ಮಂಗಳೂರು, ಜನವರಿ 17: ಬೀದರ್ ಎಟಿಎಂ ದರೋಡೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲದಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕೆಸಿ ರೋಡ್ನ ಕೋಟೆಕಾರು ಬ್ಯಾಂಕ್ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಹಾಡಹಗಲೇ ಬ್ಯಾಂಕ್ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ. ಚಿನ್ನ ಹಾಗೂ ನಗದು ಸೇರಿದಂತೆ ಬರೋಬ್ಬರಿ 10ರಿಂದ 12 ಕೋಟಿ ರೂ ನಷ್ಟು ನಾಲ್ಕೈದು ಚೀಲದಲ್ಲಿ ಹಣ ತುಂಬಿಕೊಂಡು ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ: ಬೀದರ್ ಶೂಟೌಟ್ ಆರೋಪಿಗಳಿಗಾಗಿ ತೀವ್ರ ಶೋಧ: ದರೋಡೆಕೋರರು ಹೈದರಾಬಾದ್ನಲ್ಲೇ ಇರುವ ಶಂಕೆ
ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಬ್ಯಾಂಕ್ಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಳ್ಳಾಲವು ಯುಟಿ ಖಾದರ್ ಅವರ ವಿಧಾನಸಭಾ ಕ್ಷೇತ್ರವಾಗಿದೆ.
ಬ್ಯಾಂಕ್ ದರೋಡೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಕೆಸಿ ರೋಡ್ನ ಕೋಟೆಕಾರು ಬ್ಯಾಂಕ್ನಲ್ಲಿ ಚಿನ್ನಾಭರಣ, ನಗದು ದರೋಡೆಯಾಗಿದೆ. ತಲ್ವಾರ್, ಗನ್ನಿಂದ ಬೆದರಿಸಿ ಬ್ಯಾಂಕ್ ದರೋಡೆ ಮಾಡಿದ ಮಾಹಿತಿ ದೊರೆತಿದೆ. ಜನಸಂದಣಿ ಕಡಿಮೆ ಇರುವ ಸಮಯದಲ್ಲೇ ದರೋಡೆ ನಡೆಸಿದ್ದಾರೆ. ಆರೋಪಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಖಾದರ್ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:15 pm, Fri, 17 January 25