BS Yediyurappa: ಬಿಎಸ್ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪ; ವಿಚಾರಣೆ ಎರಡು ವಾರ ಮುಂದೂಡಿದ ಸುಪ್ರೀಂ ಕೋರ್ಟ್
ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಎರಡು ವಾರಗಳ ಕಾಲ ಮುಂದೂಡಿದೆ.

ನವದೆಹಲಿ: ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧದ ಭ್ರಷ್ಟಾಚಾರ (Corruption) ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಎರಡು ವಾರಗಳ ಕಾಲ ಮುಂದೂಡಿದೆ. ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 11ರಂದು ನಿಗದಿಪಡಿಸಿದೆ. ಬಿಎಸ್ವೈ ಮತ್ತು ಅವರ ಕುಟುಂಬದ ಕೆಲವು ಸದಸ್ಯರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಹಿಂದೆ ಫೆಬ್ರುವರಿಯಲ್ಲಿ ಕೂಡ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿತ್ತು.
ಬಿಎಸ್ವೈ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ. ಮತ್ತೊಂದು ದಿನ ವಿಚಾರಣೆ ನಡೆಸಲಾಗುವುದು ಅಥವಾ ಸಾಮಾನ್ಯ ವಿಚಾರಣಾ ಪಟ್ಟಿಯಲ್ಲಿ ದಾಖಲಿಸಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಇದೀಗ ವಿಚಾರಣೆ ಮುಂದೂಡಿರುವುದರಿಂ ಯಡಿಯೂರಪ್ಪ ಅವರಿಗೆ ತುಸು ನಿರಾಳತೆ ದೊರೆಯಲಿದೆ. ರಾಜ್ಯ ವಿಧಾನಸಭೆ ಚುನಾವಣೆ ಪ್ರಯುಕ್ತ ನಿರಂತರ ಪ್ರಚಾರದಲ್ಲಿ ಯಡಿಯೂರಪ್ಪ ತೊಡಗಿಕೊಂಡಿದ್ದಾರೆ.
ಇದನ್ನೂ ಓದಿ: ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆ ವಿಚಾರ: ನಾನು ಎಲ್ಲೂ ಹೋಗಲ್ಲ ಅಂತ ಗಂಡ-ಹೆಂಡತಿ ಕಾಲು ಹಿಡಿದಿದ್ದರು- ಯಡಿಯೂರಪ್ಪ
ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿ ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಎಸ್ವೈ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗೆ 2022ರ ಸೆಪ್ಟೆಂಬರ್ನಲ್ಲಿ ಆದೇಶ ನೀಡಿತ್ತು. ಕಾರ್ಯಕರ್ತ ಟಿ.ಜೆ. ಅಬ್ರಹಾಂ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ನೀಡಿತ್ತು.
ಈ ಹಿಂದೆ ವಿಚಾರಣೆಗೆ ಪೂರ್ವಾನುಮತಿ ಸಿಗದ ಕಾರಣ ವಿಚಾರಣಾ ನ್ಯಾಯಾಲಯವು ಇದೇ ಪ್ರಕರಣವನ್ನು ವಜಾಗೊಳಿಸಿತ್ತು. ಆದರೆ, ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್, ಮರು ವಿಚಾರಣೆಗೆ ಆದೇಶ ನೀಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:07 pm, Tue, 21 March 23
