ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ
CP Yogeshwar resigns ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ವೇಳೆಯಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಜೆಡಿಎಸ್ ಬಿಜೆಪಿ ನಡುವೆ ಬಿರುಕು ಕಾಣಿಸಿಕೊಂಡಿದೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿಯ ಸಿಪಿ ಯೋಗೇಶ್ವರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿ, (ಅಕ್ಟೋಬರ್ 21): ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಸಂಬಂಧ ಜೆಡಿಎಸ್ ಬಿಜೆಪಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು (ಅಕ್ಟೋಬರ್ 21) ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ.
ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು, ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡದಿರಲು ನಿರ್ಧರಿಸಿದೆ. ಅಲ್ಲದೇ ಹೈಕಮಾಂಡ್ ಸಹ ಜೆಡಿಎಸ್ ಕ್ಷೇತ್ರವಾಗಿದ್ದರಿಂದ ಅವರಿಗೆ ಬಿಟ್ಟುಕೊಟ್ಟಿದೆ. ಇನ್ನು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿ ಸಹ ಸಿಪಿ ಯೋಗೇಶ್ವರ್ಗೆ ಆಫರ್ ನೀಡಿದ್ದರು. ಆದ್ರೆ, ಸಿಪಿ ಯೋಗೇಶ್ವರ್ ಜೆಡಿಎಸ್ನಿಂದ ಸ್ಪರ್ಧಿಸಲು ನಿರಾಕರಿಸಿದ್ದು, ಇದೀಗ ಬಿಜೆಪಿಯ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಖುದ್ದು ರಾಜೀನಾಮೆ ಪತ್ರ ಬರೆದು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ಚನ್ನಪಟ್ಟಣ ಉಪಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವೆ. ಈವರೆಗೆ ನಾನು ಯಾರೊಬ್ಬರ ಜೊತೆಗೂ ಸಂಪರ್ಕ ಮಾಡಿಲ್ಲ. ಸ್ವಇಚ್ಛೆಯಿಂದ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಉತ್ಸುಕನಾಗಿದ್ದೇನೆ. ಬಿಜೆಪಿ ನಾಯಕರು ನನಗೆ ಅವಕಾಶ ಮಾಡಿಕೊಡಬೇಕು. ನಾಳೆ ಏನಾಗುತ್ತದೆ ಎಂದು ಹೇಳಲು ಆಗಲ್ಲವೆಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ಇದೇ ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಆದ್ರೆ, ಇದುವರೆಗೂ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಯಾರು ಎನ್ನುವುದೇ ನಿಗೂಢವಾಗಿದೆ. ಇನ್ನು ಕಾಂಗ್ರೆಸ್ನಿಂದಲೂ ಅಭ್ಯರ್ಥಿ ಪ್ರಕಟವಾಗಿಲ್ಲ. ಹೀಗಾಗಿ ಯಾರು ಕಣಕ್ಕಿಳಿಯುತ್ತಾರೆ ಎನ್ನುವುದೇ ಕುತೂಹಲ ಮೂಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:42 pm, Mon, 21 October 24