AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ದಿನಗಳಲ್ಲಿ ರೈತರ ಖಾತೆಗಳಿಗೆ ವರ್ಗಾವಣೆಯಾಗಲಿದೆ ಬೆಳೆಹಾನಿ ಪರಿಹಾರದ ಮೊತ್ತ: ಸಚಿವ ಕೃಷ್ಣ ಬೈರೇಗೌಡ ಭರವಸೆ

ಕರ್ನಾಟಕದಲ್ಲಿ ಪ್ರವಾಹ ಪೀಡಿತ ರೈತರಿಗೆ ಬೆಳೆಹಾನಿ ಪರಿಹಾರಕ್ಕೆಂದು 2000 ಕೋಟಿ ರೂ. ನಿಗದಿ ಮಾಡಲಾಗಿದ್ದು, ವಿತರಣೆ ಪ್ರಕ್ರಿಯೆ ಆರಂಭಗೊಂಡಿದೆ. ಒಟ್ಟಾರೆ, 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದ್ದು, 30 ದಿನಗಳಲ್ಲಿ ನೇರ ಬ್ಯಾಂಕ್ ಖಾತೆಗೆ ವರ್ಗಾವಣೆ ಮೂಲಕ ಹಣ ಪಾವತಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.

30 ದಿನಗಳಲ್ಲಿ ರೈತರ ಖಾತೆಗಳಿಗೆ ವರ್ಗಾವಣೆಯಾಗಲಿದೆ ಬೆಳೆಹಾನಿ ಪರಿಹಾರದ ಮೊತ್ತ: ಸಚಿವ ಕೃಷ್ಣ ಬೈರೇಗೌಡ ಭರವಸೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Oct 09, 2025 | 8:09 AM

Share

ಬೆಂಗಳೂರು, ಅಕ್ಟೋಬರ್ 9: ಕರ್ನಾಟಕದಲ್ಲಿ (Karnataka) ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭಗೊಂಡಿದ್ದು, 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ. ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ನೇರ ವರ್ಗಾವಣೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 12.54 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದು, ರೈತರಿಗೆ ಪರಿಹಾರ ನೀಡಲು ಸರ್ಕಾರ ಸುಮಾರು 2,000 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ ಎಂದು ತಿಳಿಸಿದ್ದಾರೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್ ಮೊದಲ ವಾರದವರೆಗೆ, ಭಾರೀ ಮಳೆಯಿಂದಾಗಿ ಸುಮಾರು 5.29 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಈ ಬಗ್ಗೆ ಸಮೀಕ್ಷೆ ಮಾಡಿ ಮಾಹಿತಿ ಕಲೆಹಾಕಲಾಗಿದೆ. ಪರಹಾರದ ಮೊತ್ತ ಪಾವತಿಗೆ ಸಿದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಭೀಮಾ ಜಲಾನಯನ ಪ್ರದೇಶದಲ್ಲಿನ ಪ್ರವಾಹದೊಂದಿಗೆ ಸೆಪ್ಟೆಂಬರ್‌ನಲ್ಲಿಉತ್ತರ ಕರ್ನಾಟಕದ ಜಿಲ್ಲೆಗಳು ಸಂಕಷ್ಟಕ್ಕೆ ಸಿಲುಕಿದ್ದವು. ಎರಡನೇ ಸುತ್ತಿನ ಪ್ರವಾಹವು ಮುಖ್ಯವಾಗಿ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್‌ಗಳಷ್ಟು ಹೆಚ್ಚುವರಿ ಬೆಳೆ ನಷ್ಟಕ್ಕೆ ಕಾರಣವಾಯಿತು. ಈ ನಾಲ್ಕು ಜಿಲ್ಲೆಗಳಲ್ಲಿ ಜಂಟಿ ಕ್ಷೇತ್ರ ಸಮೀಕ್ಷೆಯನ್ನು ಪುನಃ ಮಾಡಿ ನಷ್ಟದ ಬಗ್ಗೆ ಲೆಕ್ಕಾಚಾರ ಪರಿಷ್ಕರಣೆ ಮಾಡುತ್ತೇವೆ. ಇದು ಸುಮಾರು 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸುಮಾರು 5.29 ಲಕ್ಷ ಹೆಕ್ಟೇರ್‌ಗಳ ಮೊದಲ ಸುತ್ತಿನ ಬೆಳೆ ನಷ್ಟಕ್ಕೆ ಪರಿಹಾರದ ಮೊತ್ತ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯ ಸರ್ಕಾರವು ತನ್ನ ಬೊಕ್ಕಸದಿಂದ ಪ್ರತಿ ಹೆಕ್ಟೇರ್‌ಗೆ 8,500 ರೂ.ಗಳನ್ನು ನೀಡುತ್ತಿದೆ. ಇದರಿಂದಾಗಿ ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್‌ಗೆ 17,000 ರೂ.ಗಳು, ನೀರಾವರಿ ಬೆಳೆಗಳಿಗೆ 25,500 ರೂ.ಗಳು ಮತ್ತು ದೀರ್ಘಕಾಲಿಕ ಬೆಳೆಗಳಿಗೆ 31,000 ರೂ.ಗಳು ಪಾವತಿಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಬೀದರ್​ನಲ್ಲಿ ಭಾರಿ ಮಳೆಗೆ ವ್ಯಾಪಕ ಬೆಳೆ ಹಾನಿ: ಪರಿಶೀಲನೆಗೆ ಪ್ರವಾಹದ ನೀರಿಗೆ ಇಳಿದೇ ಬಿಟ್ಟ ಶಾಸಕ ಶರಣು ಸಲಗರ!

ಇತ್ತೀಚೆಗೆ ಹಾನಿಗೊಳಗಾದ ಸುಮಾರು 7.24 ಲಕ್ಷ ಹೆಕ್ಟೇರ್ ಬೆಳೆಗಳಿಗೆ ಪಾವತಿ ಸುಮಾರು 10 ದಿನಗಳಲ್ಲಿ ಪ್ರಾರಂಭವಾಗಲಿದೆ. ಹೊಲಗಳಲ್ಲಿ ಜಂಟಿ ಸಮೀಕ್ಷೆ ಈಗಾಗಲೇ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ರಾಜ್ಯ ಸರ್ಕಾರವು ಆಧಾರ್ ಆಧಾರಿತ ನೇರ ನಗದು ವರ್ಗಾವಣೆಯನ್ನು ಅನುಸರಿಸುತ್ತಿದೆ. ಇದು ಸಂಪೂರ್ಣ ಪಾರದರ್ಶಕ ವ್ಯವಸ್ಥೆಯಾಗಿದೆ ಮತ್ತು ಅತ್ಯಂತ ತ್ವರಿತ ಪಾವತಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ