ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು (ಮೇ 19) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಶಾಲೆಗಳಿಗೆ (Schools) ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಇಂದು ಒಂದು ದಿನ ರಜೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇನ್ನು ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ. ಇಂದಿನಿಂದ 2 ದಿನ ಕರ್ನಾಟಕ ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಮಂಡ್ಯದಲ್ಲೂ ಶಾಲೆಗಳಿಗೆ ರಜೆ:
ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಕಾರಣ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಗನವಾಡಿಗಳಿಗೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಶ್ವಥಿ ಆದೇಶ ನೀಡಿದ್ದಾರೆ.
ಇನ್ನು ಮೈಸೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಡಿಡಿಪಿಐ ರಾಮಚಂದ್ರ ಮನವಿ ಮೇರೆಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ತಾಲೂಕಿನಾದ್ಯಂತ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Nawazuddin Siddiqui Birthday: ನವಾಜುದ್ದೀನ್ ಸಿದ್ದಿಕಿ ನಟನೆಯ ಈ ಕಿರುಚಿತ್ರಗಳನ್ನು ವೀಕ್ಷಿಸಿದ್ದೀರಾ? ಮಿಸ್ ಮಾಡಲೇಬೇಡಿ
ಶಾಲೆ ಜಲಾವೃತ:
ಚಿತ್ರದುರ್ಗ ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಧಾರಾಕಾರ ಮಳೆಯಾಗಿದೆ. ಪಿಳ್ಳೆಕೇರನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣ ಜಲಾವೃತವಾಗಿದೆ. ಬಿರುಗಾಳಿ, ಮಳೆಗೆ 2 ಮರಗಳು ನೆಲಕ್ಕುರುಳಿವೆ. ಶಿಕ್ಷಣ ಇಲಾಖೆ, ಜಿಲ್ಲಾಡಳಿತದ ನಿರ್ಲಕ್ಷ್ಯದ ಬಗ್ಗೆ ಜನರು ಕಿಡಿಕಾರಿದ್ದಾರೆ.
ಶಾಲೆ ಸಂಪರ್ಕ ರಸ್ತೆ ಕಡಿತಗೊಂಡು ಪರದಾಟ:
ಹಾಸನ: ಜಿಲ್ಲೆಯಲ್ಲಿ ಭಾರಿಗೆ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದ ಶಾಲೆ ಸಂಪರ್ಕ ರಸ್ತೆ ಕಡಿತಗೊಂಡು ವಿದ್ಯಾರ್ಥಿಗಳು ಪರದಾಡಿದ್ದಾರೆ. ರಸ್ತೆ ಕೆಸರು ಗದ್ದೆಯಂತಾಗಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಕಲ್ಲಾರೆಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆ ದುರಸ್ಥಿ ಮಾಡುವಂತೆ ಸ್ಥಳೀಯರು ಮನವಿ ಮಾಡಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ತಿರುಗಿ ನೋಡಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆ ಬಂದಾಗ ಸರಿಯಾದ ಉತ್ತರ ಕೊಡುತ್ತೇವೆ ಎಂದಿದ್ದಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:18 am, Thu, 19 May 22