ್​ ರಸ್ತೆಯ ಕಾಂಗ್ರೆಸ್​​ ಭವನದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರು: ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ (Madal Virupakshappa) ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ (Karnataka Congress) ನಾಯಕರು ನಗರದ ರೇಸ್​ ಕೋರ್ಸ್​ ರಸ್ತೆಯ ಕಾಂಗ್ರೆಸ್​​ ಭವನದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ವೇಳೆ ಪೋಸ್ಟರ್​, ಸೂಟ್​ಕೇಸ್, ಹಣವಿರುವ ಗುಟ್ಕಾ ಬ್ಯಾಗ್​, ನಕಲಿ ನೋಟ್​ ಪ್ರದರ್ಶಿಸಿ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ, ವಿಪಕ್ಷನಾಯಕ ಸಿದ್ದರಾಮಯ್ಯ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್​​ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಭಾಗಿಯಾಗಿದ್ದಾರೆ.

ಇನ್ನು ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಗೋಡೆಗಳ ಮೇಲೆ ಪೋಸ್ಟರ್​ ಅಂಟಿಸಿ ಕೈ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇಂದು (ಮಾ.4) ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರುದ್ಧ ಬಿಜೆಪಿಯ ರೋಲ್ ಕಾಲ್ “ಮಾಡೆಲ್” ವಿರೂಪಾಕ್ಷಪ್ಪ ಎಂಬ ಪೋಸ್ಟರ್​​ನ್ನು ರಾಮಲಿಂಗಾರೆಡ್ಡಿ ಅಂಟಿಸಿದ್ದಾರೆ.

ಹಾಗೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕ್ಷೇತ್ರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪೇ ಎಂಎಲ್ ಅಭಿಯಾನ ಆರಂಭಿಸಿದ್ದಾರೆ.

ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ: ಸುರ್ಜೆವಾಲ

ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ರಾಜ್ಯದಲ್ಲಿ ಇರುವುದು ಭ್ರಷ್ಟಾಚಾರದ ಸರ್ಕಾರ. ಪ್ರತಿಯೊಂದು ಕೆಲಸಕ್ಕೂ 40 ಪರ್ಸೆಂಟ್​​ ಕಮಿಷನ್ ಕೇಳುತ್ತಾರೆ. ರಾಜ್ಯದ ಜನರ ಹಣವನ್ನೂ ಲೂಟಿ ಮಾಡುತ್ತಿದ್ದಾರೆ. ಕಮಿಷನ್ ನೀಡಲಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಿಷನ್​ ಬಗ್ಗೆ ಪ್ರಧಾನಿ ಮೋದಿಗೆ ಕೆಂಪಣ್ಣ ದೂರು ನೀಡಿದ್ದಾರೆ. ಆದರೆ ಪ್ರಧಾನಿಗಳಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಅವರು ಶಾಸಕ ಮಾಡಾಳ್‌ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಆಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಎಲ್ಲ ಇಲಾಖೆಗಳಲ್ಲೂ ಲಂಚ, ಭ್ರಷ್ಟಾಚಾರ ತಾಂಡವವಾಡುತ್ತಿದೆ: ಕೃಷ್ಣ ಭೈರೇಗೌಡ

ಕರ್ನಾಟಕ ಜನರ ಆಸ್ತಿಯನ್ನು ಲೂಟಿ ಮಾಡುವ ಕೆಲಸ ನಡೆಯುತ್ತಿದೆ. ಎಲ್ಲ ಇಲಾಖೆಗಳಲ್ಲೂ ಲಂಚ, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ಮಾಡುತ್ತಿದೆ. ಬಿಜೆಪಿಯ ಎಲ್ಲ ಶಾಸಕರು, ಸಚಿವರ ಮನೆಗಳಲ್ಲಿ ಶೋಧ ಮಾಡಿ, ಕೋಟ್ಯಂತರ ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:01 am, Sat, 4 March 23