ನವದೆಹಲಿ, ಸೆ.12: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸದಂತೆ ರೈತರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಮತ್ತೆ ತಮಿಳುನಾಡಿಗೆ (Tamil Nadu) 15 ದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ (Karnataka) ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆದಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಿರುವುದು ಕರ್ನಾಟಕದಲ್ಲಿ ಅದರಲ್ಲೂ ಮಂಡ್ಯದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ಆದೇಶ ಹೊರಡಿಸುತ್ತಿದ್ದಂತೆ ಮಂಡ್ಯದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ. ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ಮುಂದುವರಿದಿದ್ದು, ಬೆಂಗಳೂರು, ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕುತ್ತಿದ್ದಾರೆ. CWRC ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ತಮಿಳುನಾಡಿಗೆ ನೀರು ಹರಿಸದಂತೆ ಸರ್ಕಾರ, ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸುತ್ತೇವೆ ಎಂದು ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ನಮ್ಮ ರಾಜ್ಯದ ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯಲು ನೀರಿಲ್ಲ. ಇಂತಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ನೀರು ಬಿಡಬಾರದು. ಸುಪ್ರೀಂಕೋರ್ಟ್ನಲ್ಲಿ ಸರ್ಕಾರ ಸಮರ್ಥವಾಗಿ ವಾದ ಮುಂದುವರಿಸಲಿ. ಕಾವೇರಿ ನೀರಿನ ವಿಚಾರದಲ್ಲಿ ನಾವು ರಾಜ್ಯ ಸರ್ಕಾರದ ಜತೆಗೆ ಇರುತ್ತೇವೆ ಎಂದರು.
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕು ನೀರು ಬಿಡಬಾರದು. ನೀರನ್ನು ಬಿಟ್ಟರೆ ನಾವು ಹೋರಾಟ ಮಾಡುತ್ತೇವೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ನಮ್ಮ ಜಲಾಶಯಗಳಲ್ಲಿ ನೀರಿಲ್ಲದೆ ಬರಿದಾಗಿದೆ. ಕುಡಿಯುವ ನೀರಿಗು ಸಮಸ್ಯೆ ಇದೆ. ನಮ್ಮ ರಾಜ್ಯದ ಎಂಪಿಗಳು ಇದನ್ನು ವಿರೋಧ ಮಾಡಬೇಕು. ನೀರನ್ನು ಬಿಟ್ಟರು ನಮಗೆ ನೀರು ಕೊಟ್ಟಿಲ್ಲ ಅಂತ ತಮಿಳುನಾಡು ಹೇಳುತ್ತದೆ. ಈ ರೀತಿಯ ವಾದ ತಮಿಳುನಾಡಿದ ಹೊಸದೇನಲ್ಲ. ಯಾವುದೇ ಕಾರಣಕ್ಕು ರಾಜ್ಯ ಸರ್ಕಾರ ನೀರನ್ನು ಬಿಡಬಾರದು. ಕೇಂದ್ರ ಇಲ್ಲಿಗೆ ತಜ್ಞರ ತಂಡ ಕಳುಹಿಸಲಿ. ಇಲ್ಲಿನ ಪರಿಸ್ಥಿತಿ ಅವಲೋಕನ ಮಾಡಲಿ. ರಾಜ್ಯ ಸರ್ಕಾರ ನೀರನ್ನು ಬಿಡುವ ಪ್ರಯತ್ನ ಮಾಡಿದ್ರೆ ನಾವು ಹೋರಾಟ ಮಾಡುತ್ತೇವೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:32 pm, Tue, 12 September 23