ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ 413 ಮಂದಿಯಲ್ಲಿ ಕೊವಿಡ್ (Covid 19) ಸೋಂಕು ದೃಢಪಟ್ಟಿದ್ದು, ಕೊರೊನಾ ಸೋಂಕಿನಿಂದ (Coronavirus) ನಾಲ್ವರು ಮೃತಪಟ್ಟಿದ್ದಾರೆ. ಒಟ್ಟು 256 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 6896 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.39, ಸೋಂಕಿನಿಂದ ಸಾಯುವವರ ಸರಾಸರಿಯು ಶೇ 0.96 ಇದೆ. ರಾಜ್ಯದಲ್ಲಿ ಈವರೆಗೆ 29,97,246 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,52,101 ಮಂದಿ ಚೇತರಿಸಿಕೊಂಡಿದ್ದಾರೆ.
ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 212 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 185 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 5049 ಸಕ್ರಿಯ ಪ್ರಕರಣಗಳಿವೆ. ಈವರೆಗೆ 16,342 ಮಂದಿ ಮೃತಪಟ್ಟಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು ನಗರ 212, ಚಿಕ್ಕಬಳ್ಳಾಪುರ, ಕಲಬುರಗಿ, ಬಳ್ಳಾರಿ 1, ಚಿಕ್ಕಮಗಳೂರು, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಮಂಡ್ಯ 2, ಬೆಂಗಳೂರು ಗ್ರಾಮಾಂತರ 5, ಚಾಮರಾಜನಗರ 3, ದಕ್ಷಿಣ ಕನ್ನಡ 10, ಧಾರವಾಡ 18, ಹಾಸನ 11, ಹಾವೇರಿ 8, ಮೈಸೂರು 45, ಶಿವಮೊಗ್ಗ 33, ತುಮಕೂರು 30, ಉಡುಪಿ 19, ಉತ್ತರ ಕನ್ನಡ 6.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ಬೆಂಗಳೂರು ನಗರ 2, ಕೋಲಾರ 1, ಮೈಸೂರು 1.
ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾರ್ಗಸೂಚಿಯ ಪ್ರಮುಖ ಅಂಶಗಳಿವು.
1) ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ.
2) ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಲ್ಲಿ ಲಘು ಲಕ್ಷಣಗಳು ಕಂಡು ಬಂದಿವೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ.
3) ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಸೂಚನೆ.
4) ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್ಸಿಬಿಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲು ಸೂಚನೆ
5) ಕಟ್ಟುನಿಟ್ಟಿನ ಮುನ್ನೆಚ್ಚರಿಕೆಗೆ ಅಧಿಕಾರಿಗಳಿಗೆ ಸೂಚನೆ
6) ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೇಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸಲು ಸೂಚನೆ
7) ಒಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಲು ಸೂಚನೆ
8) ಸಿನಿಮಾ, ಮಾಲ್ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಲಸಿಕೆ ಪಡೆಯುವುದು ಕಡ್ಡಾಯ
9) ಸರ್ಕಾರಿ ನೌಕರರು ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ
10) ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಸಂಪೂರ್ಣ ಟೆಸ್ಟಿಂಗ್. 65 ವರ್ಷ ಮೇಲ್ಪಟ್ಟವರು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಪರೀಕ್ಷೆ
11) ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ
12) ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆ 500ಕ್ಕೆ ಸೀಮಿತ
13) ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ
14) ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. 1 ಲಕ್ಷ ಪರೀಕ್ಷೆಗಳನ್ನು ನಿರ್ವಹಿಸುವಷ್ಟು ಸಾಮರ್ಥ್ಯ ಬೆಳೆಸಿಕೊಳ್ಳಲು ಸೂಚಿಸಲಾಗಿದೆ. ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು
15) ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್, ಆಕ್ಸಿಜನ್ ಪ್ಲಾಂಟ್ಗಳನ್ನು ಸಜ್ಜುಗೊಳಿಸಲು ಸೂಚನೆ
16) ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲ ಜಾಗೃತಗೊಳಿಸಲು ಸೂಚನೆ
17) ಔಷಧಗಳ ಲಭ್ಯತೆ ಖಾತರಿಪಡಿಸಿಕೊಳ್ಳಲು ಆದೇಶ
18) ಸಂಪರ್ಕಿತರ ಪತ್ತೆಯ ಪ್ರಮಾಣ ಹೆಚ್ಚಿಸಲು ಸೂಚನೆ
19) ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಪ್ರಾರಂಭಿಸಲು ನಿರ್ಧಾರ
20) ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ಒಮಿಕ್ರಾನ್ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿಗಳಲ್ಲಿ ವೈರುಧ್ಯ ಕಂಡು ಬಂದಿರುವ ಕುರಿತು ಕೂಲಂಕಷ ತನಿಖೆ ನಡೆಸುವಂತೆ ಹೈ ಗ್ರೌಂಡ್ ಪೊಲೀಸರಿಗೆ ಸೂಚನೆ.
ಇದನ್ನೂ ಓದಿ: Omicron in India ಹೊಸ ಕೊವಿಡ್-19 ರೂಪಾಂತರಿ ಆತಂಕ; ಆರೋಗ್ಯದ ಕಾಳಜಿಗೆ ಇಲ್ಲಿದೆ ತಜ್ಞರ ಸಲಹೆ
ಇದನ್ನೂ ಓದಿ: Omicron: ಲಸಿಕೆ ಪಡೆಯದವರಿಗೆ ಸರ್ಕಾರಿ ಸೇವೆ ಕಟ್: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಕಠಿಣ ಎಚ್ಚರಿಕೆ