ಮಂಗಳೂರು: ಡ್ರಗ್ಸ್ ಮಾರುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸಿಸಿಬಿ ಪೊಲೀಸರ ಸೆರೆಯಾಗಿದ್ದಾನೆ.
ಮಂಗಳೂರು, ಸೆ.26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು (Mangaluru) ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಸಿಸಿಬಿ ಪೊಲೀಸರ ಸೆರೆಯಾಗಿದ್ದಾನೆ.
ನಗರದ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕುಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ವಿದೇಶಿಯರು ಸೇರಿ 14 ಮಂದಿ ಅರೆಸ್ಟ್
ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಾದಕವಸ್ತು ಮಾರಾಟ ಸಂಬಂಧ ಜೈಲಿಗೆ ಹೋಗಿದ್ದ ಇಬ್ಬರು ಆರೋಪಿಗಳು ಜಾಮೀನಿನ ಮೂಲಕ ಜೈಲಿನಿಂದ ಹೊರಬಂದು ಮತ್ತೆ ಡ್ರಗ್ಸ್ ಮಾರಾಟದಲ್ಲಿ ತೊಡಗಿ ಜೈಲು ಪಾಲಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಈ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇದಕ್ಕೂ ಮುನ್ನ ಉಳ್ಳಾಲದ ಅಬ್ದುಲ್ ಸವಾಜ್ ಎಂಬಾತ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಈತನಿಂದ 1.25 ಲಕ್ಷ ಮೌಲ್ಯದ ಎಂಡಿಎಂಎ ಮಾದಕವಸ್ತು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ, ನಂತರ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ 9 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ ಮಾಡಲಾಗಿತ್ತು.
ನಗರದಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು, ಡ್ರಗ್ಸ್ ಮುಕ್ತ ಮಂಗಳೂರನ್ನಾಗಿಸಲು ಅಖಾಡಕ್ಕಿಳಿದಿದ್ದಾರೆ. ವಿದ್ಯಾರ್ಥಿಗಳು ಕೂಡ ಮಾದಕ ಲೋಕದಲ್ಲಿ ತೇಲಾಡುತ್ತಿರುವುದರಿಂದ ಶಾಲಾ ಕಾಲೇಜುಗಳಲ್ಲಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ